ಮೈಸೂರು: ಮುಡಾ ಕಚೇರಿ ಮೇಲೆ ಜಾರಿ ನಿರ್ದೇಶನಾಲಯ ಅಧಿಕಾರಿಗಳು ದಾಳಿ ನಡೆಸಿ, ಹಲವು ಕಡತಗಳ ಬಗ್ಗೆ ಪರಿಶೀಲನೆ ನಡೆಸುತ್ತಿದ್ದಾರೆ.
ನಿವೇಶನ ಹಂಚಿಕೆ ವಿಷಯದಲ್ಲಿ ಹಗರಣ ನಡೆದಿದೆ ಎಂಬ ಆರೋಪ ಕೇಳಿಬಂದ ಹಿನ್ನೆಲೆಯಲ್ಲಿ ಈ ದಾಳಿ ನಡೆದಿದೆ. ಆರ್ಐಟಿಐ ಕಾರ್ಯಕರ್ತ ಸ್ನೇಹಮಯಿ ಕೃಷ್ಣ ನೀಡಿದ ದೂರಿನ ಆಧಾರದ ಮೇಲೆ ಇಡಿ ಅಧಿಕಾರಿಗಳು ಮುಡಾ ಕಚೇರಿ ಮೇಲೆ ದಾಳಿ ನಡೆಸಿದ್ದಾರೆ. ಅಲ್ಲದೇ, ಸುಮಾರು 20ಕ್ಕೂ ಅಧಿಕಾರಿಗಳು ದಾಳಿ ವೇಳೆ ಕಚೇರಿಗಳ ಕಡತಗಳನ್ನು ಪರಿಶೀಲಿಸುತ್ತಿದ್ದಾರೆ.
ಮುಡಾ ಪ್ರಕರಣಕ್ಕೆ ಸಂಬಂಧಿಸಿದಂತೆ ಇತ್ತೀಚೆಗಷ್ಟೇ ಇಡಿ ಸ್ನೇಹಮಯಿ ಕೃಷ್ಣ ಅವರಿಗೆ ಸಮ್ಸನ್ ನೀಡಿ, ವಿಚಾರಣೆಗೆ ಹಾಜರಾಗುವಂತೆ ಹೇಳಿತ್ತು. ಅದರಂತೆ ಸ್ನೇಹಮಯಿ ಕೃಷ್ಣ ಶಾಂತಿನಗರದ ಇಡಿ ಕಚೇರಿಯಲ್ಲಿ ವಿಚಾರಣೆಗೆ ಹಾಜರಾಗಿದ್ದರು. ಅಲ್ಲದೇ, ಸುಮಾರು 500 ಪುಟಗಳ ದಾಖಲೆಯನ್ನೂ ವಿಚಾರಣೆ ವೇಳೆ ನೀಡಿದ್ದರು.
ದಾಖಲೆಗಳ ಆಧಾರದ ಮೇಲೆ ಇಡಿ ಇಸಿಐಆರ್ ದಾಖಲಿಸಿ ತನಿಖೆ ನಡೆಸುತ್ತಿದೆ. ಇಡಿ, ಮುಡಾ ಕಚೇರಿ ಮತ್ತು ಭೂ ಮಾಲೀಕ ದೇವರಾಜು ಮನೆ ಮೇಲೆ ಅಧಿಕಾರಿಗಳು ದಾಳಿ ನಡೆಸಿ ಪರಿಶೀಲನೆ ನಡೆಸುತ್ತಿದ್ದಾರೆ. ಬೆಂಗಳೂರಿನ ಕೆಂಗೇರಿಯಲ್ಲಿರುವ ದೇವರಾಜು ನಿವಾಸದಲ್ಲಿ ಇಡಿ ಅಧಿಕಾರಿಗಳು ದಾಖಲೆ ಪರಿಶೀಲನೆ ನಡೆಸುತ್ತಿದ್ದಾರೆ.
ಮುಂದಿನ ದಿನಗಳಲ್ಲಿ ಸಿಎಂ ಮನೆ ಹಾಗೂ ಕಚೇರಿಗಳ ಮೇಲೆಯೂ ದಾಳಿ ನಡೆಸುವ ಸಾಧ್ಯತೆ ಇದೆ ಎನ್ನಲಾಗುತ್ತಿದೆ. ಈ ಪ್ರಕರಣದಲ್ಲಿ ಸಿದ್ದರಾಮಯ್ಯ ಎ1 ಆಗಿದ್ದಾರೆ.