ಬೆಂಗಳೂರು: ಇತ್ತೀಚೆಗೆ ಮಹಿಳಾ ದೌರ್ಜನ್ಯ ಪ್ರಕರಣಗಳು ಹೆಚ್ಚಾಗುತ್ತಿದ್ದು, ಸಮಾಜದಲ್ಲಿ ಪ್ರಜ್ಞಾವಂತರು ಆತಂಕ ವ್ಯಕ್ತಪಡಿಸುವಂತಾಗಿದೆ.
ಪ್ರತಿ ವರ್ಷ ನ. 25ರಂದು ಅಂತಾರಾಷ್ಟ್ರೀಯ ಮಹಿಳಾ ದೌರ್ಜನ್ಯ ವಿರೋಧಿ ದಿನ ನಡೆದಿದೆ. ಅಂತಾರಾಷ್ಟ್ರೀಯ ಸಮೀಕ್ಷೆಗಳಂತೆ, ಪ್ರತಿ 3ರಲ್ಲಿ ಓರ್ವ ಮಹಿಳೆ ತನ್ನ ಜೀವಿತಾವಧಿಯಲ್ಲಿ ಒಂದಲ್ಲ ಒಂದು ರೀತಿಯಲ್ಲಿ ದೌರ್ಜನ್ಯಕ್ಕೆ ಒಳಗಾಗಿದ್ದಾರೆ.
ಸಾಕಷ್ಟು ಕಠಿಣ ಕಾನೂನು ಜಾರಿಯಲ್ಲಿದ್ದರೂ ಮಹಿಳೆಯರ ಮೇಲಿನ ದೌರ್ಜನ್ಯ ಪ್ರಕರಣಗಳು ಕಡಿಮೆಯಾಗಿಲ್ಲ. ವರದಕ್ಷಿಣೆ ಕಿರುಕುಳ, ಉದ್ಯೋಗ ಸ್ಥಳಗಳಲ್ಲಿನ ದೌರ್ಜನ್ಯ, ಅತ್ಯಾಚಾರ, ಲೈಂಗಿಕ ಕಿರುಕುಳ, ಕೌಟುಂಬಿಕ ದೌರ್ಜನ್ಯ, ಲೈಂಗಿಕ ದೌರ್ಜನ್ಯ, ಪೊಲೀಸ್ ದೌರ್ಜನ್ಯ, ಆಸ್ತಿ ವಿವಾದ ಸೇರಿದಂತೆ ಹಲವಾರು ರೀತಿಯಲ್ಲಿ ಮಹಿಳೆಯರು ದೌರ್ಜನ್ಯಕ್ಕೆ ಒಳಗಾಗಿದ್ದಾರೆ. ಅಂದರೆ, ಐದು ವರ್ಷಗಳಲ್ಲಿ ರಾಜ್ಯಾದ್ಯಂತ 10 ಸಾವಿರಕ್ಕೂ ಅಧಿಕ ದೂರುಗಳು ರಾಜ್ಯ ಮಹಿಳಾ ಆಯೋಗದ ಮೆಟ್ಟಿಲು ಹತ್ತಿವೆ. ಈ ಅಂಕಿ- ಸಂಖ್ಯೆ ಕೇಳಿ ಪ್ರಜ್ಞಾವಂತರು ಆತಂಕ ವ್ಯಕ್ತಪಡಿಸುತ್ತಿದ್ದಾರೆ.
ಕಳೆದ ಐದು ವರ್ಷಗಳಲ್ಲಿ ರಕ್ಷಣೆ ಕೋರಿ ಒಟ್ಟು 2,895 ಪ್ರಕರಣಗಳು ದಾಖಲಾಗಿವೆ. ಕಳೆದ ಐದು ವರ್ಷಗಳಲ್ಲಿ ಬೆಂಗಳೂರು ನಗರ ಜಿಲ್ಲೆಗೆ ಸಂಬಂಧಿಸಿದಂತೆ 2,861 ಪ್ರಕರಣಗಳು ಆಯೋಗದಲ್ಲಿ ದಾಖಲಾಗಿವೆ. ಈ ಪೈಕಿ ರಕ್ಷಣೆ ಕೋರಿ ಹಾಗೂ ಕೌಟುಂಬಿಕ ದೌರ್ಜನ್ಯ ಪ್ರಕರಣಗಳು ತಲಾ 802 ದೂರುಗಳು ದಾಖಲಾಗಿವೆ. 191 ವರದಕ್ಷಿಣೆ ಕಿರುಕುಳ, 55 ಪ್ರೇಮ ಪ್ರಕರಣ, 24 ಲೈಂಗಿಕ ಕಿರುಕುಳ, 10 ಅತ್ಯಾಚಾರ ಪ್ರಕರಣಗಳು ದಾಖಲಾಗಿವೆ. ಈ ಪೈಕಿ ಶೇ. 50ರಷ್ಟು ಪ್ರಜ್ಞಾವಂತರೇ ಹೆಚ್ಚು ಕಿರುಕುಳಕ್ಕೆ ಒಳಗಾಗಿದ್ದಾರೆ. ಇದು ಆತಂಕಕ್ಕೆ ಕಾರಣವಾಗಿದೆ.