ಮಂಡ್ಯ: ರಾಜಧಾನಿ ಬೆಂಗಳೂರು ಸೇರಿದಂತೆ ರಾಜ್ಯದಲ್ಲಿ ಈ ಬಾರಿ ಬರ ಆವರಿಸಿದೆ. ಪರಿಣಾಮ ಬೇಸಿಗೆಯಲ್ಲಿ ನೀರಿನ ಹಾಹಾಕಾರ ಉಂಟಾಗಿದೆ. ಆದರೂ ಕೃಷ್ಣರಾಜಸಾಗರ ಅಣೆಕಟ್ಟೆಯಿಂದ ತಮಿಳುನಾಡಿಗೆ ನೀರು ಬಿಡಲಾಗುತ್ತಿದೆ ಎಂದು ಆರೋಪಿಸಿ ರೈತ ಹಿತರಕ್ಷಣಾ ಸಮಿತಿ ಪ್ರತಿಭಟನೆ ನಡೆಸಿತ್ತು. ಇದಕ್ಕೆ ಉತ್ತರಿಸಿದ ಡಿಸಿಎಂ ಡಿಕೆಶಿ, ತಮಿಳುನಾಡಿಗೆ ನೀರು ಬಿಡುವ ಪ್ರಶ್ನೆಯೇ ಇಲ್ಲ ಎಂದು ಹೇಳಿದ್ದಾರೆ.
ಚುನಾವಣೆ ಹಿನ್ನೆಲೆಯಲ್ಲಿ ಡಿಸಿಎಂ ಡಿಕೆಶಿ ಸೇರಿದಂತೆ ಕಾಂಗ್ರೆಸ್ ನಾಯಕರು ಮೈಸೂರು ಜಿಲ್ಲೆಗೆ ಆಗಮಿಸಿದ್ದರು. ಈ ವೇಳೆ ರೈತ ಹಿತರಕ್ಷಣಾ ಸಮಿತಿ ಸದಸ್ಯರು ಪ್ರತಿಭಟನೆ ನಡೆಸಿದರು. ತಮಿಳುನಾಡಿಗೆ ನೀರು ಬಿಡದಂತೆ ಮನವಿ ಮಾಡಿದರು. ಈ ವೇಳೆ ಮಾತನಾಡಿದ ಡಿಸಿಎಂ, ಬರಗಾಲದಿಂದ ನಮ್ಮ ಜನರಿಗೆ ನೀರು ಕೊಡುವುದು ಕಷ್ಟವಾಗಿದೆ. ಹೀಗಾಗಿ ತಮಿಳುನಾಡಿಗೆ ನೀರು ಬಿಡುವ ಪ್ರಶ್ನೆಯೇ ಇಲ್ಲ. ಬಿಜೆಪಿ ಮತ್ತು ಜೆಡಿಎಸ್ ನಾಯಕರು ಇಂತಹ ಹೇಳಿಕೆ ನೀಡುವ ಮೂಲಕ ಜನರ ಮನಸ್ಸನ್ನು ಬೇರೆಡೆ ಸೆಳೆಯುತ್ತಿದ್ದಾರೆ. ಸದ್ಯದ ಸ್ಥಿತಿಯಲ್ಲಿ ಯಾವುದೇ ಕಾರಣಕ್ಕೂ ತಮಿಳುನಾಡಿಗೆ ನೀರು ಬಿಡುವುದಿಲ್ಲ ಎಂದು ಹೇಳಿದ್ದಾರೆ.