ತುಮಕೂರು: ಎಸ್ಸೆಸ್ಸೆಲ್ಸಿ ಪರೀಕ್ಷೆ ಬರೆಯುತ್ತಿದ್ದ ಸಂದರ್ಭದಲ್ಲಿ ಅಸ್ವಸ್ಥಗೊಂಡ ವಿದ್ಯಾರ್ಥಿ ಸಾವನ್ನಪ್ಪಿರುವ ಘಟನೆ ನಡೆದಿದೆ.
ತುಮಕೂರಿನ ತುರುವೇಕೆರೆ ಪಟ್ಟಣದ ದಬ್ಬೇಘಟ್ಟ ರಸ್ತೆಯಲ್ಲಿನ ಸರಸ್ವತಿ ಬಾಲಕರ ಪ್ರೌಢಶಾಲಾ ಪರೀಕ್ಷಾ ಕೇಂದ್ರದಲ್ಲಿ ಈ ಘಟನೆ ನಡೆದಿದೆ. ಮೋಹನ್ ಕುಮಾರ್ ಸಿ.ಎಸ್ (16) ಸಾವನ್ನಪ್ಪಿದ ವಿದ್ಯಾರ್ಥಿ. ತುರುವೇಕೆರೆ ಪಟ್ಟಣದ ದಬ್ಬೇಘಟ್ಟ ರಸ್ತೆಯಲ್ಲಿನ ಸರಸ್ವತಿ ಬಾಲಕರ ಪ್ರೌಢಶಾಲಾ ಪರೀಕ್ಷಾ ಕೇಂದ್ರದಲ್ಲಿ ಪರೀಕ್ಷೆ ಬರೆಯುತ್ತಿದ್ದ ಸಂದರ್ಭದಲ್ಲಿ ಅಸ್ವಸ್ಥಗೊಂಡಿದ್ದಾನೆ. ಆತನನ್ನು ಆಸ್ಪತ್ರೆಗೆ ಸಾಗಿಸಲಾಗುತ್ತಿತ್ತು. ಆದರೆ, ಅದೃಷ್ಟವಶಾತ್ ಮಾರ್ಗ ಮಧ್ಯೆ ಸಾವನ್ನಪ್ಪಿದ್ದಾನೆ.
ಚಿಕ್ಕನಾಯಕನಹಳ್ಳಿ ತಾಲ್ಲೂಕಿನ ಚಿಕ್ಕರಾಂಪುರ ನಿವಾಸಿ ಸಿದ್ದೇಶ್ ಅವರ ಮಗ ಮೋಹನ್ ಕುಮಾರ್, ತುರುವೇಕೆರೆ ತಾಲ್ಲೂಕಿನ ಲೋಕಮ್ಮನಹಳ್ಳಿ ಗೇಟ್ ಹತ್ತಿರ ಕಂಚಿರಾಯ ಸನಿವಾಸ ಪ್ರೌಢ ಶಾಲೆಯಲ್ಲಿ 10 ತರಗತಿ ಓದುತ್ತಿದ್ದ. ಪರೀಕ್ಷೆ ಬರೆಯುತ್ತಿದ್ದ ವೇಳೆ ಮೋಹನ್ ಕುಮಾರ್ ಅಸ್ವಸ್ಥಗೊಂಡಿದ್ದಾನೆ. ಕೂಡಲೇ ಪಟ್ಟಣದ ಸಾರ್ವಜನಿಕ ಆಸ್ಪತ್ರೆಯಲ್ಲಿ ಪ್ರಥಮ ಚಿಕಿತ್ಸೆ ಕೊಡಿಸಲಾಗಿದ್ದು, ತುಮಕೂರು ಜಿಲ್ಲಾಸ್ಪತ್ರೆಗೆ ಕರೆದೊಯ್ಯವಂತೆ ವೈದ್ಯರು ಸೂಚಿಸಿದ್ದಾರೆ. ಅಂಬ್ಯುಲೆನ್ಸ್ನಲ್ಲಿ ತುಮಕೂರು ಜಿಲ್ಲಾಸ್ಪತ್ರೆಗೆ ಸಾಗಿಸುವ ಸಂದರ್ಭದಲ್ಲಿ ಆತ ಸಾವನ್ನಪ್ಪಿದ್ದಾನೆ.