ಬೆಂಗಳೂರು: ರಾಜ್ಯದಲ್ಲಿ ವ್ಯಾಪಕ ಮಳೆಯಾಗಿದ್ದು, ರೈತರು ಕಂಗಾಲಾಗಿದ್ದಾರೆ. ಏಕೆಂದರೆ ಈ ಬಾರಿ ವಾಡಿಕೆಗಿಂತ ಹೆಚ್ಚು ಮಳೆ ಆಗಿದೆ. ಹೀಗಾಗಿ ರೈತರಿಗೆ ಪರಿಹಾರ ನೀಡಬೇಕೆಂದು ಬಿಜೆಪಿಯು ಸರ್ಕಾರಕ್ಕೆ ಆಗ್ರಹಿಸಿದೆ.
ಈಗಾಗಲೇ ಸಿಎಂ ಸಿದ್ದರಾಮಯ್ಯ ಅವರು ಜಿಲ್ಲಾಡಳಿತ ಅತಿವೃಷ್ಠಿ ಪ್ರದೇಶಗಳಿಗೆ ಭೇಟಿ ನೀಡಿ, ಪರಿಹಾರ ಕ್ರಮ ಕೈಗೊಳ್ಳವಂತೆ ಸಿಎಂ ಸಿದ್ದರಾಮಯ್ಯ ಅವರು ಸೂಚಿಸಿದ್ದಾರೆ. ಇದಕ್ಕೆ ಪ್ರತಿಕ್ರಿಯಿಸಿರುವ ವಿಪಕ್ಷ ನಾಯಕ ಆರ್.ಅಶೋಕ್ ಅವರು, ಗಾಢ ನಿದ್ದೆಯಿಂದ ಎದ್ದ ಸರ್ಕಾರವು ಈಗ ಸೂಚನೆ ನೀಡಿದೆ. ಹೀಗಾಗಿ ಕೂಡಲೇ ರೈತರಿಗೆ ಪರಿಹಾರ ನೀಡಬೇಕು. ದೀಪಾವಳಿ ಒಳಗಾಗಿ ರೈತರಿಗೆ ಪರಿಹಾರ ವಿತರಿಸಬೇಕು ಎಂದು ಹೇಳಿದ್ದಾರೆ.
ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಶನಿವಾರ ಜಿಲ್ಲಾಡಳಿತ ಹಾಗೂ ಜಿಲ್ಲಾ ಪಂಚಾಯಿತಿ ಸಿಇಓಗಳ ಜೊತೆಗೆ ವಿಡಿಯೋ ಕಾನ್ಫರೆನ್ಸ್ ನಡೆಸಿದ್ದಾರೆ. ಈ ವಿಚಾರ ಕುರಿತು ಭಾನುವಾರ ಟ್ವೀಟ್ ಮಾಡಿರುವ ಆರ್.ಅಶೋಕ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ.
ರಾಜ್ಯ ಸರ್ಕಾರ ಕಳೆದ ವರ್ಷ ಬರ ಪರಿಹಾರ ವಿತರಣೆ ವೇಳೆ, ಈ ವರ್ಷ ಮುಂಗಾರು ಬೆಳೆ ಹಾನಿ ಪರಿಹಾರ ವಿತರಣೆ ವೇಳೆ ಉಂಟಾದ ಎಡವಟ್ಟುಗಳು ಮರುಕಳಿಸದಂತೆ ನೋಡಿಕೊಳ್ಳಬೇಕು. ರಾಜ್ಯದಲ್ಲಿ ಮಳೆ, ಅತಿವೃಷ್ಟಿಯಿಂದ ಆದ ಬೆಳೆ ಹಾನಿ ಸಮೀಕ್ಷೆಯನ್ನು ಸಮರೋಪಾದಿಯಲ್ಲಿ ನಡೆಸಿ, ಒಂದು ವಾರದೊಳಗೆ ಪರಿಹಾರದ ಹಣ ರೈತರ ಖಾತೆಗೆ ಹಾಕಬೇಕು ಎಂದು ಮನವಿ ಮಾಡಿದ್ದಾರೆ.
ಹೀಗಾಗಿ ಈಗಿನಿಂದಲೇ ಸರ್ಕಾರ ಸೂಕ್ತ ರೀತಿಯಲ್ಲಿ ಪೂರ್ವಸಿದ್ಧತೆ ಮಾಡಿಕೊಂಡು, ಸಮೀಕ್ಷೆ ವರದಿ ಕೈಸೇರುತ್ತಿದ್ದಂತೆ ಡಿಬಿಟಿ ಮೂಲಕ ರೈತರ ಬ್ಯಾಂಕ್ ಖಾತೆಗಳಿಗೆ ಹಣ ಜಮೆ ಮಾಡಬೇಕು ಎಂದು ಮನವಿ ಮಾಡಿದ್ದಾರೆ.