ಉಡುಪಿ: ವ್ಯಕ್ತಿಯೋರ್ವ ಕ್ಷುಲ್ಲಕ ಕಾರಣಕ್ಕೆ ತನ್ನ ಸ್ನೇಹಿತನನ್ನೇ ಕೊಲೆ ಮಾಡಿ ಪೊಲೀಸರಿಗೆ ಕರೆ ಮಾಡಿರುವ ಘಟನೆ ನಡೆದಿದೆ.
ನಗರದ ಹಳೆ ಕೆಎಸ್ ಆರ್ ಟಿಸಿ ಹತ್ತಿರದ ಕೃಷ್ಣ ಕೃಪಾ ಬಿಲ್ಡಿಂಗ್ ನ ನೆಲ ಅಂತಸ್ತಿನ ಕೊಠಡಿಯಲ್ಲಿ ಈ ಘಟನೆ ನಡೆದಿದೆ. ಕೊರಂಗ್ರಪಾಡಿಯ ಪ್ರಶಾಂತ್ ಶೆಟ್ಟಿ (32) ಕೊಲೆಯಾಗಿರುವ ವ್ಯಕ್ತಿ ಎಂದು ಗುರುತಿಸಲಾಗಿದೆ. ಸ್ನೇಹಿತ ವಿಜಯನಗರ ಜಿಲ್ಲೆಯ ಹೂವಿನಹಡಗಲಿಯ ನಿವಾಸಿ ಈರಣ್ಣ ಯಾನೆ ಎಂಬಾತ ಕೊಲೆ ಮಾಡಿರುವ ಆರೋಪಿ ಎನ್ನಲಾಗಿದೆ. ಇಬ್ಬರೂ ಮೊದಲು ಕಂಠಪೂರ್ತಿ ಕುಡಿದಿದ್ದಾರೆ. ಈ ವೇಳೆ ಇಬ್ಬರ ಮಧ್ಯೆ ಯಾವುದೋ ವಿಷಯಕ್ಕೆ ಸಂಬಂಧಿಸಿದಂತೆ ವಾಗ್ವಾದ ನಡೆದಿದೆ. ಆಗ ಆರೋಪಿ ಈರಣ್ಣ ಹರಿತವಾದ ಚೂರಿಯಿಂದ ಪ್ರಶಾಂತ್ ನ ಕತ್ತು ಸೀಳಿದ್ದಾನೆ. ಗಂಭೀರವಾಗಿ ಗಾಯಗೊಂಡ ಪ್ರಶಾಂತ್ ಸ್ಥಳದಲ್ಲೇ ಸಾವನ್ನಪ್ಪಿದ್ದಾನೆ.
ಕತ್ತು ಸೀಳಿದ ನಂತರ ಆರೋಪಿಯು ಖುದ್ದು ಪೊಲೀಸರಿಗೆ ಕರೆ ಮಾಡಿ, ಸ್ನೇಹಿತನನ್ನು ಕೊಲೆ ಮಾಡಿರುವುದಾಗಿ ಮಾಹಿತಿ ನೀಡಿದ್ದಾನೆ. ವಿಷಯ ತಿಳಿಯುತ್ತಿದ್ದಂತೆಯೇ ಸ್ಥಳಕ್ಕೆ ದೌಡಾಯಿಸಿದ ಪೊಲೀಸರು ಆರೋಪಿಯನ್ನು ವಶಕ್ಕೆ ಪಡೆದಿದ್ದಾರೆ.