ಹಿರಿಯ ರಾಜಕಾರಣ, ಮಾಜಿ ಸಿಎಂ ಎಸ್.ಎಂ. ಕೃಷ್ಣ ನಿಧನರಾಗಿದ್ದು, ಮಾಜಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಸಂತಾಪ ಸೂಚಿಸಿದ್ದಾರೆ.
ಸಾಮಾಜಿಕ ಜಾಲತಾಣದಲ್ಲಿ ಬರೆದುಕೊಂಡಿರುವ ಅವರು, ಮುತ್ಸದ್ಧಿ ರಾಜಕಾರಣಿ, ಕರ್ನಾಟಕದ ಮಾಜಿ ಮುಖ್ಯಮಂತ್ರಿಗಳು, ಮಾಜಿ ಕೇಂದ್ರ ವಿದೇಶಾಂಗ ಸಚಿವರು, ಪಕ್ಷದ ಹಿರಿಯ ನಾಯಕ, ಪದ್ಮವಿಭೂಷಣ ಎಸ್.ಎಂ.ಕೃಷ್ಣ ಅವರು ನಮ್ಮನ್ನು ಬಿಟ್ಟು ಅಗಲಿದ ಸುದ್ದಿ ತಿಳಿದು ಅತೀವ ಆಘಾತವಾಗಿದೆ. ರಾಷ್ಟ್ರ, ರಾಜ್ಯದ ಅಭಿವೃದ್ಧಿಗೆ ಅಪಾರ ಕೊಡುಗೆ ನೀಡಿದ್ದ ಎಸ್.ಎಂ.ಕೃಷ್ಣ ಅವರ ನಿಧನದಿಂದ ನಾಡು ಒಬ್ಬ ಶ್ರೇಷ್ಠ ನಾಯಕನನ್ನು ಕಳೆದುಕೊಂಡಿದೆ. ಅವರ ಅಗಲಿಕೆಯಿಂದ ವೈಯಕ್ತಿಕವಾಗಿ ಒಬ್ಬ ಹಿರಿಯಣ್ಣನನ್ನು ಕಳೆದುಕೊಂಡ ನೋವು ನನಗಾಗಿದೆ ಎಂದು ಕಂಬನಿ ಮಿಡಿದಿದ್ದಾರೆ.
ಅಗಲಿದ ಆ ಹಿರಿಯ ಚೇತನಕ್ಕೆ ದೇವರು ಉತ್ತಮ ಸದ್ಗತಿಯನ್ನು ದಯಪಾಲಿಸಲಿ ಎಂದು ಪ್ರಾರ್ಥಿಸುತ್ತೇನೆ. ಅವರ ಕುಟುಂಬದ ಸದಸ್ಯರು, ಅಪಾರ ಅಭಿಮಾನಿಗಳಿಗೆ ಈ ನೋವನ್ನು ಭರಿಸುವ ಶಕ್ತಿ ನೀಡಲಿ ಎಂದು ಕೋರುತ್ತೇನೆ. ಓಂ ಶಾಂತಿ” ಎಂದು ಸಂತಾಪ ಸೂಚಿಸಿದ್ದಾರೆ.
ಸಾಮಾಜಿಕ ಜಾಲತಾಣದಲ್ಲಿ ಟ್ವೀಟ್ ಮಾಡಿರುವ ಮಾಜಿ ಸಿಎಂ ಬಸವರಾಜ ಬೊಮ್ಮಾಯಿ, ಮಾಜಿ ಮುಖ್ಯಮಂತ್ರಿ ಹಾಗೂ ಕೇಂದ್ರದ ಮಾಜಿ ಸಚಿವರಾದ ಎಸ್. ಎಂ. ಕೃಷ್ಣ ಅವರು ನಿಧನರಾಗಿರುವ ಸುದ್ದಿ ಕೇಳಿ ಅತ್ಯಂತ ದುಃಖವಾಗಿದೆ. ಮಿತ ಭಾಷಿ, ಸೌಮ್ಯ ಸ್ವಭಾವದ ಎಸ್. ಎಂ. ಕೃಷ್ಣ ಅವರು ಸುಮಾರು ಆರು ದಶಕಗಳ ಕಾಲ ರಾಜ್ಯ ಮತ್ತು ರಾಷ್ಟ್ರ ರಾಜಕಾರಣದಲ್ಲಿ ತಮ್ಮದೇ ಆದ ಛಾಪು ಮೂಡಿಸಿ ಇಂದಿನ ರಾಜಕಾರಣಿಗಳಿಗೆ ಮಾದರಿಯಾಗಿದ್ದಾರೆ ಎಂದು ಬರೆದುಕೊಂಡಿದ್ದಾರೆ.
“ಬೆಂಗಳೂರಿಗೆ ಐಟಿ ಬಿಟಿ ಕಂಪನಿಗಳನ್ನು ತರುವ ಮೂಲಕ ಬೆಂಗಳೂರಿಗೆ ವಿಶ್ವ ಮಾನ್ಯತೆ ತಂದು ಕೊಟ್ಟಿದ್ದರು. ಅವರ ಅಗಲಿಕೆ ರಾಜ್ಯ, ರಾಷ್ಟ್ರ ರಾಜಕಾರಣದಲ್ಲಿ ಒಬ್ಬ ಮಾರ್ಗದರ್ಶಕರನ್ನು ಕಳೆದುಕೊಂಡಂತಾಗಿದೆ. ಅವರ ನಿಧನವು ನನಗೆ ವಯಕ್ತಿಕವಾಗಿ ಅತ್ಯಂತ ನೋವು ತಂದಿದ್ದು, ಅವರ ಅಗಲಿಕೆಯ ದುಃಖವನ್ನು ಭರಿಸುವ ಶಕ್ತಿಯನ್ನು ಅವರ ಕುಟುಂಬ ಹಾಗೂ ಅವರ ಅಪಾರ ಅಭಿಮಾನಿಗಳಿಗೆ ಆ ಭಗವಂತ ಕರುಣಿಸಲಿ, ಅವರ ಆತ್ಮಕ್ಕೆ ಶಾಂತಿ ನೀಡಲಿ ಎಂದು ಪ್ರಾರ್ಥಿಸುತ್ತೇನೆ” ಎಂದು ಟ್ವೀಟ್ ಮೂಲಕ ಸಂತಾಪ ಸೂಚಿಸಿದ್ದಾರೆ