ಧಾರವಾಡ: ಖ್ಯಾತ ಸಾಹಿತಿ ಗುರುಲಿಂಗ ಕಾಪಸೆ(96) ಇಹಲೋಕ ತ್ಯಜಿಸಿದ್ದಾರೆ.
ವಯೋಸಹಜ ಕಾಯಿಲೆಯಿಂದಾಗಿ ಬಳಲುತ್ತಿದ್ದ ಅವರು ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು. ಆದರೆ, ಚಿಕಿತ್ಸೆ ಫಲಕಾರಿಯಾಗದೆ ಸಾವನ್ನಪ್ಪಿದ್ದಾರೆ. ಸಾಹಿತಿಯಾಗಿದ್ದ ಗುರುಲಿಂಗ ಕಾಪಸೆ ಮೂಲ ಊರು ವಿಜಯಪುರ ಜಿಲ್ಲೆ ಇಂಡಿ ತಾಲೂಕಿನ ಲೋಣಿ ಬಿಕೆ ಗ್ರಾಮ. ಅವರು ಸದ್ಯ ಧಾರವಾಡದ ಸಪ್ತಾಪುರ ದುರ್ಗಾ ಕಾಲೋನಿಯಲ್ಲಿ ನೆಲೆಸಿದ್ದರು. ಕನ್ನಡ ಸಾಹಿತ್ಯ ಅಕಾಡೆಮಿ ಅಧ್ಯಕ್ಷರಾಗಿ ಕಾರ್ಯ ನಿರ್ವಹಿಸಿದ್ದರು.
ಇಂದು ಮಧ್ಯಾಹ್ನ 2ರವರೆಗೆ ದುರ್ಗಾ ಕಾಲೋನಿಯ ನಿವಾಸದಲ್ಲಿ ಅಂತಿಮ ದರ್ಶನಕ್ಕೆ ವ್ಯವಸ್ಥೆ ಮಾಡಲಾಗಿದೆ. ಗುರುಲಿಂಗ ಕಾಪಸೆ ಇಬ್ಬರು ಪುತ್ರರು, ಇಬ್ಬರು ಪುತ್ರಿಯರು, ಅಪಾರ ಅಭಿಮಾನಿ ಬಳಗ ಅಗಲಿದ್ದಾರೆ. ಅವರು ಮಕ್ಕಳ ಸಾಹಿತ್ಯದಲ್ಲಿ ಅನೇಕ ಕೃತಿಗಳನ್ನು ರಚಿಸಿದ್ದರು.
ಮಧುರ ಚೆನ್ನರ ಜೀವನ ಹಾಗೂ ಕೃತಿಗಳ ಕುರಿತ ಮಹಾಪ್ರಬಂಧ ರಚಿಸಿದ್ದರು. ಮಧುರ ಚೆನ್ನ, ಅಕ್ಕಮಹಾದೇವಿ, ಅರವಿಂದರು, ಬಸವೇಶ್ವರ, ಹಲಸಂಗಿ ಗೆಳೆಯರು ಸೇರಿ ಹಲವು ಕೃತಿ ರಚಿಸಿದ್ದಾರೆ. ಮರಾಠಿಯಿಂದ ಅನೇಕ ಕೃತಿಗಳನ್ನು ಕನ್ನಡ ಅನುವಾದ ಮಾಡಿದ ಹೆಗ್ಗಳಿಕೆ ಇವರದ್ದು. ಕಾಪಸೆಯವರು ದ.ರಾ.ಬೇಂದ್ರೆ, ಮಧುರ ಚೆನ್ನ ಸೇರಿದಂತೆ ಹಲವು ಸಾಹಿತಿಗಳ ಒಡನಾಡಿಯಾಗಿದ್ದರು. ರಾಜ್ಯೋತ್ಸವ ಪ್ರಶಸ್ತಿ, ಕೇಂದ್ರ ಸಾಹಿತ್ಯ ಅಕಾಡೆಮಿ ಪ್ರಶಸ್ತಿ ಸೇರಿದಂತೆ ಹಲವಾರು ಪ್ರಶಸ್ತಿಗಳನ್ನು ಅವರು ಪಡೆದಿದ್ದರು.