ಬೆಂಗಳೂರು: ರಾಜ್ಯ ಒಕ್ಕಲಿಗರ ಸಂಘ ಶುಕ್ರವಾರ ಕುವೆಂಪು ಸಭಾಂಗಣದಲ್ಲಿ ಆಯೋಜಿಸಿದ್ದ ಕೆಂಪೇಗೌಡ ವೈದ್ಯಕೀಯ ಮಹಾವಿದ್ಯಾಲಯಕ್ಕೆ 100 ಪದವಿ ಹಾಗೂ ಸ್ನಾತಕೋತ್ತರ ವೈದ್ಯಕೀಯ ಪದವಿ ಕೋರ್ಸ್‌ಗೆ 68 ಸೀಟುಗಳ ಹೆಚ್ಚಳ ಮಾಡಿಸಿo ಮಾಜಿ ಪ್ರಧಾನಿ ಎಚ್.ಡಿ. ದೇವೇಗೌಡ, ಕೇಂದ್ರದ ಆರೋಗ್ಯ ಸಚಿವ ಜೆ.ಪಿ. ನಡ್ಡಾ ಹಾಗೂ ಎಚ್.ಡಿ. ಕುಮಾರಸ್ವಾಮಿ ಅವರಿಗೆ ಕೃತಜ್ಞತೆ ಸಲ್ಲಿಸುವ ಸಮಾರಂಭ ನಡೆಯಿತು.
ಈ ವೇಳೆ ಮಾತನಾಡಿದ ನಂಜಾವಧೂತ ಸ್ವಾಮೀಜಿ ಮಾತನಾಡಿ, ಸಂಘದಲ್ಲಿ ಉನ್ನತ ಹುದ್ದೆಯಲ್ಲಿರುವವರು ಸರ್ವಾಧಿಕಾರಿಯಂತೆ ವರ್ತಿಸುವುದು ಬೇಡ. ಇಲ್ಲಿ ನೀವು ‘ಸರ್ವೆಂಟ್’ ಅಷ್ಟೇ. ನಾವು ಸಹ ಮಠದ ‘ಮಾಲೀಕರಲ್ಲ’. ಮಠ ಕಾಯುವ ‘ಕಾವಲುಗಾರರು’. ಸಂಘಕ್ಕೆ ದ್ರೋಹ ಬಗೆಯಬೇಡಿ. ಸರಕಾರದಿಂದ ಆಡಳಿತಗಾರರನ್ನು ನೇಮಕ ಮಾಡುವ ಸನ್ನಿವೇಶ ತಂದುಕೊಳ್ಳಬೇಡಿ ಎಂದು ಕಿವಿ ಮಾತು ಹೇಳಿದ್ದಾರೆ.
ಕೇಂದ್ರ ಸಚಿವ ಎಚ್.ಡಿ. ಕುಮಾರಸ್ವಾಮಿ ಮಾತನಾಡಿ, ರಾಜ್ಯ ಒಕ್ಕಲಿಗರ ಸಂಘ ಇವತ್ತು ಗುಂಪುಗಾರಿಕೆಯಿಂದ ಸೊರಗುತ್ತಿದೆ. ಪ್ರತಿದಿನ ಗುಂಪುಗಾರಿಕೆ ಮೂಲಕ ಹೊರಗಡೆ ಸಂಘದ ಬಗ್ಗೆ ಜನ ಲಘುವಾಗಿ ಮಾತನಾಡುವ ಪರಿಸ್ಥಿತಿ ಸೃಷ್ಟಿಯಾಗಿದೆ. ಮೂರು ತಿಂಗಳು, ಆರು ತಿಂಗಳಿಗೊಮ್ಮೆ ಪದಾಧಿಕಾರಿಗಳನ್ನು ಬದಲಾವಣೆ ಮಾಡಿಕೊಂಡು ಗುಂಪುಗಾರಿಕೆ ನಡೆಸಿದರೆ ಸಂಘದ ಗತಿ ಏನು? ಎಂದು ಪ್ರಶ್ನಿಸಿ ಕಿಡಿಕಾರಿದ್ದಾರೆ.
ಆದಿಚುಂಚನಗಿರಿ ಮಹಾಸಂಸ್ಥಾನದ ವಿಜಯನಗರ ಶಾಖಾ ಮಠದ ಸೌಮ್ಯನಾಥ ಸ್ವಾಮೀಜಿ ಆಶೀರ್ವಚನ ನೀಡಿದರು. ಒಕ್ಕಲಿಗರ ಸಂಘದ ಅಧ್ಯಕ್ಷ ಸಿ.ಎನ್. ಬಾಲಕೃಷ್ಣ ಅಧ್ಯಕ್ಷತೆ ವಹಿಸಿದ್ದರು.