ಮೈಸೂರು : ಕಾವೇರಿ ನೀರು ಹಂಚಿಕೆ ವಿಚಾರವಾಗಿ ರಾಜ್ಯದಲ್ಲಿ ತೀವ್ರ ಪ್ರತಿಭಟನೆ ನಡೆಯುತ್ತಿರುವ ನಡುವೆಯೇ, ಕಬಿನಿ ಜಲಾಶಯ ಭರ್ತಿಯಾಗುತ್ತಿರುವ ಹಿನ್ನೆಲೆ ತಮಿಳುನಾಡಿಗೆ 25 ಸಾವಿರ ಕ್ಯೂಸೆಕ್ ನೀರು ಬಿಡುಗಡೆ ಮಾಡಲಾಗಿದೆ. ತಮಿಳುನಾಡು ಸುಮಾರು 3,500 ಕ್ಯೂಸೆಕ್ ನೀರು ಕೇಳಿದ್ದರೂ, ಜಲಾಶಯದ ಸುರಕ್ಷತೆಯ ದೃಷ್ಟಿಯಿಂದ ಹೆಚ್ಚಿನ ಪ್ರಮಾಣದಲ್ಲಿ ನೀರು ಹರಿಸಲಾಗಿದ್ದು, ಸಂಕಷ್ಟದ ಸೂತ್ರ ಪಾಲನೆಯೊಂದಿಗೆ ರಾಜ್ಯ ಸರ್ಕಾರ ತಾತ್ಕಾಲಿಕವಾಗಿ ಒತ್ತಡದಿಂದ ಹೊರಬಂದಿದೆ.
ಕೇರಳದ ವಾಯನಾಡು ಭಾಗದಲ್ಲಿ ಕಳೆದ ಕೆಲವು ದಿನಗಳಿಂದ ಭಾರೀ ಮಳೆಯಾಗುತ್ತಿರುವ ಪರಿಣಾಮ ಕಬಿನಿ ಜಲಾಶಯಕ್ಕೆ ಒಳಹರಿವು ಗಣನೀಯವಾಗಿ ಹೆಚ್ಚಾಗಿದೆ. ಪ್ರಸ್ತುತ ಜಲಾಶಯಕ್ಕೆ ಸುಮಾರು 20 ಸಾವಿರ ಕ್ಯೂಸೆಕ್ ನೀರು ಹರಿದು ಬರುತ್ತಿದ್ದು, ಜಲಾಶಯ ಭರ್ತಿಯಾಗಲು ಕೇವಲ ಒಂದು ಅಡಿ ಮಾತ್ರ ಬಾಕಿಯಿದೆ. ಇದೇ ಕಾರಣಕ್ಕೆ ಅಣೆಕಟ್ಟೆಯ ಸುರಕ್ಷತೆ ದೃಷ್ಟಿಯಿಂದ ಅಧಿಕಾರಿಗಳು 25 ಸಾವಿರ ಕ್ಯೂಸೆಕ್ ನೀರನ್ನು ತಮಿಳುನಾಡಿನತ್ತ ಬಿಡುಗಡೆ ಮಾಡಿದ್ದಾರೆ.
ಜಲಾಶಯದಿಂದ ಹೆಚ್ಚಿನ ಪ್ರಮಾಣದ ನೀರು ಹರಿಸುತ್ತಿರುವ ಹಿನ್ನೆಲೆಯಲ್ಲಿ ನದಿ ಪಾತ್ರದ ಜನರು ಸುರಕ್ಷಿತ ಸ್ಥಳಗಳಿಗೆ ತೆರಳುವಂತೆ ಜಿಲ್ಲಾಡಳಿತ ಸೂಚನೆ ನೀಡಿದೆ. ಅಲ್ಲದೆ, ಕಬಿನಿ ಡ್ಯಾಂ ಸಮೀಪದ ಬಿದರಹಳ್ಳಿ ಸೇತುವೆ ನೀರಿನಲ್ಲಿ ಮುಳುಗಡೆಯಾಗಿದ್ದು, ಸಾರ್ವಜನಿಕರು ಹಾಗೂ ವಾಹನ ಸವಾರರು ಎಚ್ಚರಿಕೆ ವಹಿಸುವಂತೆ ಅಧಿಕಾರಿಗಳು ಮನವಿ ಮಾಡಿದ್ದಾರೆ.
ಕಬಿನಿ ಜಲಾಶಯಕ್ಕೆ ನಿರಂತರವಾಗಿ ನೀರು ಹರಿದು ಬರುತ್ತಿರುವುದರಿಂದ ಕಾವೇರಿ ಕಣಿವೆಯ ರೈತರು ಸದ್ಯಕ್ಕೆ ನಿಟ್ಟುಸಿರು ಬಿಟ್ಟಿದ್ದಾರೆ. ಆದರೆ, ಕಾವೇರಿ ನೀರು ಹಂಚಿಕೆ ವಿಚಾರವಾಗಿ ರಾಜ್ಯದಲ್ಲಿ ಪ್ರತಿಭಟನೆಗಳು ಮುಂದುವರಿದಿರುವ ಹಿನ್ನೆಲೆಯಲ್ಲಿ ಮುಂದಿನ ದಿನಗಳಲ್ಲಿ ಪರಿಸ್ಥಿತಿ ಯಾವ ತಿರುವು ಪಡೆಯಲಿದೆ ಎಂಬುದು ಕುತೂಹಲ ಮೂಡಿಸಿದೆ.
ಇದನ್ನೂ ಓದಿ : ಇಟ್ಟಿಗೆಗೂಡು ಕುಸಿದು ಮೂವರು ಕಾರ್ಮಿಕರ ದಾರುಣ ಸಾವು!



















