ಬೆಂಗಳೂರು: ದಕ್ಷಿಣ ಭಾರತದ ಕೆಲವು ರಾಜ್ಯಗಳಿಗೆ ಫೆಂಗಲ್ ಚಂಡಮಾರುತ ದೊಡ್ಡ ಕಂಟಕವಾಗುತ್ತಿದೆ. ನೈಋತ್ಯ ಬಂಗಾಳ ಕೊಲ್ಲಿಯಲ್ಲಿ ವಾಯುಭಾರ ಕುಸಿತವಾಗಿದ್ದರಿಂದಾಗಿ ಫೆಂಗಲ್ ಅಬ್ಬರ ಜೋರಾಗಿದೆ. ಹೀಗಾಗಿ ರಾಜ್ಯದ ಕೆಲವೆಡೆ ಮುಂದಿನ 48 ಗಂಟೆಗಳ ಕಾಲ ಭಾರೀ ಮಳೆಯಾಗುವ ಮುನ್ಸೂಚನೆಯನ್ನು ಹವಾಮಾನ ಇಲಾಖೆ ನೀಡಿದೆ.
ಕರಾವಳಿಯ ದಕ್ಷಿಣ ಕನ್ನಡ, ಉಡುಪಿ, ಮಲೆನಾಡಿನ ಶಿವಮೊಗ್ಗ, ಚಿಕ್ಕಮಗಳೂರು, ಹಾಸನ, ಕೊಡಗು, ದಕ್ಷಿಣ ಕರಾವಳಿಯ ಮೈಸೂರು, ಮಂಡ್ಯ, ಚಾಮರಾಜನಗರ ಜಿಲ್ಲೆಗಳಲ್ಲಿ ಭಾರೀ ಮಳೆಯಾಗುವ ಮುನ್ಸೂಚೆಯನ್ನು ಹವಾಮಾನ ಇಲಾಖೆ ನೀಡಿದೆ. ಹೀಗಾಗಿ ಡಿ. 2 ಹಾಗೂ ಡಿ. 3ರಂದು ಈ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ. ಅಲ್ಲದೇ, ಈ ಜಿಲ್ಲೆಗಳಲ್ಲಿ ಸುಮಾರು 35 ಮಿಮೀ ನಿಂದ 85 ಮಿಮೀ ನಷ್ಟು ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.
ಬೆಂಗಳೂರಿಗೂ ಫೆಂಗಲ್ ಕಾಟ ಇರಲಿದ್ದು, ಎರಡ್ಮೂರು ದಿನ ಮಳೆಯಾಗುವ ಸಾಧ್ಯತೆ ಇದೆ. ಅಲ್ಲದೇ, ಬೆಂಗಳೂರು, ಕೋಲಾರ, ಚಿಕ್ಕಬಳ್ಳಾಪುರ, ತುಮಕೂರು, ರಾಮನಗರ, ಮಂಡ್ಯ, ಹಾಸನ, ಚಿಕ್ಕಮಗಳೂರು, ಉಡುಪಿಯಲ್ಲಿ ಮುಂದಿನ 48 ಗಂಟೆಗಳಲ್ಲಿ ಮಳೆಯಾಗುವ ಸಾಧ್ಯತೆಯಿದೆ.