ಭಾರತೀಯ ಕ್ರಿಕೆಟ್ ತಂಡದ ಬೌಲರ್ ಜಸ್ಪ್ರೀತ್ ಬುಮ್ರಾ ಮತ್ತೊಮ್ಮೆ ವಿಶ್ವದ ನಂಬರ್ 1 ಟೆಸ್ಟ್ ಬೌಲರ್ ಆಗಿ ಹೊರ ಹೊಮ್ಮಿದ್ದಾರೆ.
ಐಸಿಸಿ ಟೆಸ್ಟ್ ಶ್ರೇಯಾಂಕ ಬಿಡುಗಡೆಯಾಗಿದ್ದು, ಜಸ್ಪ್ರೀತ್ ಬುಮ್ರಾ ಮೂರನೇ ಸ್ಥಾನದಿಂದ ನಂ. 1 ಸ್ಥಾನಕ್ಕೆ ಜಿಗಿತ ಕಂಡಿದ್ದಾರೆ. ಇದಕ್ಕೂ ಮೊದಲು ದಕ್ಷಿಣ ಆಫ್ರಿಕಾದ ವೇಗಿ ಕಗಿಸೊ ರಬಾಡ ಅಗ್ರಸ್ಥಾನದಲ್ಲಿದ್ದರೆ, ಆಸೀಸ್ ವೇಗಿ ಜೋಶ್ ಹ್ಯಾಜಲ್‌ವುಡ್ ಎರಡನೇ ಸ್ಥಾನದಲ್ಲಿದ್ದರು. ಆದರೆ, ಆಸ್ಟ್ರೇಲಿಯಾ ವಿರುದ್ಧ ನಡೆದ ಮೊದಲ ಟೆಸ್ಟ್ ನಲ್ಲಿ ಬುಮ್ರಾ 8 ವಿಕೆಟ್ ಪಡೆಯುವುದರ ಮೂಲಕ ನಂ. 1 ಸ್ಥಾನಕ್ಕೆ ಲಗ್ಗೆಯಿಟ್ಟಿದ್ದಾರೆ.
ಜಸ್ಪ್ರೀತ್ ಬುಮ್ರಾ 883 ರೇಟಿಂಗ್ ಅಂಕಗಳೊಂದಿಗೆ ನಂ. 1 ಸ್ಥಾನ ಪಡೆದಿದ್ದಾರೆ. ಎರಡನೇ ಸ್ಥಾನಕ್ಕೆ ಜಾರಿರುವ ದಕ್ಷಿಣ ಆಫ್ರಿಕಾದ ರಬಾಡ 872 ರೇಟಿಂಗ್ ಪಾಯಿಂಟ್ ಪಡೆದಿದ್ದಾರೆ. ಜೋಶ್ ಹ್ಯಾಜಲ್‌ವುಡ್ 860 ರೇಟಿಂಗ್ ಪಾಯಿಂಟ್‌ಗಳೊಂದಿಗೆ ಮೂರನೇ ಸ್ಥಾನದಲ್ಲಿದ್ದಾರೆ.
ಬುಮ್ರಾ ಅವರ ಮಾರಕ ದಾಳಿಯಿಂದಾಗಿ ಭಾರತ ತಂಡ ಆಸ್ಟ್ರೇಲಿಯಾ ವಿರುದ್ಧ ಭರ್ಜರಿ ಜಯ ಸಾಧಿಸಿದೆ. ಮೊದಲ ಇನ್ನಿಂಗ್ಸ್ ನಲ್ಲಿ ಆಸ್ಟ್ರೇಲಿಯಾ ವಿರುದ್ಧ ಬುಮ್ರಾ 5 ವಿಕೆಟ್ ಪಡೆದಿದ್ದರು. ಅಲ್ಲದೇ, ಎರಡನೇ ಇನ್ನಿಂಗ್ಸ್ ನಲ್ಲಿ ಪ್ರಮುಖ 3 ವಿಕೆಟ್ ಪಡೆದು ಮಿಂಚಿದ್ದರು. ಹೀಗಾಗಿ ಭಾರತ ಗೆಲ್ಲುವಲ್ಲಿ ಬುಮ್ರಾ ಪಾತ್ರ ದೊಡ್ಡದಾಗಿತ್ತು.