ಬೆಳಗಾವಿ: ಮಾಜಿ ಸಿಎಂ ಎಸ್.ಎಂ.ಕೃಷ್ಣ ಅವರು ರಾಜ್ಯಕ್ಕೆ ಸಾಕಷ್ಟು ಕೊಡುಗೆಗಳನ್ನು ನೀಡಿದ್ದಾರೆ. ಹೀಗಾಗಿ ಅವರ ಪ್ರತಿಮೆಯನ್ನು ವಿಧಾನಸೌಧದ ಆವರಣದಲ್ಲಿ ನಿರ್ಮಿಸಬೇಕೆಂದು ಸಚಿವ ಎಚ್.ಕೆ. ಪಾಟೀಲ್ ಮನವಿ ಮಾಡಿದ್ದಾರೆ.
ಸಂತಾಪ ಸೂಚನಾ ನಿರ್ಣಯದ ಮೇಲೆ ಮಾತನಾಡಿದ ಅವರು, ಎಸ್.ಎಂ.ಕೃಷ್ಣ ಅವರು ಸರ್ಕಾರದ ಒಟ್ಟು ಆಯವ್ಯಯದಲ್ಲಿ ಶೇ.37ರಷ್ಟು ನೀರಾವರಿ ಯೋಜನೆಗಳಿಗೆ ಮೀಸಲು ಇರಿಸಿದರು. ಇದರಲ್ಲಿ ಶೇ.75 ರಷ್ಟು ಅನುದಾನ ಉತ್ತರ ಕರ್ನಾಟಕ ನೀರಾವರಿ ಯೋಜನೆಗಳಿಗೆ ಒದಗಿಸುವ ಮೂಲಕ ಉತ್ತರ ಕರ್ನಾಟಕ ಅಭಿವೃದ್ದಿಗೆ ಸಾಕಷ್ಟು ಕೊಡುಗೆ ನೀಡಿದ್ದಾರೆ.
ಪ್ರಾದೇಶಿಕ ಅಸಮತೋಲನತೆಯನ್ನು ನಿವಾರಿಸಲು ಎಸ್.ಎಂ.ಕೃಷ್ಣ ಅವರು ಡಾ.ಡಿ.ಎಂ.ನಂಜುಡಪ್ಪ ಅವರ ನೇತೃತ್ವದಲ್ಲಿ ಸಮಿತಿ ರಚಿಸಿದರು. ವರದಿ ಆಧರಿಸಿ ಹಿಂದುಳಿದ ಪ್ರದೇಶಗಳಿಗೆ ಹೆಚ್ಚಿನ ಅನುದಾನ ನೀಡಿದರು.
ತಮ್ಮ ಅಧಿಕಾರವದಿಯಲ್ಲಿ ಸಹಕಾರ ಸದಸ್ಯರಿಗೆ ಯಶಸ್ವಿನಿ ಯೋಜನೆ ಜಾರಿ ಮಾಡಿದರು. ಮಹಿಳೆಯರ ಆರ್ಥಿಕ ಸಬಲೀಕರಣಕ್ಕಾಗಿ ಸ್ತ್ರೀ ಶಕ್ತಿ ಯೋಜನೆ ಜಾರಿಗೆ ತಂದಿದ್ದಾರೆ. ಹೀಗಾಗಿ ಇಂತಹ ನಾಯಕನನ್ನು ಸ್ಮರಿಸುವುದಕ್ಕಾಗಿ ಪ್ರತಿಮೆ ಅನಾವರಣಗೊಳಿಸಬೇಕು ಎಂದು ಮನವಿ ಮಾಡಿದ್ದಾರೆ..