ಯಾದಗಿರಿ: ಉಸಿರಾಟದ ಸಮಸ್ಯೆಯಿಂದ ಬಳಲುತ್ತಿದ್ದ ವ್ಯಕ್ತಿ ಸಾವನ್ನಪ್ಪಿದ್ದು, ಇದಕ್ಕೆ ವೈದ್ಯರ ನಿರ್ಲಕ್ಷ್ಯವೇ ಕಾರಣ ಎಂದು ಕುಟುಂಬಸ್ಥರು ಆರೋಪಿಸಿರುವ ಘಟನೆ ನಡೆದಿದೆ.
ಹೀಗಾಗಿ ಕುಟುಂಬಸ್ಥರು ಯಾದಗಿರಿ ಜಿಲ್ಲಾಸ್ಪತ್ರೆ ಎದುರು ಶವವಿಟ್ಟು ವೈದ್ಯರ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಸೂಕ್ತ ಚಿಕಿತ್ಸೆ ಸಿಗದ ಹಿನ್ನೆಲೆಯಲ್ಲಿ ರೋಗಿಯು ನರಳಾಡಿ ಪ್ರಾಣ ಬಿಟ್ಟಿದ್ದಾನೆ. ಇದಕ್ಕೆ ವೈದ್ಯರೇ ಕಾರಣ ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.
ವಾಂತಿ ಮತ್ತು ಉಸಿರಾಟದ ತೊಂದರೆ ಅನುಭವಿಸುತ್ತಿದ್ದ ಯಾದಗಿರಿ ಜಿಲ್ಲೆಯ ಶಹಾಪುರ ತಾಲೂಕಿನ ವನದುರ್ಗ ಗ್ರಾಮದ ಭೀಮರಾಯ (60) ಸಾವನ್ನಪ್ಪಿದ ವ್ಯಕ್ತಿ. ಈ ವ್ಯಕ್ತಿಯನ್ನು ಮೊದಲು ತಾಲೂಕು ಆಸ್ಪತ್ರೆಗೆ ದಾಖಲಿಸಲಾಗಿತ್ತು. ನಂತರ ವೈದ್ಯರು, ಹೆಚ್ಚಿನ ಚಿಕಿತ್ಸೆಗೆ ಯಾದಗಿರಿ ಜಿಲ್ಲಾಸ್ಪತ್ರೆಗೆ ಕರೆದೊಯ್ಯಲು ಸೂಚನೆ ನೀಡಿದ್ದರು. ಹೀಗಾಗಿ ಕೂಡಲೋ ರೋಗಿಯನ್ನು ಜಿಲ್ಲಾಸ್ಪತ್ರೆಗೆ ದಾಖಲಿಸಲಾಗಿತ್ತು. ದಾಖಲಾಗಿ ಎರಡು ಗಂಟೆ ಕಳೆದರೂ ವೈದ್ಯರು ಚಿಕಿತ್ಸೆ ನೀಡಿಲ್ಲ. ಕಾಲಿಗೆ ಬಿದ್ದು ಅಂಗಲಾಚಿದರೂ ಚಿಕಿತ್ಸೆ ನೀಡದೆ ನಿರ್ಲಕ್ಷ್ಯ ತೋರಿದ್ದಾರೆ. ಹೀಗಾಗಿ ರೋಗಿ ನರಳಾಡಿ ಸಾವನ್ನಪ್ಪಿದ್ದಾನೆ ಎಂದು ಕುಟುಂಬಸ್ಥರು ಆರೋಪಿಸಿದ್ದಾರೆ.
ಜಿಲ್ಲಾಸ್ಪತ್ರೆ ವೈದ್ಯರ ನಡೆಗೆ ಸಾರ್ವಜನಿಕರು ಕೂಡ ಆಕ್ರೋಶ ಹೊರ ಹಾಕಿದ್ದು ಕುಟುಂಬಸ್ಥರು ಆಸ್ಪತ್ರೆ ವಿರುದ್ಧ ಕ್ರಮಕ್ಕೆ ಒತ್ತಾಯಿಸಿದ್ದಾರೆ.