ಬೆಂಗಳೂರು: ರಾಜ್ಯಾದ್ಯಂತ ಬುಧವಾರ ವ್ಯಾಪಕ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
ಕರಾವಳಿ ಹಾಗೂ ದಕ್ಷಿಣ ಒಳನಾಡಿನಲ್ಲಿ ಈಗಾಗಲೇ ಹಲವು ದಿನಗಳಿಂದ ವ್ಯಾಪಕ ಮಳೆಯಾಗುತ್ತಿದೆ. ಹೀಗಾಗಿ ಬುಧವಾರ ಕೂಡ ಈ ಪ್ರದೇಶದಲ್ಲಿ ಭಾರೀ ಮಳೆಯಾಗುವ ಮುನ್ಸೂಚನೆ ಇದೆ. ಉತ್ತರ ಒಳನಾಡಿನ ಕೆಲವು ಕಡೆ ಮಳೆಯಾಗುವ ಮುನ್ಸೂಚನೆ ಇದೆ. ಈಗಾಗಲೇ ಕರಾವಳಿ ಪ್ರದೇಶದಲ್ಲಂತೂ ವ್ಯಾಪಕ ಮಳೆಯಾಗುತ್ತಿದೆ.
ಕರಾವಳಿ ಹಾಗೂ ದಕ್ಷಿಣ ಒಳನಾಡಿನಲ್ಲಿ ಅಕ್ಟೋಬರ್ 8 ರಿಂದ 12ರ ವರೆಗೆ ಹಲವು ಕಡೆ ಮಳೆಯಾಗುವ ಸಾಧ್ಯತೆ ಇದೆ. ಉಡುಪಿ, ದಕ್ಷಿಣ ಕನ್ನಡ, ಹಾಸನ , ಕೊಡಗು, ಮೈಸೂರು, ಚಾಮರಾಜನಗರ, ತುಮಕೂರು, ದಾವಣಗೆರೆ, ಚಿಕ್ಕಮಗಳೂರು, ಶಿವಮೊಗ್ಗ, ಚಿಕ್ಕಬಳ್ಳಾಪುರ, ರಾಮನಗರ, ಹಾಗೂ ಕೋಲಾರ ಜಿಲ್ಲೆಗಳಲ್ಲಿ ಭಾರೀ ಮಳೆಯಾಗುವ ಸಾಧ್ಯತೆ ಇದ್ದು ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ.
ಅಲ್ಲದೇ, ಉತ್ತರ ಒಳನಾಡಿನ ಕೆಲವು ಜಿಲ್ಲೆಗಳಲ್ಲಿ ಕೂಡ ಇದೇ ಅವಧಿಯಲ್ಲಿ ಉತ್ತಮ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಬೆಂಗಳೂರಲ್ಲಿ 8, 9 ಹಾಗೂ 10 ರಂದು ಮಳೆಯಾಗುವ ಹೆಚ್ಚಿನ ಸಾಧ್ಯತೆ ಇದೆ.