ಜೈಪುರ: ರಾಜಸ್ಥಾನದ ಜೈಪುರದ ಸರ್ಕಾರಿ ಸವಾಯಿ ಮಾನ್ ಸಿಂಗ್ (ಎಸ್ಎಂಎಸ್) ಆಸ್ಪತ್ರೆಯಲ್ಲಿ ಭೀಕರ ಅಗ್ನಿ ದುರಂತ ಸಂಭವಿಸಿದ್ದು, 6 ರೋಗಿಗಳು ಸಜೀವ ದಹನವಾಗಿದ್ದಾರೆ. ಹೊಗೆಯ ಬಗ್ಗೆ ನೀಡಿದ ಆರಂಭಿಕ ಎಚ್ಚರಿಕೆಯನ್ನು ಆಸ್ಪತ್ರೆ ಸಿಬ್ಬಂದಿ ನಿರ್ಲಕ್ಷಿಸಿದ್ದೇ ಈ ದುರಂತಕ್ಕೆ ಕಾರಣ ಎಂದು ಮೃತರ ಕುಟುಂಬಸ್ಥರು ಆರೋಪಿಸಿದ್ದಾರೆ.
ಭಾನುವಾರ ತಡರಾತ್ರಿ ಆಸ್ಪತ್ರೆಯ ಟ್ರಾಮಾ ಸೆಂಟರ್‌ನ ನ್ಯೂರೋ ಐಸಿಯು ವಿಭಾಗದಲ್ಲಿ ಬೆಂಕಿ ಕಾಣಿಸಿಕೊಂಡಿದೆ. ಶಾರ್ಟ್ ಸರ್ಕ್ಯೂಟ್‌ನಿಂದಾಗಿ ಸ್ಟೋರೇಜ್ ಪ್ರದೇಶದಲ್ಲಿ ಬೆಂಕಿ ಹೊತ್ತಿಕೊಂಡಿರಬಹುದು ಎಂದು ಶಂಕಿಸಲಾಗಿದೆ. ಘಟನೆಯಲ್ಲಿ ಇಬ್ಬರು ಮಹಿಳೆಯರು ಸೇರಿದಂತೆ ಒಟ್ಟು 6 ಮಂದಿ ಮೃತಪಟ್ಟಿದ್ದಾರೆ ಎಂದು ಟ್ರಾಮಾ ಸೆಂಟರ್ ಉಸ್ತುವಾರಿ ಡಾ. ಅನುರಾಗ್ ಧಕಡ್ ತಿಳಿಸಿದ್ದಾರೆ.
ಬೆಂಕಿ ಕಾಣಿಸಿಕೊಳ್ಳುತ್ತಿದ್ದಂತೆ ಇಡೀ ಕಟ್ಟಡದಲ್ಲಿ ದಟ್ಟವಾದ ಹೊಗೆ ಆವರಿಸಿತ್ತು. ಇದು ರೋಗಿಗಳು ಮತ್ತು ಅವರ ಕುಟುಂಬಸ್ಥರಲ್ಲಿ ತೀವ್ರ ಆತಂಕ ಸೃಷ್ಟಿಸಿತ್ತು. ಕೆಲವು ಸಂಬಂಧಿಕರು ರೋಗಿಗಳನ್ನು ಹಾಸಿಗೆ ಸಮೇತ ಹೊರಗೆ ತಳ್ಳಿಕೊಂಡು ಬಂದರು. ಆಸ್ಪತ್ರೆ ಸಿಬ್ಬಂದಿ ಮತ್ತು ಅಗ್ನಿಶಾಮಕ ದಳದವರು ಸುಮಾರು ಎರಡು ಗಂಟೆಗಳ ಕಾಲ ಕಾರ್ಯಾಚರಣೆ ನಡೆಸಿ ಬೆಂಕಿಯನ್ನು ನಿಯಂತ್ರಣಕ್ಕೆ ತಂದರು. ಈ ದುರಂತದಲ್ಲಿ ಹಲವು ಪ್ರಮುಖ ದಾಖಲೆಗಳು, ಐಸಿಯು ಉಪಕರಣಗಳು ಮತ್ತು ವೈದ್ಯಕೀಯ ಸಾಮಗ್ರಿಗಳು ಸುಟ್ಟು ಕರಕಲಾಗಿವೆ.

ಘಟನೆ ನಡೆದಾಗ ನ್ಯೂರೋ ಐಸಿಯುನಲ್ಲಿ 11 ರೋಗಿಗಳು ಚಿಕಿತ್ಸೆ ಪಡೆಯುತ್ತಿದ್ದರು. ಸಮೀಪದ ಮತ್ತೊಂದು ಐಸಿಯುನಲ್ಲಿದ್ದ 14 ರೋಗಿಗಳನ್ನು ಸುರಕ್ಷಿತವಾಗಿ ಬೇರೆಡೆಗೆ ಸ್ಥಳಾಂತರಿಸಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
“ಸಿಬ್ಬಂದಿ ನಿರ್ಲಕ್ಷ್ಯದ ಆರೋಪ”
“ವಾರ್ಡ್‌ನಲ್ಲಿ ಹೊಗೆ ಬರುತ್ತಿದ್ದಂತೆ ನಾವು ಸಿಬ್ಬಂದಿಗೆ ಮಾಹಿತಿ ನೀಡಿದ್ದೆವು. ಆದರೆ ಅವರು ಗಮನ ಹರಿಸದೇ ನಿರ್ಲಕ್ಷಿಸಿದರು. ಬೆಂಕಿ ಹೆಚ್ಚಾಗುತ್ತಿದ್ದಂತೆ ಅವರೆಲ್ಲ ಓಡಿಹೋದರು. ರೋಗಿಗಳ ಬಗ್ಗೆ ಯಾರೂ ಗಮನ ಹರಿಸಲಿಲ್ಲ. ರೋಗಿಗಳ ಸ್ಥಿತಿ ಹೇಗಿದೆ ಎಂದು ಕೇಳುವವರೂ, ಹೇಳುವವರೂ ಇರಲಿಲ್ಲ,” ಎಂದು ರೋಗಿಯೊಬ್ಬರ ಸಂಬಂಧಿಕರು ಆಕ್ರೋಶ ವ್ಯಕ್ತಪಡಿಸಿದ್ದಾರೆ.
“ಉನ್ನತ ಮಟ್ಟದ ತನಿಖೆಗೆ ಸಮಿತಿ”
ಘಟನಾ ಸ್ಥಳಕ್ಕೆ ಮುಖ್ಯಮಂತ್ರಿ ಭಜನ್‌ಲಾಲ್ ಶರ್ಮಾ, ಸಂಸದೀಯ ವ್ಯವಹಾರಗಳ ಸಚಿವ ಜೋಗಾರಾಮ್ ಪಟೇಲ್ ಮತ್ತು ಗೃಹ ಖಾತೆ ರಾಜ್ಯ ಸಚಿವ ಜವಾಹರ್ ಸಿಂಗ್ ಬೇಧಮ್ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಇದೊಂದು ಅತ್ಯಂತ ದುರದೃಷ್ಟಕರ ಘಟನೆ ಎಂದು ಬಣ್ಣಿಸಿದ ಮುಖ್ಯಮಂತ್ರಿ, ಸೂಕ್ತ ಪರಿಹಾರ ಮತ್ತು ಚಿಕಿತ್ಸೆಯ ಭರವಸೆ ನೀಡಿದ್ದಾರೆ. ಘಟನೆಯ ಕುರಿತು ಸಮಗ್ರ ತನಿಖೆ ನಡೆಸಲು ವೈದ್ಯಕೀಯ ಶಿಕ್ಷಣ ಇಲಾಖೆಯ ಆಯುಕ್ತ ಇಕ್ಬಾಲ್ ಖಾನ್ ನೇತೃತ್ವದಲ್ಲಿ ಉನ್ನತ ಮಟ್ಟದ ಸಮಿತಿಯನ್ನು ರಚಿಸಲಾಗಿದೆ. ಬೆಂಕಿಗೆ ಕಾರಣ, ಆಸ್ಪತ್ರೆಯ ಸುರಕ್ಷತಾ ಕ್ರಮಗಳು ಮತ್ತು ತುರ್ತು ಪರಿಸ್ಥಿತಿ ನಿರ್ವಹಣೆಯಲ್ಲಿನ ಲೋಪಗಳ ಬಗ್ಗೆ ಸಮಿತಿ ಸರ್ಕಾರಕ್ಕೆ ವರದಿ ಸಲ್ಲಿಸಲಿದೆ.
ಪ್ರಧಾನಿ ನರೇಂದ್ರ ಮೋದಿ ಅವರು ಈ ದುರಂತದ ಬಗ್ಗೆ ತೀವ್ರ ದುಃಖ ವ್ಯಕ್ತಪಡಿಸಿದ್ದು, ಮೃತರ ಕುಟುಂಬಗಳಿಗೆ ಸಂತಾಪ ಸೂಚಿಸಿದ್ದಾರೆ. ಮಾಜಿ ಮುಖ್ಯಮಂತ್ರಿ ಅಶೋಕ್ ಗೆಹ್ಲೋಟ್, ವಿರೋಧ ಪಕ್ಷದ ನಾಯಕ ಟಿಕಾರಾಮ್ ಜುಲ್ಲಿ ಮತ್ತು ಮಾಜಿ ಉಪಮುಖ್ಯಮಂತ್ರಿ ಸಚಿನ್ ಪೈಲಟ್ ಕೂಡ ಆಸ್ಪತ್ರೆಗೆ ಭೇಟಿ ನೀಡಿ ಘಟನೆಯ ಬಗ್ಗೆ ವಿಷಾದ ವ್ಯಕ್ತಪಡಿಸಿದ್ದಾರೆ. “ರಾಜ್ಯದ ಪ್ರತಿಷ್ಠಿತ ಆಸ್ಪತ್ರೆಯಲ್ಲಿ ಇಂತಹ ದುರಂತ ನಿರ್ಲಕ್ಷ್ಯದಿಂದ ಸಂಭವಿಸಿದೆ. ಇದಕ್ಕೆ ಹೊಣೆಗಾರಿಕೆ ನಿಗದಿಪಡಿಸಿ, ಶೀಘ್ರ ಕ್ರಮ ಕೈಗೊಳ್ಳಬೇಕು,” ಎಂದು ಸಚಿನ್ ಪೈಲಟ್ ಆಗ್ರಹಿಸಿದ್ದಾರೆ.