ರಾಯಚೂರು: ಇತ್ತೀಚೆಗೆ ಹೃದಯ ಸಂಬಂಧಿ ಕಾಯಿಲೆಗೆ ಬಲಿಯಾಗುತ್ತಿರುವವರ ಸಂಖ್ಯೆ ಹೆಚ್ಚಾಗುತ್ತಿದೆ. ಚಿಕ್ಕ ಮಕ್ಕಳು ಕೂಡ ಇದಕ್ಕೆ ಬಲಿಯಾಗುತ್ತಿರುವುದು ಆತಂಕವೇ ಸರಿ. 14 ವರ್ಷದ ಬಾಲಕನೊಬ್ಬ ಈಗ ಹೃದಯ ಸಂಬಂಧಿ ಕಾಯಿಲೆಗೆ ಬಲಿಯಾಗಿದ್ದಾನೆ.
ಸಿರವಾರ (Sirwar) ತಾಲೂಕಿನ ಅತ್ತನೂರು ಗ್ರಾಮದ 14 ವರ್ಷದ ತರುಣ್ ಹೃದಯ ಸಂಬಂಧಿ ಸಮಸ್ಯೆಯಿಂದ ಸಾವನ್ನಪ್ಪಿದ್ದಾನೆ. ತರುಣ್ ಸಿರವಾರ ಪಟ್ಟಣದ ಖಾಸಗಿ ಶಾಲೆಯಲ್ಲಿ 8ನೇ ತರಗತಿ ಓದುತ್ತಿದ್ದ. ಬುಧವಾರ ಕೂಡ ಆತ ಶಾಲೆಗೆ ತೆರಳಿದ್ದ.ಆದರೆ, ತರಗತಿಯಲ್ಲಿ ಪಾಠ ಕೇಳುತ್ತಿದ್ದ ಸಂದರ್ಭದಲ್ಲಿ ಆತನಿಗೆ ತಲೆ ಸುತ್ತು ಕಾಣಿಸಿಕೊಂಡಿದೆ. ಹೀಗಾಗಿ ಕುಸಿದು ಬಿದ್ದಿದ್ದಾನೆ.
ಕೂಡಲೇ ಆತನನ್ನು ಶಿಕ್ಷಕರು ಆಸ್ಪತ್ರೆಗೆ ದಾಖಲಿಸಿದ್ದಾರೆ. ವಿಷಯ ತಿಳಿದು ಪೋಷಕರು ಕೂಡ ಆಸ್ಪತ್ರೆಗೆ ತೆರಳಿದ್ದಾರೆ. ಆದರೆ, ಲೋ ಬಿಪಿ ಆಗಿದೆ ಎಂದು ವೈದ್ಯರು ಹೇಳಿದ್ದಾರೆ. ಕೂಡಲೇ ವೈದ್ಯರ ಸಲಹೆಯಂತೆ ಪೋಷಕರು, ತರುಣ್ ನನ್ನು ರಾಯಚೂರಿಗೆ ಕರೆದುಕೊಂಡು ಹೋಗುತ್ತಿದ್ದರು. ಆದರೆ ಮಾರ್ಗ ಮಧ್ಯೆ ತರುಣ್ ಸಾವನ್ನಪ್ಪಿದ್ದಾನೆ.
ರಾಯಚೂರಿನ ಖಾಸಗಿ ಆಸ್ಪತ್ರೆಯ ವೈದ್ಯರು ಹೃದಯ ಸಂಬಂಧಿ ಸಮಸ್ಯೆಯಿಂದ ಸಾವಾಗಿದೆ ಎಂದು ಪೋಷಕರಿಗೆ ಮಾಹಿತಿ ನೀಡಿದ್ದಾರೆ. ಕುಟಂಬಸ್ಥರ ಆಕ್ರಂದನ ಮುಗಿಲು ಮುಟ್ಟಿದೆ. ವಿದ್ಯಾರ್ಥಿಯ ಸಾವಿಗೆ ಶಿಕ್ಷಕರು ಹಾಗೂ ವಿದ್ಯಾರ್ಥಿಗಳು ಕಂಬನಿ ಮಿಡಿದಿದ್ದಾರೆ.