ರಾಜ್ಯದ ಮೂರು ಕ್ಷೇತ್ರಗಳಿಗೆ ಚುನಾವಣೆ ಘೋಷಣೆಯಾಗಿದೆ. ಹೀಗಾಗಿ ಚನ್ನಪಟ್ಟಣ, ಶಿಗ್ಗಾಂವಿ ಹಾಗೂ ಸಂಡೂರು ವಿಧಾನಸಭಾ ಕ್ಷೇತ್ರಗಳನ್ನು ಗೆಲ್ಲಲು ಕಾಂಗ್ರೆಸ್ ಹಾಗೂ ಎನ್ ಡಿಎ ಕೂಟ ಭರ್ಜರಿ ತಂತ್ರ- ಪ್ರತಿತಂತ್ರದ ಮೊರೆ ಹೋಗಿವೆ.
ಈಗ ಕಾಂಗ್ರೆಸ್ ಮೂರಕ್ಕೆ ಮೂರೂ ಕ್ಷೇತ್ರಗಳಲ್ಲಿ ಗೆಲ್ಲಲೇಬೇಕು ಎಂದು ಪಣ ತೊಟ್ಟಿದೆ. ಹೀಗಾಗಿ ಸಿಎಂ ಸಿದ್ದರಾಮಯ್ಯ ಹಾಗೂ ಡಿಸಿಎಂ ಡಿ.ಕೆ.ಶಿವಕುಮಾರ್ ಇಂದು ವಿಶೇಷ ಸಭೆ ನಡೆಸಿದ್ದಾರೆ. ಮೂರು ವಿಧಾನಸಭಾ ಕ್ಷೇತ್ರಗಳ ಉಪಚುನಾವಣೆಯ ಹಿನ್ನೆಲೆಯಲ್ಲಿ ಕಾಂಗ್ರೆಸ್ ಸಚಿವರು ಹಾಗೂ ಪಕ್ಷದ ನಾಯಕರ ಜೊತೆ ಸುದೀರ್ಘ ಚರ್ಚೆ ನಡೆಸಿ, ಕೆಲ ಮಹತ್ವದ ನಿರ್ಣಯ ತೆಗೆದುಕೊಂಡಿದ್ದಾರೆ.
ಮೂರೂ ಕ್ಷೇತ್ರಗಳಲ್ಲಿ ನಮ್ಮ ಪಕ್ಷದ ಅಭ್ಯರ್ಥಿಗಳು ಗೆಲ್ಲುವ ಸಾಧ್ಯತೆಗಳು ಹೆಚ್ಚಾಗಿವೆ. ಆದ್ದರಿಂದ ಸಂಪೂರ್ಣ ಶ್ರಮ ಹಾಕಿ ಚುನಾವಣೆ ನಿರ್ವಹಿಸಬೇಕು ಎಂದು ಖಡಕ್ ಸೂಚನೆ ನೀಡಿದ್ದಾರೆ. ಪ್ರತಿ ಚುನಾವಣೆ ಸಂದರ್ಭದಲ್ಲೂ ಬಿಜೆಪಿಯ ಪ್ರತಿಯೊಬ್ಬರೂ ಜಿದ್ದಿಗೆ ಬಿದ್ದವರಂತೆ ಸುಳ್ಳುಗಳನ್ನು ಹೇಳುತ್ತಾರೆ. ಅವರ ಸುಳ್ಳುಗಳನ್ನು ಜನರೆದುರು ಬಯಲುಗೊಳಿಸಬೇಕು ಎಂದು ಸಿಎಂ ಕಿವಿ ಮಾತು ಹೇಳಿದ್ದಾರೆ.
ಉಪಚುನಾವಣೆ ಮುಗಿಯುವರೆಗೂ ಕೇಂದ್ರ ತನಿಖಾ ಸಂಸ್ಥೆಗಳನ್ನು ದುರುಪಯೋಗಪಡಿಸಿಕೊಳ್ಳುವ ಪ್ರಮಾಣ ಇನ್ನೂ ಹೆಚ್ಚಲಿದೆ. ಈ ಬಗ್ಗೆಯೂ ನಾವು ಬಹಳ ಎಚ್ಚರಿಕೆಯಿಂದ ಇರಬೇಕು ಎಂದು ಕೂಡ ಹೇಳಿದ್ದಾರೆ ಎನ್ನಲಾಗಿದೆ. ಹೀಗಾಗಿ ಕಾಂಗ್ರೆಸ್ ಮೂರು ಕ್ಷೇತ್ರ ಗೆಲ್ಲುವ ಇರಾದೆಯಲ್ಲಿದೆ.