ಬೆಂಗಳೂರು: ಮುಡಾ ಹಗರಣದ ಪ್ರಕರಣವನ್ನು ಸಿಬಿಐಗೆ ವಹಿಸಬೇಕು ಎಂದು ಕೋರಿ ಸಲ್ಲಿಸಿದ್ದ ಅರ್ಜಿ ವಿಚಾರಣೆಯನ್ನು ಹೈಕೋರ್ಟ್ ಡಿಸೆಂಬರ್ 19ಕ್ಕೆ ಮುಂದೂಡಿದೆ.
ವಿಚಾರಣೆ ಸಂದರ್ಭದಲ್ಲಿ ಜಮೀನಿನ ಮೂಲ ಮಾಲೀಕ ದೇವರಾಜು ಪರ ಹಿರಿಯ ವಕೀಲ ದುಷ್ಯಂತ್ ದವೆ, ಸಿಎಂ ವಿರುದ್ದ ಪ್ರಾಸಿಕ್ಯೂಷನ್ಗೆ ಅನುಮತಿ ನೀಡಿರುವ ಕ್ರಮವನ್ನು ಎತ್ತಿ ಹಿಡಿದಿರುವ ಏಕ ಸದಸ್ಯ ಪೀಠದ ಆದೇಶವನ್ನು ಪ್ರಶ್ನಿಸಿರುವ ಮೇಲ್ಮನವಿ ಅರ್ಜಿ ವಿಭಾಗೀಯ ಪೀಠದಲ್ಲಿ ವಿಚಾರಣೆ ಹಂತದಲ್ಲಿದೆ. ಆದೇಶದಿಂದ ಪ್ರಕರಣಕ್ಕೂ ನಮಗೂ ಸಂಬಂಧವೇ ಇಲ್ಲದಿದ್ದರೂ ವಿಚಾರಣೆ ಎದುರಿಸಬೇಕಾಗಿದೆ. ಹೀಗಾಗಿ ಅರ್ಜಿ ವಿಚಾರಣೆ ಮುಂದೂಡಬೇಕು ಎಂದು ಕೋರಿದರು.
ಸರ್ಕಾರದ ಪರ ಅಡ್ವೋಕೇಟ್ ಜನರಲ್ ಶಶಿಕಿರಣ್ ಶೆಟ್ಟಿ, “ಪ್ರಕರಣದ ಕುರಿತು ಇಲ್ಲಿಯವರೆಗೆ ಕೆಲ ಪ್ರತಿವಾದಿಗಳಿಗೆ ನೋಟಿಸ್ ಜಾರಿಯಾಗಿಲ್ಲ. ಹೀಗಾಗಿ ಕಾಲಾವಕಾಶ ನೀಡಬೇಕು” ಎಂದು ಮನವಿ ಮಾಡಿದರು.
ಹಿರಿಯ ವಕೀಲ ಕಪಿಲ್ ಸಿಬಲ್, “ಅರ್ಜಿದಾರರ ಮನವಿಯಂತೆ ಪ್ರಕರಣದ ತನಿಖೆಯನ್ನು ಸಿಬಿಐಗೆ ವಹಿಸುವುದಕ್ಕೂ ಮುನ್ನ ಪ್ರತಿವಾದಿಗಳ ವಾದ ಕೇಳಬೇಕು. ಹೀಗಾಗಿ, ಪ್ರತಿವಾದಿಗಳಿಗೆ ನೋಟಿಸ್ ಜಾರಿಯಾಗದಿರುವುದರಿಂದ ಕಾಲಾವಕಾಶ ನೀಡಬೇಕು ಎಂದು ಮನವಿ ಮಾಡಿದರು.
ದೂರುದಾರ ಸ್ನೇಹಮಯಿ ಕೃಷ್ಣ ವಿನಾಕಾರಣ ಅಡ್ವೋಕೇಟ್ ಜನರಲ್ ವಿರುದ್ದ ವೈಯಕ್ತಿಕ ಆರೋಪ ಮಾಡುತ್ತಿದ್ದಾರೆ. ಕೋರ್ಟ್ ಇದನ್ನು ಪರಿಗಣಿಸಬೇಕು ಎಂದು ಮನವಿ ಮಾಡಿದರು. ಆಕ್ಷೇಪಣೆಗಳಿದ್ದರೆ ಸಲ್ಲಿಸಲು ಪ್ರತಿವಾದಿಗಳಿಗೆ ಸೂಚಿಸಿದ ಕೋರ್ಟ್, ವಿಚಾರಣೆ ಮುಂದೂಡಿತು