ನವದೆಹಲಿ: ಸಂಸತ್ ಚಳಿಗಾಲದ ಅಧಿವೇಶನವು ನ. 25ರಿಂದ ಆರಂಭವಾಗಿ ಡಿ. 20ರ ವರೆಗೆ ನಡೆಯಲಿದೆ ಎಂದು ಕೇಂದ್ರ ಸಂಸದೀಯ ವ್ಯವಹಾರಗಳ ಸಚಿವ ಕಿರಣ್ ರಿಜಿಜು ಹೇಳಿದ್ದಾರೆ.
ಸಾಮಾಜಿಕ ಜಾಲತಾಣ ಎಕ್ಸ್ ನಲ್ಲಿ ಪೋಸ್ಟ್ ಮಾಡಿ ಮಾಹಿತಿ ನೀಡಿರುವ ಅವರು, ಸಂಸತ್ ಅಧಿವೇಶನದ ಹಿನ್ನೆಲೆಯಲ್ಲಿ ನವೆಂಬರ್ 24ರಂದು ಭಾನುವಾರ ಸರ್ವಪಕ್ಷಗಳ ಸಭೆ ಕರೆಯಲಾಗಿದೆ ಎಂದಿದ್ದಾರೆ. ಸಂವಿಧಾನ ಅಂಗೀಕರಿಸಿ 75 ವರ್ಷಗಳಾಗಿವೆ. ಈ ಹಿನ್ನೆಲೆಯಲ್ಲಿ ನವೆಂಬರ್ 26ಕ್ಕೆ ಸೆಂಟ್ರಲ್ ಹಾಲ್‌ನ ಸಂವಿಧಾನ ಸದನ ಅಥವಾ ಹಳೆಯ ಸಂಸತ್ತಿನ ಕಟ್ಟಡದಲ್ಲಿ ಕಾರ್ಯಕ್ರಮ ಆಯೋಜಿಸಲಾಗಿದೆ.
ಅಧಿವೇಶನ ಆರಂಭಕ್ಕೂ ಮುನ್ನ ಸರ್ವಪಕ್ಷಗಳ ಸಭೆ ಕರೆದು ಸಮಸ್ಯೆಗಳ ಕುರಿತು ಚರ್ಚಿಸಿ ಒಮ್ಮತ ಮೂಡಿಸುವುದು ವಾಡಿಕೆಯಾಗಿದ್ದು, ಈ ಹಿನ್ನೆಲೆಯಲ್ಲಿ ನ. 24ಕ್ಕೆ ಸಭೆ ನಡೆಯಲಿದೆ.