ಬೆಂಗಳೂರು: ರೈತರ ಜಮೀನಿನಲ್ಲಿ ನಮೂದಾಗಿರುವ ವಕ್ಫ್ ಹೆಸರು ತಿದ್ದುಪಡಿಗೆ ಸಿಎಂ ಸೂಚಿಸಿದ್ದು, ನೋಟಿಸ್ ಹಿಂಪಡೆಯುವಂತೆ ಆದೇಶ ನೀಡಿದ್ದಾರೆ. ಆದರೆ, ರಾಜ್ಯಾದ್ಯಂತ ನಾಳೆ ಪ್ರತಿಭಟನೆಗೆ ಬಿಜೆಪಿ ಕರೆ ನೀಡಿದೆ.
ಇದಕ್ಕೆ ಸಿಎಂ ಸಿದ್ದರಾಮಯ್ಯ ಕಿಡಿಕಾರಿದ್ದಾರೆ. ನಮ್ಮ ಸರ್ಕಾರ ಸೂಚನೆ ನೀಡಿದ ನಂತರವೂ ಪ್ರತಿಭಟನೆಗೆ ಮುಂದಾಗಿದ್ದಾರೆ. ಬಿಜೆಪಿಯ ರಾಜಕೀಯ ಲಾಭದ ದುರುದ್ದೇಶ ಇದೆಯೇ ಹೊರತು, ರೈತರ ಹಿತಾಸಕ್ತಿ ರಕ್ಷಣೆಯ ಯಾವ ಸದುದ್ದೇಶ ಇಲ್ಲ ಎಂದು ವಾಗ್ದಾಳಿ ನಡೆಸಿದ್ದಾರೆ.
ಈ ಕುರಿತು ಟ್ವೀಟ್ ಮಾಡಿರುವ ಸಿಎಂ, ವಕ್ಫ್ ಆಸ್ತಿಯ ವಿವಾದಕ್ಕೆ ಸಂಬಂಧಿಸಿದಂತೆ ರೈತರಿಗೆ ನೀಡಲಾಗಿರುವ ನೋಟಿಸ್ಗಳನ್ನು ತಕ್ಷಣ ವಾಪಸ್ ಪಡೆಯಲು ನಮ್ಮ ಸರ್ಕಾರ ಸೂಚನೆ ನೀಡಿದ ನಂತರವೂ ಬಿಜೆಪಿ ನಾಯಕರು ಪ್ರತಿಭಟನೆಗೆ ಮುಂದಾಗಿರುವುದಕ್ಕೆ ರಾಜಕೀಯ ಲಾಭದ ದುರುದ್ದೇಶ ಇದೆಯೇ ಹೊರತು ಇದರಲ್ಲಿ ರೈತರ ಹಿತಾಸಕ್ತಿ ರಕ್ಷಣೆಯ ಯಾವ ಸದುದ್ದೇಶ ಇಲ್ಲ ಎನ್ನುವುದನ್ನು ರಾಜ್ಯದ ಜನತೆ ಅರ್ಥಮಾಡಿಕೊಳ್ಳಬೇಕೆಂದು ಹೇಳಿದ್ದಾರೆ.
ವಕ್ಫ್ ವಿಚಾರದಲ್ಲಿ ರೈತರಿಗೆ ನೀಡಲಾಗಿರುವ ನೋಟಿಸ್‌ಗಳನ್ನು ತಕ್ಷಣದಿಂದಲೇ ವಾಪಸ್ ಪಡೆಯಬೇಕು. ರೈತರ ಪಹಣಿ ಬದಲಾವಣೆ ಕುರಿತು ಈಗಾಗಲೇ ನೀಡಿರುವ ನೋಟೀಸ್‌ಗಳನ್ನು ತಕ್ಷಣ ವಾಪಸ್ ಪಡೆಯಬೇಕು. ಕಾನೂನು ಬಾಹಿರವಾಗಿ ಹಾಗೂ ನೋಟಿಸ್ ನೀಡದೆ ಪಹಣಿಯಲ್ಲಿ ಯಾವುದೇ ರೀತಿಯ ತಿದ್ದುಪಡಿಗಳನ್ನು ಮಾಡಿದ್ದರೆ ತಕ್ಷಣ ರದ್ದು ಮಾಡಬೇಕು. ಅಧಿಕಾರಿಗಳು ಎಚ್ಚರ ವಹಿಸಿ ರೈತರಿಗೆ ತೊಂದರೆ ಆಗುವ ಯಾವುದೇ ತೀರ್ಮಾನವನ್ನು ಕೈಗೊಳ್ಳಬಾರದು ಎಂದು ನಾನು ಸ್ಪಷ್ಟವಾಗಿ ಸೂಚನೆ ನೀಡಿದ್ದೇನೆ. ಈ ಸೂಚನೆಯ ನಂತರವೂ ಬಿಜೆಪಿ ನಾಯಕರು ಯಾವ ಕಾರಣಕ್ಕಾಗಿ ಪ್ರತಿಭಟನೆ ನಡೆಸುತ್ತಿದ್ದಾರೆ ಎಂದು ಪ್ರಶ್ನೆ ಮಾಡಿದ್ದಾರೆ.