ಬೆಂಗಳೂರು : ಧಾರ್ಮಿಕ ದತ್ತಿ ಇಲಾಖೆಯ ವ್ಯಾಪ್ತಿಗೆ ಒಳಪಡುವ ರಾಜ್ಯದ ಎಲ್ಲಾ ಅಧಿಸೂಚಿತ ದೇವಾಲಯಗಳಲ್ಲಿ ದೀಪಾವಳಿ (ಬಲಿಪಾಡ್ಯಮಿ) ದಿನದಂದು ಗೋಪೂಜೆ ಕಾರ್ಯಕ್ರಮವನ್ನು ನಡೆಸಲು ಮುಜರಾಯಿ ಇಲಾಖೆ ಸೂಚನೆ ನೀಡಿದೆ.

ಈ ಸಂಬಂಧ ಸುತ್ತೋಲೆ ಹೊರಡಿಸಿರುವ ಧಾರ್ಮಿಕ ದತ್ತಿ ಇಲಾಖೆ, ರಾಜ್ಯದ ಮುಜರಾಯಿ ಅಧಿಸೂಚಿತ ದೇವಾಲಯಗಳಲ್ಲಿ ಬಲಿಪಾಡ್ಯಮಿ ದಿನದಂದು ಗೋಪೂಜೆ ಕಾರ್ಯಕ್ರಮ ಆಚರಿಸುವ ಬಗ್ಗೆ ಮುಜರಾಯಿ ಸಚಿವ ರಾಮಲಿಂಗಾ ರೆಡ್ಡಿ ಅವರು ಮೌಖಿಕ ನಿರ್ದೇಶನ ನೀಡಿದ್ದಾರೆ ಎಂದು ತಿಳಿಸಿದೆ.

ಹಿಂದೂ ಧರ್ಮದಲ್ಲಿ ಗೋವಿಗೆ ಗೋಮಾತೆ ಎಂಬ ಹೆಸರಿನಿಂದ ವಿಶೇಷ ಸ್ಥಾನಮಾನ ನೀಡಿ ಪೂಜಿಸಲಾಗುತ್ತಿದೆ. ಈ ಹಿನ್ನೆಲೆಯಲ್ಲಿ ಧಾರ್ಮಿಕ ಮತ್ತು ಸಾಂಸ್ಕೃತಿಕ ಪರಂಪರೆಯ ಅವಿಭಾಜ್ಯ ಅಂಗವಾದ ಗೋವುಗಳ ಮಹತ್ವ ಮತ್ತು ಸಂರಕ್ಷಣೆಯ ಬಗ್ಗೆ ಜಾಗೃತಿ ಮೂಡಿಸಬೇಕಾಗಿದ್ದು, ಬಲಿಪಾಡ್ಯಮಿಯಂದು ಗೋವುಗಳಿಗೆ ಸ್ನಾನ ಮಾಡಿಸಿ, ಅರಿಶಿನ, ಕುಂಕುಮ ಹಾಗು ಹೂವುಗಳಿಂದ ಅಲಂಕರಿಸಿ ಅಕ್ಕಿ, ಬೆಲ್ಲ, ಹಣ್ಣು ಮುಂತಾದ ಗೋಗ್ರಾಸವನ್ನು ನೀಡಿ ಸಂಜೆ ಗೋಪೂಜೆ ಕಾರ್ಯಕ್ರಮವನ್ನು ಯಶಸ್ವಿಗೊಳಿಸುವಂತೆ ತಿಳಿಸಲಾಗಿದೆ.