ಬಾಗಲಕೋಟೆ: ರಾಜ್ಯದಲ್ಲಿ ರೇಷನ್ ಕಾರ್ಡ್ ರದ್ದಾಗುತ್ತಿರುವ ವಿಷಯ ತೀವ್ರ ಚರ್ಚೆಗೆ ಕಾರಣವಾಗಿದೆ. ಈ ಮಧ್ಯೆ ಈ ಕುರಿತು ಸಿಎಂ ಸಿದ್ದರಾಮಯ್ಯ ಮಾತನಾಡಿದ್ದಾರೆ.
ಬಾಗಲಕೋಟೆಯಲ್ಲಿ ಮಾತನಾಡಿದ ಅವರು, ಅನರ್ಹರ ಬಿಪಿಎಲ್ ಕಾರ್ಡ್ ಗಳನ್ನು ಮಾತ್ರ ಹಿಂಪಡೆಯಲು ತೀರ್ಮಾನಿಸಲಾಗುತ್ತಿದೆ. ಅರ್ಹ ಪಡಿತರದಾರರಿಗೆ ಯಾವುದೇ ತೊಂದರೆಯಾಗುವುದಿಲ್ಲ ಎಂದಿದ್ದಾರೆ.
ಅನರ್ಹರ ಕಾರ್ಡ್ ಗಳನ್ನು ಮಾತ್ರ ಹಿಂಪಡೆಯುವ ಆಲೋಚನೆ ಇದೆ. ಅದು ಇನ್ನೂ ಇಲಾಖೆಯ ಪರಿಶೀಲನೆಯಲ್ಲಿದೆ. ಅನರ್ಹರಿಗೆ ಕೊಡಲ್ಲ, ಅರ್ಹರಿಗೆ ತಪ್ಪಿಸಲ್ಲ ಎಂದಿದ್ದಾರೆ.
40% ಕಮಿಷನ್ ಆರೋಪದಿಂದ ಮುಕ್ತರಾಗಿದ್ದೇವೆ ಎನ್ನುವ ಆರ್.ಅಶೋಕ್ ಹೇಳಿಕೆ ವಿಚಾರವಾಗಿ ಮಾತನಾಡಿದ ಅವರು, ಗುತ್ತಿಗೆದಾರರ ಸಂಘದ ಅಧ್ಯಕ್ಷರಾಗಿದ್ದ ಕೆಂಪಣ್ಣ ಅವರು ಕೊಟ್ಟ ದೂರಿನ ಆಧಾರದಲ್ಲಿ ನಾವು ತನಿಖೆಗೆ ಸೂಚಿಸಿದ್ದೆವು. ಸಾಕ್ಷ್ಯಾಧಾರಗಳ ಕೊರತೆಯಿಂದ ಕೊಲೆ ಆರೋಪಿಗಳು ಬಿಡುಗಡೆ ಆಗುತ್ತಾರೆ. ಹಾಗಂತ ಕೊಲೆಯೇ ಆಗಿಲ್ಲ ಅಂದರೆ ಅದರಲ್ಲಿ ಅರ್ಥ ಇಲ್ಲ. ಕೊಲೆ ನಡೆದಿರುತ್ತದೆ. ಸಾಕ್ಷಿಗಳು ಸಾಕ್ಷ್ಯ ಹೇಳಿರುವುದಿಲ್ಲ ಅಷ್ಟೆ. ಅದೇ ರೀತಿ ಕೆಲವು ಪ್ರಕರಣಗಳು ನಡೆಯುತ್ತವೆ ಎಂದಿದ್ದಾರೆ.