ಕಲಬುರಗಿ: ಇಂದು ನಗರದಲ್ಲಿ ಸಚಿವ ಸಂಪುಟ ಸಭೆ ನಡೆಯಿತು. ಈ ಸಂದರ್ಭದಲ್ಲಿ ಕಲ್ಯಾಣ ಕರ್ನಾಟಕ ಅಭಿವೃದ್ಧಿ ಕುರಿತು ಚರ್ಚೆ ನಡೆಸಲಾಯಿತು.
ಸಭೆಯ ನಂತರ ಸಿಎಂ ಸಿದ್ದರಾಮಯ್ಯ ಸುದ್ದಿಗೋಷ್ಠಿ ನಡೆಸಿದರು. ಕಲ್ಯಾಣ ಕರ್ನಾಟಕಕ್ಕೆ 5 ಸಾವಿರ ಕೋಟಿ ರೂ. ಹಣ ಮೀಸಲಿಟ್ಟಿದ್ದೇವೆ. ಕೃಷಿ ಇಲಾಖೆಗೆ 100 ಕೋಟಿ ಅನುದಾನ ಮೀಸಲಿಟ್ಟಿದ್ದೇವೆ. ಬಜೆಟ್ ನಲ್ಲಿ ಘೋಷಿಸಿದ್ದ ಎಲ್ಲ ಯೋಜನೆಗಳಿಗೆ ಅನುಮೋದನೆ ನೀಡಲಾಗಿದೆ ಎಂದು ಹೇಳಿದ್ದಾರೆ.
ಇಂದು ನಡೆದ ಸಚಿವ ಸಂಪುಟ ಸಭೆಯಲ್ಲಿ 56 ವಿಷಯಗಳನ್ನು ಚರ್ಚಿಸಿದ್ದೇವೆ. ಕಲ್ಯಾಣ ಕರ್ನಾಟಕಕ್ಕೆ ಸಂಬಂಧಿಸಿದ 46 ವಿಚಾರಗಳನ್ನು ಚರ್ಚಿಸಿದ್ದೇವೆ. ಕಲ್ಯಾಣ ಕರ್ನಾಟಕ ಭಾಗದ ಒಟ್ಟು ಮೊತ್ತ 11,770 ಕೋಟಿ ರೂ. ಬೀದರ್, ರಾಯಚೂರು ನಗರ ಪಾಲಿಕೆ ಮಾಡಲು ತೀರ್ಮಾನಿಸಲಾಗಿದೆ. ಕುಡಿಯುವ ನೀರು ಯೋಜನೆ ಮಾಡಲಾಗುವುದು. 7,200 ಕೋಟಿ ವೆಚ್ಚದಲ್ಲಿ ಕುಡಿಯುವ ನೀರು ಯೋಜನೆ ಜಾರಿಗೆ ತರಲು ನಿರ್ಧರಿಸಲಾಗಿದೆ ಎಂದು ಹೇಳಿದ್ದಾರೆ.
ಕಲ್ಯಾಣ ಕರ್ನಾಟಕ ಭಾಗಕ್ಕೆ ಮೀಸಲಿಟ್ಟ 11,770 ಕೋಟಿಯಲ್ಲಿ ಕೃಷಿಗೆ 100 ಕೋಟಿ ರೂ., ಕೈಗಾರಿಕೆಗೆ 1550 ಕೋಟಿ ರೂ., ಅರಣ್ಯ ಇಲಾಖೆ 37 ಕೋಟಿ ರೂ., ಆರೋಗ್ಯ ಇಲಾಖೆಗೆ 610 ಕೋಟಿ ರೂ.ಬೀದರ್, ಕಲಬುರಗಿ ಜನವಸತಿ ಪ್ರದೇಶಗಳಿಗೆ ಬಹು ಗ್ರಾಮ ಕುಡಿಯುವ ನೀರಿನ ಯೋಜನೆ ಮಾಡುತ್ತೇವೆ. ಇದಕ್ಕೆ 7,200 ಕೋಟಿ ರೂ. ವೆಚ್ಚವಾಗಲಿದೆ. ನಾರಾಯಣಪುರ ಡ್ಯಾಂನಿಂದ ನೀರು ಸರಬರಾಜು ಮಾಡಲಾಗುವುದು. ಇದಕ್ಕೆ ಕೇಂದ್ರ ಸರ್ಕಾರ ಅರ್ಧ ಅನುದಾನ ನೀಡಬೇಕು ಎಂದು ಹೇಳಿದ್ದಾರೆ.