ಬೆಂಗಳೂರು: ರಾಜ್ಯದಲ್ಲಿ ಮೂರು ಕ್ಷೇತ್ರಗಳಿಗೆ ಉಪ ಚುನಾವಣೆ ಘೋಷಣೆಯಾಗಿದ್ದು, ನ. 13 ರಂದು ಮತದಾನ ನಡೆಯಲಿದೆ. ಹೀಗಾಗಿ ರಾಜ್ಯದಲ್ಲಿ ಭರ್ಜರಿ ಚುನಾವಣಾ ತಾಲೀಮು ನಡೆದಿದೆ. ಈ ಮಧ್ಯೆ ಕಾಂಗ್ರೆಸ್ ಹೈಕಮಾಂಡ್ ರಾಜ್ಯ ನಾಯಕರಿಗೆ ಖಡಕ್ ಸಂದೇಶ ನೀಡಿದೆ.
ಶಿಗ್ಗಾಂವಿ, ಸಂಡೂರು ಮತ್ತು ಚನ್ನಪಟ್ಟಣ ವಿಧಾಸಭಾ ಕ್ಷೇತ್ರಗಳಿಗೆ ಉಪಚುನಾವಣೆ ನಡೆಯಲಿದೆ. ಮೂರು ಕ್ಷೇತ್ರಗಳಲ್ಲಿ ಗೆಲುವು ಸಾಧಿಸಲು ಆಡಳಿತರೂಢ ಕಾಂಗ್ರೆಸ್ ಹಾಗೂ ಎನ್ ಡಿಎ ಮೈತ್ರಿ ತಂತ್ರ -ಪ್ರತಿತಂತ್ರ ರೂಪಿಸುತ್ತಿವೆ.
ಈ ಮಧ್ಯೆ ಎಐಸಿಸಿ ಪ್ರಧಾನ ಕಾರ್ಯದರ್ಶಿ ಕೆ.ಸಿ. ವೇಣಗೋಪಾಲ ರಾಜ್ಯಕ್ಕೆ ಆಗಮಿಸಿದ್ದು, ಸಿಎಂ ಸಿದ್ದರಾಮಯ್ಯ ಹಾಗೂ ಡಿಸಿಎಂ ಡಿ.ಕೆ. ಶಿವಕುಮಾರ್ ಅವರೊಂದಿಗೆ ಸಭೆ ನಡೆಸಿದ್ದಾರೆ. ಮೂರು ಕ್ಷೇತ್ರಗಳಲ್ಲಿ ಗೆಲ್ಲಲು ಮಾಡಬೇಕಾದ ಸ್ಟ್ಯಾಟರ್ಜಿ ಕುರಿತು ಚರ್ಚಿಸಿದ್ದಾರೆ.
ಎನ್ಡಿಎ ತನ್ನ ಅಭ್ಯರ್ಥಿಗಳ ಹೆಸರು ಘೋಷಣೆ ಮಾಡುವವರೆಗೆ ತಮ್ಮ ಅಭ್ಯರ್ಥಿಗಳ ಪಟ್ಟಿ ಬಿಡುಗಡೆ ಮಾಡದಿರಲು ಕಾಂಗ್ರೆಸ್ ನಿರ್ಧರಿಸಿದೆ.
ಚನ್ನಪಟ್ಟಣ ಕ್ಷೇತ್ರಕ್ಕೆ ಡಿಕೆ ಶಿವಕುಮಾರ್ ಅವರ ಸಹೋದರ ಡಿಕೆ ಸುರೇಶ್ ಅವರನ್ನೇ ಕಣಕ್ಕೆ ಇಳಿಸುವಂತೆ ಸ್ಥಳೀಯ ಮುಖಂಡರು ಹಾಗೂ ಕಾರ್ಯಕರ್ತರು ಮನವಿ ಮಾಡುತ್ತಿದ್ದಾರೆ. ಅಲ್ಲದೇ, ಎನ್ ಡಿಎ ಟಿಕೆಟ್ ನೀಡದಿದ್ದರೂ ಸ್ಪರ್ಧಿಸಲು ಮುಂದಾಗಿರುವ ಸಿಪಿ ಯೋಗೇಶ್ವರ್ ಅವರ ನಡೆಯ ಕುರಿತು ಕೂಡ ಚರ್ಚಿಸಲಾಗಿದೆ.
ಸಂಡೂರಿಗೆ ಬಳ್ಳಾರಿ ಸಂಸದ ಇ ತುಕಾರಾಂ ಅವರ ಕುಟುಂಬದ ಒಬ್ಬರಿಗೆ ಟಿಕೆಟ್ ನೀಡಲು ತೀರ್ಮಾನಿಸಲಾಗಿದೆ. ಬಿಜೆಪಿ ಮಾಜಿ ಸಚಿವ ಬಿ.ಶ್ರೀರಾಮುಲು ಅವರಿಗೆ ಟಿಕೆಟ್ ಘೋಷಿಸಿದರೆ, ಕಾಂಗ್ರೆಸ್ ತುಕಾರಾಂ ಅವರ ಪತ್ನಿ ಇ. ಅನ್ನಪೂರ್ಣ ಅವರನ್ನು ಕಣಕ್ಕೆ ಇಳಿಸಲು ಚಿಂತನೆ ನಡೆಸಿದೆ.