ಸಿಎಂ ಸಿದ್ದರಾಮಯ್ಯ ಅವರಿಗೆ ಮುಡಾ ಹಗರಣ ದೊಡ್ಡ ತಲೆನೋವಾಗಿದೆ. ಈಗ ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಹೈಕೋರ್ಟ್ ಆದೇಶ ಪ್ರಶ್ನಿಸಿ, ಹೈಕೋರ್ಟ್ ವಿಭಾಗೀಯ ಪೀಠಕ್ಕೆ ಮೇಲ್ಮನವಿ ಸಲ್ಲಿಸಿದ್ದಾರೆ.
ನ. 23ಕ್ಕೆ ವಿಚಾರಣೆ ನಡೆಸಬೇಕೆಂದು ಸಿಎಂ ಪರ ವಕೀಲ ಅಭಿಷೇಕ್ ಸಿಂಘ್ವಿ ಕೋರ್ಟ್ ಗೆ ಮನವಿ ಮಾಡಿದ್ದಾರ ಎಂದು ತಿಳಿದು ಬಂದಿದ್ದು, ಹೈಕೋರ್ಟ್ ವಿಭಾಗೀಯ ಪೀಠ ಕೂಡ ನ. 23ಕ್ಕೆ ವಿಚಾರಣೆ ನಿಗದಿ ಪಡಿಸಿದೆ.
ಹೈಕೋರ್ಟ್ ನೀಡಿರುವ ತೀರ್ಪನ್ನು ಪ್ರಶ್ನಿಸಿ ಕಾನೂನು ಹೋರಾಟ ನಡೆಸಲು ಸಿಎಂ ಸಿದ್ದರಾಮಯ್ಯ ಮುಂದಾಗಿದ್ದಾರೆ. ಹೀಗಾಗಿಯೇ ಹೈಕೋರ್ಟ್‌ನ ವಿಭಾಗೀಯ ಪೀಠಕ್ಕೆ ಮೇಲ್ಮನವಿ ಸಲ್ಲಿಸಿದ್ದಾರೆ. ಮುಡಾ ನಿವೇಶನ ಹಂಚಿಕೆ ಪ್ರಕರಣಕ್ಕೆ ಸಂಬಂಧಿಸಿದಂತೆ ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ತಮ್ಮ ವಿರುದ್ಧದ ತನಿಖೆಗೆ ಅನುಮತಿ ನೀಡಿರುವುದನ್ನು ಪ್ರಶ್ನಿಸಿ ಹೈಕೋರ್ಟ್ ಗೆ ಅರ್ಜಿ ಸಲ್ಲಿಸಿದ್ದರು. ಆದರೆ, ಆ ಅರ್ಜಿ ವಜಾಗೊಂಡಿತ್ತು. ಹೀಗಾಗಿ ಕರ್ನಾಟಕ ಹೈಕೋರ್ಟ್ ನ ಏಕಸದಸ್ಯ ಪೀಠದ ಆದೇಶ ಪ್ರಶ್ನಿಸಿ ಸಿಎಂ ಸಿದ್ದರಾಮಯ್ಯ ಅರ್ಜಿ ಸಲ್ಲಿಸಿದ್ದಾರೆ.
ಸಿಎಂ ಅವರ ಪತ್ನಿ ಪಾರ್ವತಿ ಅವರು 14 ನಿವೇಶನಗಳನ್ನು ಮುಡಾಗೆ ಹಿಂದಿರುಗಿಸಿದ್ದರು. ಅಲ್ಲದೇ, ರಾಜ್ಯಪಾಲರ ಆದೇಶ ರದ್ದತಿಗೆ ಕೋರಿ ಸಿಎಂ ಸಿದ್ದರಾಮಯ್ಯ ಅವರು ಸಲ್ಲಿಸಿದ್ದ ಅರ್ಜಿಯ ವಿಚಾರಣೆಯನ್ನು ಸೆಪ್ಟೆಂಬರ್ 24ರಂದು ನ್ಯಾಯಮೂರ್ತಿ ಎಂ ನಾಗಪ್ರಸನ್ನ ಅವರ ಏಕಸದಸ್ಯ ಪೀಠ ವಜಾಗೊಳಿಸಿತ್ತು. ಈಗ ಮತ್ತೆ ಮೇಲ್ಮನವಿ ಅರ್ಜಿ ಸಲ್ಲಿಕೆಯಾಗಿದೆ.