ಬೆಂಗಳೂರು: ರಾಜ್ಯ ಸೇರಿದಂತೆ ಸಿಲಿಕಾನ್ ಸಿಟಿಯಲ್ಲಿ ವ್ಯಾಪಕ ಮಳೆಯಾಗುತ್ತಿದ್ದು, ಜನರು ಹೈರಾಣಾಗಿ ಹೋಗಿದ್ದಾರೆ.
ಬೆಂಗಳೂರಿನಲ್ಲಿ ನಾಳೆಯೂ ವ್ಯಾಪಕ ಮಳೆಯಾಗುತ್ತಿರುವ ಹಿನ್ನೆಲೆಯಲ್ಲಿ ಶಾಲೆಗಳಿಗೆ ರಜೆ ಘೋಷಿಸಿ ಜಿಲ್ಲಾಧಿಕಾರಿ ಜಗದೀಶ್ ಆದೇಶ ಹೊರಡಿಸಿದ್ದಾರೆ. ಬೆಂಗಳೂರು ನಗರ ಜಿಲ್ಲೆಯಲ್ಲಿ ಅ. 23ರಂದು ಆರೆಂಜ್ ಅಲರ್ಟ್ ಘೋಷಿಸಲಾಗಿದೆ. ಹೀಗಾಗಿ ಮುಂಜಾಗ್ರತಾ ಕ್ರಮವಾಗಿ ನಗರದ ಎಲ್ಲಾ ಶಾಲೆಗಳಿಗೆ ರಜೆ ಘೋಷಿಸಲಾಗಿದೆ.
ಬೆಂಗಳೂರು ನಗರ ಜಿಲ್ಲೆಯ ಎಲ್ಲ ಅಂಗನವಾಡಿ ಕೇಂದ್ರಗಳು, ಸರ್ಕಾರಿ, ಖಾಸಗಿ, ಅನುದಾನಿತ ಪ್ರಾಥಮಿಕ, ಪ್ರೌಢ ಶಾಲೆಗಳಿಗೆ ರಜೆ ನೀಡುವಂತೆ ಆದೇಶಿಸಿದ್ದು, ಶನಿವಾರ ಮಧ್ಯಾಹ್ನ ಅಥವಾ ಭಾನುವಾರ ಹೆಚ್ಚುವರಿ ತರಗತಿ ನಡೆಸಲು ಜಿಲ್ಲಾಧಿಕಾರಿ ಸೂಚಿಸಿದ್ದಾರೆ.
ಬೆಂಗಳೂರಿನ ಎಲ್ಲಾ ತಾಲೂಕಿನ ಅಂಗನವಾಡಿ ಕೇಂದ್ರಗಳಿಗೆ ಹಾಗೂ ಖಾಸಗೀ ಅನುದಾನಿತ ಪ್ರಾಥಮಿಕ, ಪ್ರೌಢಶಾಲೆಗಳಿಗೆ ರಜೆ ನೀಡಲಾಗಿದ್ದು, ಉಳಿದಂತೆ ಎಲ್ಲಾ ಪದವಿ, ಸ್ನಾತಕೋತ್ತರ ಪದವಿ, ಡಿಪ್ಲೋಮ, ಇಂಜಿನಿಯರಿಂಗ್ , ಐ.ಟಿ.ಐ ಕಾಲೇಜುಗಳು ಕಾರ್ಯನಿರ್ವಹಿಸುತ್ತವೆ ಎಂದಿದ್ದಾರೆ.
ಸಿಲಿಕಾನ್ ಸಿಟಿ ಬೆಂಗಳೂರಿನಲ್ಲಿ ವರುಣಾರ್ಭಟ ಮುಂದುವರಿದಿದೆ. ಅ. 22ರಂದು ಕೂಡ ವ್ಯಾಪಕವಾಗಿ ಮಳೆ ಸುರಿದಿದೆ. ಹೀಗಾಗಿ ರಸ್ತೆಗಳು ಸಂಪೂರ್ಣವಾಗಿ ಜಲಾವೃತಗೊಂಡಿವೆ. ಇದರಿಂದಾಗಿ ಬಹುತೇಕರು ನೆನೆದುಕೊಂಡೇ ಮನೆ ಸೇರಿದ್ದಾರೆ. ಹೀಗಾಗಿ ಮುಂಜಾಗ್ರತಾ ಕ್ರಮವಾಗಿ ನಾಳೆ ಅಂದರೆ ಅಕ್ಟೋಬರ್ 23ರಂದು ಬೆಂಗಳೂರು ನಗರ ಜಿಲ್ಲೆಯ ಎಲ್ಲಾ ಶಾಲೆಗಳಿಗೆ ರಜೆ ಘೋಷಿಸಲಾಗಿದೆ.
ಮುಂದಿನ 5 ದಿನ ಬೆಂಗಳೂರಿನಲ್ಲಿ ಸಾಧಾರಣದಿಂದ ವ್ಯಾಪಕ ಮಳೆಯಾಗುವ ಮುನ್ಸೂಚನೆಯನ್ನು ಹವಾಮಾನ ಇಲಾಖೆ ನೀಡಿದೆ.