ಬೆಂಗಳೂರು: ಕನ್ನಡ ರಾಜ್ಯೋತ್ಸವಾ ಕಾರ್ಯಕ್ರಮದಲ್ಲಿ ಸಿಎಂ ಸಿದ್ದರಾಮಯ್ಯ ಅವರು ಕೇಂದ್ರ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ.
69ನೇ ಕನ್ನಡ ರಾಜ್ಯೋತ್ಸವ ಪ್ರಯುಕ್ತ ಬೆಂಗಳೂರಿನ ಕಂಠೀರವ ಕ್ರೀಡಾಂಗಣದಲ್ಲಿ ಧ್ವಜಾರೋಹಣ ನೆರವೇರಿಸಿ ಮಾತನಾಡಿದ ಅವರು, ಕೇಂದ್ರ ಸರ್ಕಾರ ಅನುದಾನ ಹಂಚಿಕೆಯಲ್ಲಿ ತಾರತಮ್ಯ ಮಾಡುತ್ತಿದೆ. ಆದರೂ ನಾವು ಶಾಲಾ ಕಾಲೇಜು ಅಭಿವೃದ್ಧಿ ಕೆಲಸ ಮಾಡುತ್ತಿದ್ದೇವೆ. ವಾರಕ್ಕೆ 6 ದಿನ ವಿದ್ಯಾರ್ಥಿಗಳಿಗೆ ಮೊಟ್ಟೆ ಕೊಡುವ ಕೆಲಸ ಮಾಡುತ್ತಿದ್ದೇವೆ. ಪ್ರತಿ ದಿನ 57 ಲಕ್ಷ ಮಕ್ಕಳಿಗೆ ಮೊಟ್ಟೆ ನೀಡುತ್ತಿದ್ದೇವೆ ಎಂದಿದ್ದಾರೆ.
ಪೌಷ್ಠಿಕಾಂಶ ಕೊರತೆ ದೂರ ಮಾಡಲು ಸಾಕಷ್ಟು ಯೋಜನೆ ರೂಪಿಸುತ್ತಿದ್ದೇವೆ. ಸಾಯಿ ಅನ್ನಪೂರ್ಣ ಟ್ರಸ್ಟ್ ವಾರದಲ್ಲಿ 3ದಿನ ರಾಗಿ ಮಾಲ್ಟ್ ನೀಡುತ್ತಿದೆ. ಅಪೌಷ್ಟಿಕತೆ ದೂರ ಮಾಡಲು ಪೌಷ್ಟಿಕಾಂಶಯುಕ್ತ ಆಹಾರ ನೀಡಲಾಗುತ್ತಿದೆ ಎಂದಿದ್ದಾರೆ.
ನಮ್ಮ ಹಕ್ಕು ರಕ್ಷಣೆ ಮಾಡಿಕೊಳ್ಳುವ ಯತ್ನ ಮಾಡಬೇಕಾಗಿದೆ. ರಾಜ್ಯದಿಂದ ಆಯ್ಕೆಯಾದ ಎಂಪಿಗಳು ಲೋಕಸಭೆಯಲ್ಲಿ ಧ್ವನಿ ಎತ್ತಬೇಕಿದೆ. ರಾಜ್ಯಸಭಾ ಸದಸ್ಯರೂ ತೆರಿಗೆ ಪಾಲು ಕೊಡಿ ಎಂದು ಕೇಳಬೇಕು. ಆ ರೀತಿಯ ಶಕ್ತಿ ಬೆಳೆಸಿಕೊಳ್ಳಬೇಕು ಎಂದಿದ್ದಾರೆ.
15ನೇ ಹಣಕಾಸು ಆಯೋಗದಿಂದ ನಮ್ಮ ರಾಜ್ಯಕ್ಕೆ ಅನ್ಯಾಯ ಆಗಿದೆ. ನಮ್ಮ ದೇಶದಲ್ಲಿ ಬಡತನ ಇದೆ. ಬಡವರ ಮಕ್ಕಳಲ್ಲಿ ಅಪೌಷ್ಟಿಕತೆ ಇದೆ. ಹೀಗಾಗಿ ಗುಣಮಟ್ಟದ ಆಹಾರ ಸಿಗಬೇಕು ಎಂದು ಕಾರ್ಯಕ್ರಮ ಜಾರಿ ಮಾಡಿದ್ದೇವೆ ಎಂದು ಹೇಳಿದ್ದಾರೆ.
ಸಾಮಾಜಿಕ ಮಾಧ್ಯಮದಲ್ಲಿ ಕನ್ನಡ ಮತ್ತು ಕನ್ನಡಿಗರ ಅವಹೇಳನ ಮಾಡುವುದು, ಕನ್ನಡಿಗರನ್ನು ಹೀಯಾಳಿಸುವ ಪ್ರವೃತ್ತಿ ಬೆಳೆಯುತ್ತಿದೆ. ಇದು ನಾಡದ್ರೋಹ ಎಂದು ಗುಡುಗಿದ್ದಾರೆ.