ಜಾರ್ಖಂಡ್ ನಲ್ಲಿ ಜೆಎಂಎಂ ಪಕ್ಷ ಗೆದ್ದು ಬೀಗಿದೆ. ಈ ಹಿನ್ನೆಲೆಯಲ್ಲಿ ಪಕ್ಷದ ನಾಯಕ ಹೇಮಂತ್ ಸೊರೆನ್ ಅವರು ನ. 26ರಂದು ನಾಲ್ಕನೇ ಬಾರಿಗೆ ಸಿಎಂ ಆಗ ಪ್ರಮಾಣ ವಚನ ಸ್ವೀಕರಿಸಲಿದ್ದಾರೆ ಎಂದು ತಿಳಿದು ಬಂದಿದೆ.
ಹೇಮಂತ್ ಸೊರೆನ್ ಅವರು ಸಂಪುಟ ರಚಿಸುವುದಕ್ಕಾಗಿ ಕಾಂಗ್ರೆಸ್ ಹಿರಿಯ ನಾಯಕರೊಂದಿಗೆ ಚರ್ಚೆ ನಡೆಸುತ್ತಿದ್ದಾರೆ ಎನ್ನಲಾಗಿದೆ. ಸಂಪುಟದಲ್ಲಿ ಸಿಎಂ ಹೊರತುಪಡಿಸಿ ಜಾರ್ಖಂಡ್ ಮುಕ್ತಿ ಮೋರ್ಚಾ (ಜೆಎಂಎಂ)ದ ಆರು ಸಚಿವರು, ಕಾಂಗ್ರೆಸ್ನ ನಾಲ್ವರು ಮತ್ತು ರಾಷ್ಟ್ರೀಯ ಜನತಾ ದಳ (ಆರ್ಜೆಡಿ) ಒಬ್ಬರು ಸಚಿವರು ಪ್ರಮಾಣ ವಚನ ಸ್ವೀಕರಿಸಲಿದ್ದಾರೆ ಎನ್ನಲಾಗಿದೆ.
81 ಸದಸ್ಯ ಬಲದ ವಿಧಾನಸಭೆಯಲ್ಲಿ 56 ಸ್ಥಾನಗಳನ್ನು ಗೆಲ್ಲುವ ಮೂಲಕ ಜೆಎಂಎಂ ನೇತೃತ್ವದ ಒಕ್ಕೂಟ ಸತತ ಎರಡನೇ ಬಾರಿಗೆ ಅಧಿಕಾರದ ಗದ್ದುಗೆ ಏರುತ್ತಿದೆ. ಈ ಪೈಕಿ ಜೆಎಂಎಂ ಪಕ್ಷ 34 ಸ್ಥಾನಗಳಲ್ಲಿ ಗೆದ್ದಿದೆ. ಕಾಂಗ್ರೆಸ್ ಮತ್ತು ಆರ್ ಜೆಡಿ ಕ್ರಮವಾಗಿ 16 ಮತ್ತು ನಾಲ್ಕು ಸ್ಥಾನಗಳಲ್ಲಿ ಗೆದ್ದಿವೆ. ಎನ್ಡಿಎ ಕೇವಲ 24 ಸ್ಥಾನಗಳಲ್ಲಿ ಗೆದ್ದಿದೆ. ಈ ಪೈಕಿ ಬಿಜೆಪಿ 21 ಇನ್ನುಳಿದ ಮೂರು ಮಿತ್ರ ಪಕ್ಷಗಳು ತಲಾ ಒಂದು ಕ್ಷೇತ್ರದಲ್ಲಿ ಗೆಲುವು ಸಾಧಿಸಿವೆ.
ಈ ಕಾರ್ಯಕ್ರಮಕ್ಕೆ ಲೋಕಸಭಾ ವಿರೋಧ ಪಕ್ಷದ ನಾಯಕ (ಎಲ್ಒಪಿ) ರಾಹುಲ್ ಗಾಂಧಿ , ಟಿಎಂಸಿ ಮುಖ್ಯಸ್ಥೆ ಮತ್ತು ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ, ಸಮಾಜವಾದಿ ಪಕ್ಷದ ಮುಖ್ಯಸ್ಥ ಅಖಿಲೇಶ್ ಯಾದವ್, ಎಎಪಿ ರಾಷ್ಟ್ರೀಯ ಸಂಚಾಲಕ ಅರವಿಂದ್ ಕೇಜ್ರಿವಾಲ್, ಆರ್ಜೆಡಿ ನಾಯಕ ತೇಜಸ್ವಿ ಯಾದವ್ ಸೇರಿದಂತೆ ಹಲವು ನಾಯಕರು ಭಾಗವಹಿಸುವ ಸಾಧ್ಯತೆ ಇದೆ.