ಬೆಂಗಳೂರು: ಪಶ್ಚಿಮ ಬಂಗಾಳಕೊಲ್ಲಿಯಲ್ಲಿ ದಟ್ಟ ಮೋಡ ನಿರ್ಮಾಣವಾಗಿದ್ದರಿಂದಾಗಿ ರಾಜ್ಯಕ್ಕೆ ಮತ್ತೆ ಮಳೆಯ ಕಾಟ ಶುರುವಾಗಿದೆ.
ರಾಜ್ಯದ ಕರಾವಳಿ ಮತ್ತು ದಕ್ಷಿಣ ಒಳನಾಡಿನಲ್ಲಿ ಎರಡು ದಿನ ವ್ಯಾಪಕ ಮಳೆಯಾಗುವ ಮುನ್ಸೂಚನೆಯನ್ನು ಹವಾಮಾನ ಇಲಾಖೆ ನೀಡಿದೆ. ತುಮಕೂರು, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಚಿತ್ರದುರ್ಗ, ಚಾಮರಾಜನಗರ, ರಾಮನಗರ, ಕೋಲಾರ, ಮೈಸೂರು, ಮಂಡ್ಯ ಮತ್ತು ಕೊಡಗು ಜಿಲ್ಲೆಗಳ ಒಂದೆರಡು ಕಡೆಗಳಲ್ಲಿ ಭಾರೀ ಮಳೆ, ಗುಡುಗು ಸಹಿತ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
ದಕ್ಷಿಣ ಒಳನಾಡಿನ ಬೆಂಗಳೂರು ನಗರ, ಗ್ರಾಮಾಂತರ, ಚಾಮರಾಜನಗರ, ಚಿತ್ರದುರ್ಗ ಕೋಲಾರ, ಮಂಡ್ಯ, ಮೈಸೂರು, ರಾಮನಗರ, ತುಮಕೂರು, ಮಲೆನಾಡಿನ ಕೊಡಗು ಜಿಲ್ಲೆಗಳಲ್ಲಿ ವ್ಯಾಪಕ ಮಳೆಯಾಗುವ ಮುನ್ಸೂಚನೆ ನೀಡಲಾಗಿದೆ. ಹೀಗಾಗಿ ಈ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ.
ಡಿ. 13 ಮತ್ತು 14ರಂದು ಕರಾವಳಿ ಮತ್ತು ದಕ್ಷಿಣ ಒಳನಾಡಿನ ಎಲ್ಲ ಜಿಲ್ಲೆಗಳಲ್ಲಿ ಮಳೆಯಾಗುವ ಸಾಧ್ಯತೆ ಇದೆ. ಉಡುಪಿ ಮತ್ತು ದಕ್ಷಿಣ ಕನ್ನಡ, ಹಾಸನ, ಕೊಡಗು, ಮೈಸೂರು, ಚಾಮರಾಜನಗರ, ಮಂಡ್ಯ ಜಿಲ್ಲೆಗಳಲ್ಲಿ ಸಾಧಾರಣ ಮಳೆಯಾಗುವ ಮುನ್ಸೂಚನೆ ಇದೆ. ಉತ್ತರ ಒಳನಾಡಿನಲ್ಲಿ ಒಣಹವೆ ಮುಂದುವರೆಯಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.