ಕಲಬುರಗಿ : ಡಾ. ಬಿ.ಆರ್.ಅಂಬೇಡ್ಕರ್ ಬಗ್ಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ ನೀಡಿರುವ ಹೇಳಿಕೆ ಖಂಡಿಸಿ, ಸಂವಿಧಾನ ಉಳಿಸಿ ಹೋರಾಟ ಸಮಿತಿ ಮಂಗಳವಾರ ಕರೆ ನೀಡಿದ್ದ ಕಲಬುರಗಿ ಬಂದ್ ಯಶಸ್ವಿಯಾಗಿದೆ.
ಕೆಲವು ಕಡೆ ಸಣ್ಣಪುಟ್ಟ ಅಹಿತಕರ ಘಟನೆಗಳೊಂದಿಗೆ ಬಂದ್ ಯಶಸ್ವಿಯಾಗಿದೆ. ಬಸ್, ಆಟೋ ಸೇರಿದಂತೆ ವಾಹನಗಳು ರಸ್ತೆಗೆ ಇಳಿದಿರಲಿಲ್ಲ. ಅಂಗಡಿ- ಮುಂಗಟ್ಟು, ಹೋಟೆಲ್ ಗಳನ್ನು ಮುಚ್ಚಲಾಗಿತ್ತು. ಇದರಿಂದಾಗಿ ಜನ ಜೀವನ ಸಂಪೂರ್ಣ ಅಸ್ತವ್ಯಸ್ಥಗೊಂಡಿತ್ತು.
ವ್ಯಾಪಾರಿಗಳು ಬೆಂಬಲಕ್ಕೆ ಸಾಥ್ ನೀಡಿದ್ದರಿಂದಾಗಿ ಎಲ್ಲ ರೀತಿಯ ವ್ಯಾಪಾರ ವಹಿವಾಟು ಬಂದ್ ಆಗಿದ್ದವು. ನಗರದ ಪ್ರಮುಖ ರಸ್ತೆಗಳಲ್ಲಿ ಪ್ರತಿಭಟನಾಕರರು ಅಮಿತ್ ಶಾ ವಿರುದ್ಧ ಘೋಷಣೆ ಕೂಗಿ ಆಕ್ರೋಶ ವ್ಯಕ್ತಪಡಿಸಿದರು.
ಗಂಜ್ ಪ್ರದೇಶದ ನಗರೇಶ್ವರ ಶಾಲೆಯ ಬಳಿ ಸಾವಿರಾರು ಪ್ರತಿಭಟನಾಕಾರರು ಜಮಾವಣೆಗೊಂಡು ಅಮಿತ್ ಶಾ ರಾಜೀನಾಮೆಗೆ ಆಗ್ರಹಿಸಿದರು. ಕೇಂದ್ರ ಗೃಹ ಸಚಿವ ಅಮಿತ್ ಶಾ ಬಹಿರಂಗ ಕ್ಷಮೆ ಕೇಳಬೇಕು. ಅಲ್ಲದೇ, ಕೂಡಲೇ ಅವರನ್ನು ಸಂಪುಟದಿಂದ ವಜಾ ಮಾಡಬೇಕೆಂದು ಆಗ್ರಹಿಸಲಾಯಿತು.