ಬೆಂಗಳೂರು: ರಾಜ್ಯದಲ್ಲಿ ಕೆಲವು ದಿನಗಳಿಂದ ವ್ಯಾಪಕ ಮಳೆಯಾಗುತ್ತಿದ್ದು, ಜನ ಜೀವನ ಅಸ್ತವ್ಯಸ್ಥಗೊಂಡಿದೆ. ಹಲವೆಡೆಯಂತೂ ಮಳೆರಾಯನ ಅಬ್ಬರ ಹೇಳತೀರದಾಗಿದೆ. ಕೆಲವೆಡೆ ಮಳೆರಾಯ ಸ್ವಲ್ಪ ವಿರಾಮ ಪಡೆಯುತ್ತಿದ್ದಾನೆ. ಆದರೆ, ಕೆಲವೆಡೆ ಇನ್ನೂ 5 ದಿನ ಮಳೆಯಾಗುವ ಮುನ್ಸೂಚನೆಯನ್ನು ಹವಾಮಾನ ಇಲಾಖೆ ನೀಡಿದೆ.
ರಾಜ್ಯದ ದಕ್ಷಿಣ ಒಳನಾಡು, ಕರಾವಳಿ ಮತ್ತು ಕರಾವಳಿ ಜಿಲ್ಲೆಗಳಿಗೆ ಹಾಗೂ ಮಲೆನಾಡು ಜಿಲ್ಲೆಗಳಿಗೆ 5 ದಿನ ಮಳೆಯ ಮುನ್ಸೂಚನೆ ನೀಡಲಾಗಿದೆ. ಉತ್ತರ ಒಳನಾಡು ಜಿಲ್ಲೆಗಳಲ್ಲಿ ಅಲ್ಲಲ್ಲಿ ತುಂತುರು ಮಳೆಯಾಗುವ ನಿರೀಕ್ಷೆಯಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
ದಾನಾ ಚಂಡ ಮಾರುತದ ಪರಿಣಾಮ ಹೆಚ್ಚು ಮಳೆಯಾಗಿತ್ತು. ಈಗ ಮಳೆ ರಾಯನ ಆರ್ಭಟ ಕಡಿಮೆಯಾಗಿದ್ದು, ಇಂದು ಕೇರಳದ ಕೆಲವು ಜಿಲ್ಲೆಗಳಲ್ಲಿ ಆರೆಂಜ್ ಅಲರ್ಟ್ ಘೋಷಿಸಲಾಗಿದೆ. ಅಕ್ಟೋಬರ್ 27ರ ವರೆಗೆ ಬೆಂಗಳೂರು ನಗರ ಹಾಗೂ ಗ್ರಾಮಾಂತರ ಜಿಲ್ಲೆಗಳಲ್ಲಿ ಭಾಗಶಃ ಮೋಡ ಕವಿದ ವಾತಾವರಣ ಇರಲಿದೆ ಎಂದು ಮುನ್ಸೂಚನೆ ನೀಡಲಾಗಿದೆ.
ಕರಾವಳಿ ಭಾಗದ ದಕ್ಷಿಣ ಕನ್ನಡ, ಉಡುಪಿ, ಉತ್ತರ ಕನ್ನಡಗಳಲ್ಲಿ ಮಳೆ ಕಡಿಮೆಯಾಗಿದೆ. ಬಾಗಲಕೋಟೆ, ಬೆಳಗಾವಿ, ಬೀದರ್, ದಾರವಾಡ, ಗದಗ, ಹಾವೇರಿ, ಕಲಬುರಗಿ, ಕೊಪ್ಪಳ, ರಾಯಚೂರು, ವಿಜಯಪುರ, ಯಾದಗಿರಿ ಜಿಲ್ಲೆಗಳಲ್ಲಿ ಇನ್ನೆರಡು ದಿನ ಮಳಾಯಗುವ ಮುನ್ಸೂಚನೆ ಇದೆ.
ಚಾಮರಾಜನಗರ, ಹಾಸನ, ಮಂಡ್ಯ, ಮೈಸೂರು ಜಿಲ್ಲೆಗಳಲ್ಲಿ ಅಲ್ಲಲ್ಲಿ ಚದುರಿದಂತೆ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.