ಬೆಂಗಳೂರು: ಸಿಎಂ ಸಿದ್ದರಾಮಯ್ಯ ಅಭಿಮಾನಿಗಳಿಂದ ಹಾಸನದಲ್ಲಿ ನಡೆಸಲು ಉದ್ಧೇಶಿಸಲಾಗಿರುವ ಸ್ವಾಭಿಮಾನಿ ಸಮಾವೇಶಕ್ಕೆ ಎಐಸಿಸಿ ಅಧ್ಯಕ್ಷ ರಾಹುಲ್ ಗಾಂಧಿ ಗ್ರೀನ್ ಸಿಗ್ನಲ್ ನೀಡಿದ್ದಾರೆ.
ಸಿಎಂ ಸಿದ್ದರಾಮಯ್ಯ ಅವರು ದೆಹಲಿಯಲ್ಲಿ ರಾಹುಲ್ ಗಾಂಧಿ ಹಾಗೂ ಹೈಕಮಾಂಡ್ ನಾಯಕರನ್ನು ಭೇಟಿ ಮಾಡಿ ಮಾತುಕತೆ ನಡೆಸಿದ್ದಾರೆ. ಈ ಸಂದರ್ಭದಲ್ಲಿ ಹಾಸನ ಸಮಾವೇಶದ ಕುರಿತು ಮಾತನಾಡಿದ್ದಾರೆ. ಈ ವೇಳೆ ರಾಹುಲ್ ಗಾಂಧಿ ಒಪ್ಪಿಗೆ ಸೂಚಿಸಿದ್ದಾರೆ ಎಂದು ತಿಳಿದು ಬಂದಿದೆ.
ಡಿ. 5 ರಂದು ಹಾಸನದಲ್ಲಿ ಸಿದ್ದರಾಮಯ್ಯ ಅಭಿಮಾನಿಗಳು ಬೃಹತ್ ಸಮಾವೇಶ ಹಮ್ಮಿಕೊಂಡಿದ್ದಾರೆ. ಹಿಂದುಳಿದ ವರ್ಗಗಳ ಸಂಘಟನೆಗಳು ಈ ಸಮಾವೇಶವನ್ನು ಹಮ್ಮಿಕೊಂಡಿದ್ದರೂ ಈ ಎಲ್ಲಾ ವ್ಯವಸ್ಥೆಯನ್ನು ಸಚಿವರಾದ ಕೆಎನ್ ರಾಜಣ್ಣ ಹಾಗೂ ಮಹಾದೇವಪ್ಪ, ಶಾಸಕ ಶಿವಲಿಂಗೇಗೌಡ ಸೇರಿದಂತೆ ಹಲವರು ಮಾಡುತ್ತಿದ್ದಾರೆ.
ಇತ್ತೀಚೆಗೆ ಅನಾಮಧೇಯ ಪತ್ರ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರಿಗೆ ಪತ್ರ ಬಂದಿತ್ತು. ಸಿದ್ದರಾಮಯ್ಯ ಅವರ ಪರವಾಗಿ ನಡೆಯುತ್ತಿರುವ ಸಮಾವೇಶ ಪಕ್ಷದ ವೇದಿಕೆಯಲ್ಲೇ ನಡೆಯಲಿ. ಪ್ರತ್ಯೇಕವಾಗಿ ಸಮಾವೇಶವನ್ನು ಹಮ್ಮಿಕೊಳ್ಳುವ ಅಗತ್ಯ ಏನಿದೆ? ಎಂದು ಪ್ರಶ್ನಿಸಲಾಗಿತ್ತು. ಹೀಗಾಗಿ ದೆಹಲಿಯಲ್ಲಿ ಸಿಎಂ ಸಿದ್ದರಾಮಯ್ಯ ರಾಹುಲ್ ಗಾಂಧಿ ಹಾಗೂ ಮಲ್ಲಿಕಾರ್ಜುನ ಖರ್ಗೆ ಅವರನ್ನು ಭೇಟಿ ಮಾಡಿದ್ದರು. ಈ ವೇಳೆ ಗ್ರೀನ್ ಸಿಗ್ನಲ್ ಸಿಕ್ಕಿದೆ ಎಂದು ಹೇಳಿದ್ದಾರೆ.