ಬೆಂಗಳೂರು: ರಾಜ್ಯದಲ್ಲಿ ಮೂರು ಕ್ಷೇತ್ರಗಳಿಗೆ ನಡೆದಿದ್ದ ಉಪ ಚುನಾವಣೆಯಲ್ಲಿ ಕಾಂಗ್ರೆಸ್ ಮೂರು ಕ್ಷೇತ್ರವನ್ನೂ ವಶಕ್ಕೆ ಪಡೆದಿದೆ. ಹೀಗಾಗಿ ಸಿಎಂ ಸಿದ್ದರಾಮಯ್ಯ ಅವರು ಮತದಾರರಿಗೆ ಧನ್ಯವಾದ ಅರ್ಪಿಸಿದ್ದಾರೆ.
ಈ ಗೆಲುವಿನಿಂದ ಸಂತಸಗೊಂಡಿರುವ ಸಿಎಂ ಸಿದ್ದರಾಮಯ್ಯ ಅವರು ಮತದಾರರಿಗೆ ಧನ್ಯವಾದ ತಿಳಿಸಿದ್ದಾರೆ. ಉಪಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಗಳಿಗೆ ಮತನೀಡಿ, ಆಶೀರ್ವದಿಸಿದ ಶಿಗ್ಗಾಂವಿ, ಸಂಡೂರು ಹಾಗೂ ಚನ್ನಪಟ್ಟಣದ ಮತದಾರರಿಗೆ ನನ್ನ ಪ್ರೀತಿ ಪೂರ್ವಕ ಧನ್ಯವಾದಗಳು. ಗೆದ್ದ ಅಭ್ಯರ್ಥಿಗಳಿಗೂ ಹೃದಯಪೂರ್ವಕ ಅಭಿನಂದನೆಗಳು. ವಿಪಕ್ಷಗಳ ನಿರಂತರ ಅಪಪ್ರಚಾರ, ಸುಳ್ಳು ಆರೋಪಗಳನ್ನು ಮೆಟ್ಟಿನಿಂತು ನಾವು ಸಾಧಿಸಿರುವ ಈ ಗೆಲುವು ದಿಗ್ವಿಜಯವಾಗಿ ಕಾಣುತ್ತಿದೆ. ಈ ಗೆಲುವಿನ ಹಿಂದಿರುವ ನಮ್ಮ ಕಾರ್ಯಕರ್ತರು ಮತ್ತು ಮುಖಂಡರ ಅಪಾರ ಶ್ರಮವನ್ನು ನಾನು ಪ್ರಾಮಾಣಿಕವಾಗಿ ನೆನೆಯುತ್ತೇನೆ ಎಂದಿದ್ದಾರೆ.
ಕಾಂಗ್ರೆಸ್ ಶಿಗ್ಗಾವಿ, ಚನ್ನಪಟ್ಟಣ, ಸಂಡೂರು ಉಪಚುನಾವಣೆಯಲ್ಲಿ ಕಾಂಗ್ರೆಸ್ ಭರ್ಜರಿ ಗೆಲುವು ಸಾಧಿಸಿದೆ. ಚನ್ನಪಟ್ಟಣ ವಿಧಾನಸಭಾ ಕ್ಷೇತ್ರದ ಉಪಚುನಾವಣೆಯಲ್ಲಿ ಕಾಂಗ್ರೆಸ್ ಅಭ್ಯರ್ಥಿ ಸಿ.ಪಿ ಯೋಗೇಶ್ವರ್ ಭರ್ಜರಿ ಗೆಲುವು ಸಾಧಿಸಿದ್ದಾರೆ. ಕಾಂಗ್ರೆಸ್ ಅಭ್ಯರ್ಥಿ ಯೋಗೇಶ್ವರ್ ಒಟ್ಟು 1,12,642 ಮತಗಳನ್ನು ಪಡೆಯುವ ಮೂಲಕ ಭರ್ಜರಿ ಜಯ ಸಾಧಿಸಿದ್ದಾರೆ. ಬಿಜೆಪಿ-ಜೆಡಿಎಸ್ ಮೈತ್ರಿ ಅಭ್ಯರ್ಥಿ ನಿಖಿಲ್ ಕುಮಾರಸ್ವಾಮಿ ಮತ್ತೊಮ್ಮೆ ಸೋಲುಂಡಿದ್ದಾರೆ.
ಸಂಡೂರಿನಲ್ಲಿ ನಡೆದ ಚುನಾವಣೆಯಲ್ಲಿ ಕಾಂಗ್ರೆಸ್ ಅಭ್ಯರ್ಥಿ ಅನ್ನಪೂರ್ಣ ಈ ತುಕಾರಾಮ್ ಗೆಲುವು ಸಾಧಿಸಿದ್ದಾರೆ. ಅನ್ನಪೂರ್ಣ ಈ ತುಕಾರಾಮ್ 93,616 ಮತಗಳನ್ನು ಪಡೆದು, ಬಿಜೆಪಿಯ ಬಂಗಾರು ಹನುಮಂತು ಅವರನ್ನು 9,649 ಮತಗಳ ಅಂತರದಿಂದ ಸೋಲಿಸಿದ್ದಾರೆ. ಶಿಗ್ಗಾಂವಿ ವಿಧಾನಸಭಾ ಉಪ ಚುನಾವಣೆಯಲ್ಲಿ ಕಾಂಗ್ರೆಸ್ ಅಭ್ಯರ್ಥಿ ಪಠಾಣ್ ಯಾಸಿರ್ ಅಹ್ಮದ್‌ಖಾನ್ ಒಟ್ಟು 1,00,756 ಮತಗಳನ್ನು ಪಡೆದು ಭರ್ಜರಿ ಗೆಲುವು ಸಾಧಿಸಿದ್ದಾರೆ. ಈ ಮೂಲಕ ತಮ್ಮ ಪ್ರತಿಸ್ಪರ್ಧಿ ಬಿಜೆಪಿಯ ಭರತ್ ಬೊಮ್ಮಾಯಿ ಅವರನ್ನು 13,448 ಮತಗಳ ಅಂತರದಿಂದ ಸೋಲಿಸಿದ್ದಾರೆ.