ರೇಣುಕಾಸ್ವಾಮಿ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಆರೋಪಿ ದರ್ಶನ್ ಸಲ್ಲಿಸಿರುವ ಜಾಮೀನು ಅರ್ಜಿ ವಿಚಾರಣೆಯನ್ನು ಕೋರ್ಟ್ ಮುಂದೂಡಿದೆ.
ಹೈಕೋರ್ಟ್ ಏಕಸದಸ್ಯ ಪೀಠದಲ್ಲಿ ಇಂದು ದರ್ಶನ್ ಜಾಮೀನು ಅರ್ಜಿ ವಿಚಾರಣೆ ನಡೆಯಿತು. ಕೋರ್ಟ್ ಅರ್ಜಿಯ ವಿಚಾರಣೆಯನ್ನು ನವೆಂಬರ್ 26 ಕ್ಕೆ ಮುಂದೂಡಿದೆ. ವಿಚಾರಣೆ ಸಂದರ್ಭದಲ್ಲಿ ಸ್ಪೆಷಲ್ ಪಬ್ಲಿಕ್ ಪ್ರಾಸಿಕ್ಯೂಟರ್ ಪ್ರಸನ್ನ ಅವರು ದರ್ಶನ್ ಗೆ ಮಧ್ಯಂತರ ಜಾಮೀನಿನ ನೀಡಿದ ಸಂದರ್ಭದಲ್ಲಿ ಸೂಚಿಸಲಾಗಿದ್ದ ಕೆಲ ನಿಯಮಗಳನ್ನು ಪಾಲಿಸಿಲ್ಲವೆಂದು ವಾದಿಸಿದರು. ಈ ವೇಳೆ ದರ್ಶನ್ ಪರ ವಕೀಲರು ಹೊಸ ವೈದ್ಯಕೀಯ ವರದಿಯನ್ನು ನ್ಯಾಯಾಲಯಕ್ಕೆ ಸಲ್ಲಿಸಿದರು.
ವೈದ್ಯಕೀಯ ವರದಿಯ ಪ್ರತಿ ತಮಗೆ ನೀಡಿಲ್ಲವೆಂದು ಎಸ್ಪಿಪಿ ಆಕ್ಷೇಪಣೆ ಸಲ್ಲಿಸಿದರು. 6 ವಾರಗಳ ಅವಧಿಗೆ ಷರತ್ತಿನ ಮೇಲೆ ಮಧ್ಯಂತರ ಜಾಮೀನು ನೀಡಲಾಗಿದೆ. ಆದರೆ ಸರ್ಜರಿಯ ದಿನಾಂಕ ತಿಳಿಸಿಲ್ಲವೆಂದು ಎಸ್ಪಿಪಿ ಪ್ರಸನ್ನಕುಮಾರ್ ವಾದ ಮಂಡಿಸಿದರು. ಆಗ, ದರ್ಶನ್ ಪರ ವಕೀಲರು ಮತ್ತೊಂದು ವರದಿಯ ಪ್ರತಿಯನ್ನು ಸಲ್ಲಿಸಿದರು.
ಮಧ್ಯಂತರ ಜಾಮೀನು ರದ್ದತಿ ಕೋರಿ ಸುಪ್ರೀಂಕೋರ್ಟ್ಗೆ ಮನವಿ ಸಲ್ಲಿಸುವುದಾಗಿ ಪೊಲೀಸ್ ಇಲಾಖೆ ಕೂಡ ಹೇಳಿದೆ.


















