ಹಾವೇರಿ: ರಾಜ್ಯದ ಕೆಲವು ಜಿಲ್ಲೆಗಳಲ್ಲಿ ವಕ್ಪ್ ವಕ್ಫ್ ಬೋರ್ಡ್ ನೋಟಿಸ್ ವಿಚಾರ ದೊಡ್ಡ ಮಟ್ಟದ ಸದ್ದು ಮಾಡುತ್ತಿದೆ. ಇದು ಹಾವೇರಿ ಜಿಲ್ಲೆಗೂ ಕಾಲಿಟ್ಟಿದ್ದು, ಅಲ್ಲಿನ ರೈತರು ಮುಸ್ಲಿಂ ಮುಖಂಡರ ಮನೆಗಳ ಮೇಲೆ ಕಲ್ಲು ತೂರಾಟ ನಡೆಸಿ ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಜಿಲ್ಲೆಯ ಸವಣೂರು ತಾಲೂಕಿನ ಕಡಕೋಳ ಗ್ರಾಮದಲ್ಲಿ ವಕ್ಫ್ ಬೋರ್ಡ್ ಹೆಸರಿನಲ್ಲಿ ಖಾತೆ ಇಂದೀಕರಣಕ್ಕೆ ತೀವ್ರ ವಿರೋಧ ವ್ಯಕ್ತವಾಗಿದೆ. ಹೀಗಾಗಿ ತಾವಿದ್ದ ಮನೆಗಳನ್ನು ತೆರವುಗೊಳಿಸಬಹುದು ಎಂಬ ಭೀತಿಯಿಂದ ಉದ್ರಿಕ್ತರ ಗುಂಪು ಮುಸ್ಲಿಂ ಮುಖಂಡರ ಮನೆಗಳ ಮೇಲೆ ಕಲ್ಲು ತೂರಾಟ ನಡೆಸಿದೆ.
ಉದ್ರಿಕ್ತರ ಗುಂಪು ಮುಸ್ಲಿಂ ಮುಖಂಡ ಮೊಹಮ್ಮದ್ ರಫಿ ಎಂಬುವವರ ಮನೆ ಮೇಲೆ ಕಲ್ಲು ತೂರಾಟ ನಡೆಸಿದೆ. ಮನೆ ಮುಂದಿದ್ದ ಬೈಕ್ ಅನ್ನು ಜಖಂ ಮಾಡಲಾಗಿದೆ. ಕಲ್ಲು ತೂರಾಟ ಹಾಗೂ ಪರಿಸ್ಥಿತಿ ಉದ್ವಿಗ್ನಗೊಂಡ ಬೆನ್ನಲ್ಲೇ, ರಾತ್ರೋರಾತ್ರಿ ಹಾವೇರಿ ಜಿಲ್ಲಾಧಿಕಾರಿ, ಎಸ್ಪಿ, ಕಡಕೋಳ ಗ್ರಾಮಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.
ಗಲಾಟೆಗೆ ಕಾರಣರಾದವರನ್ನು ಬಂಧಿಸಲು ಮುಂದಾದ ಪೊಲೀಸರು, ಗಲಾಟೆಗೆ ಪ್ರಚೋದನೆ ನೀಡಿದರನ್ನೂ ಪತ್ತೆ ಮಾಡಲು ಮುಂದಾಗಿದ್ದಾರೆ.
ಹಲ್ಲೆಗೊಳಗಾದವರಿಂದಲೂ ಮಾಹಿತಿ ಪಡೆದು ದೂರು ಸ್ವೀಕರಿಸುತ್ತೇವೆ. ಗಲಾಟೆಗೆ ಸಂಬಂಧಿಸಿದಂತೆ 15 ಜನರನ್ನು ವಶಕ್ಕೆ ಪಡೆದಿದ್ದೇವೆ. ಭದ್ರತೆಗೆ 4 ಕೆಎಸ್ಆರ್ಪಿ ತುಕಡಿ, 200 ಪೊಲೀಸ್ ಸಿಬ್ಬಂದಿ ನಿಯೋಜನೆ ಮಾಡಲಾಗಿದೆ ಎಂದು ತಿಳಿದು ಬಂದಿದೆ.