ಸಕ್ಕರೆ ನಾಡು ಮಂಡ್ಯದಲ್ಲಿ ಇಂದಿನಿಂದ ಅಕ್ಷರ ಜಾತ್ರೆಗೆ ಚಾಲನೆ ಸಿಕ್ಕಿದೆ.
ಮೂರು ದಿನಗಳ ಕಾಲ ನಡೆಯಲಿರುವ 87ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನ ಧ್ವಜಾರೋಹಣದ ಮೂಲಕ ಚಾಲನೆ ಪಡೆಯಿತು. ಈ ಮೂಲಕ ಸಾಹಿತ್ಯ ಸಮ್ಮೇಳನದ ಚಟುವಟಿಕೆಗಳಿಗೆ ಅಧಿಕೃತ ಚಾಲನೆ ಸಿಕ್ಕಿದೆ. ಇದಾದ ಕೂಡಲೇ ಸಮ್ಮೇಳನದ ಸರ್ವಾಧ್ಯಕ್ಷರ ಮೆರವಣಿಗೆ ಶುರುವಾಗಿದೆ. ನಂತರ ಸಮ್ಮೇಳನದ ಉದ್ಘಾಟನಾ ಸಮಾರಂಭ ನಡೆಯಲಿದೆ.
ಕೃಷಿ ಸಚಿವ ಹಾಗೂ ಮಂಡ್ಯ ಜಿಲ್ಲಾ ಉಸ್ತುವಾರಿ ಸಚಿವ, ಸಾಹಿತ್ಯ ಸಮ್ಮೇಳನದ ಸ್ವಾಗತ ಸಮಿತಿ ಅಧ್ಯಕ್ಷ ಎನ್ ಚಲುವರಾಯಸ್ವಾಮಿ ರಾಷ್ಟ್ರ ಧ್ವಜಾರೋಹಣ ನೆರವೇರಿಸಿದರು. ಕನ್ನಡ ಸಾಹಿತ್ಯ ಪರಿಷತ್ ರಾಜ್ಯ ಅಧ್ಯಕ್ಷ ನಾಡೋಜ ಡಾ ಮಹೇಶ್ ಜೋಶಿ ಪರಿಷತ್ತಿನ ಧ್ವಜಾರೋಹಣ ನೆರವೇರಿಸಿದರು. ಮಂಡ್ಯ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತಿನ ಸಂಚಾಲಕ ಮೀರಾ ಶಿವಲಿಂಗಯ್ಯ ನಾಡ ಧ್ವಜಾರೋಹಣ ನೆರವೇರಿಸಿದರು.
ಸಮ್ಮೇಳನದ ಸರ್ವಾಧ್ಯಕ್ಷ ಹಿರಿಯ ಸಾಹಿತಿ ಗೊ.ರು. ಚನ್ನಬಸಪ್ಪ,ಶಾಸಕ ದಿನೇಶ್ ಗೂಳಿಗೌಡ ಜಿಲ್ಲಾಧಿಕಾರಿ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ, ಜಿಲ್ಲಾ ಪಂಚಾಯತ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಹಾಗೂ ಕನ್ನಡ ಸಾಹಿತ್ಯ ಪರಿಷತ್ತಿನ ಪದಾಧಿಕಾರಿಗಳು ಉಪಸ್ಥಿತರಿದ್ದರು
ಸಮ್ಮೇಳನದ ಸರ್ವಾಧ್ಯಕ್ಷರ ಮೆರವಣಿಗೆಗೆ ಮಂಡ್ಯ ಜಿಲ್ಲಾ ಉಸ್ತುವಾರಿ ಸಚಿವರು ಹಾಗೂ ಕೃಷಿ ಸಚಿವ ಎನ್. ಚಲುವರಾಯಸ್ವಾಮಿ ನಗಾರಿ ಬಾರಿಸಿ ಚಾಲನೆ ನೀಡಿದರು. ಸರ್ ಎಂ.ವಿಶ್ವೇಶ್ವರಯ್ಯ ಪ್ರತಿಮೆ ಮುಂಭಾಗ ಬೆಳಗ್ಗೆ ಸಮ್ಮೇಳನ ಸರ್ವಾಧ್ಯಕ್ಷರ ಮೆರವಣಿಗೆಗೆ ಚಾಲನೆ ಸಿಕ್ಕಿದೆ. ಮೆರವಣಿಗೆಯಲ್ಲಿ 154 ಕಲಾತಂಡಗಳು ಭಾಗವಹಿಸುತ್ತಿದ್ದು, 800 ಮಹಿಳೆಯರು ಪೂರ್ಣ ಕುಂಭ ಹಿಡಿದು ಸಾಗಿದ್ದಾರೆ.
ಸಮ್ಮೇಳನದ ಪ್ರಧಾನ ವೇದಿಕೆಗೆ ರಾಜಮಾತೆ ಕೆಂಪ ನಂಜಮ್ಮಣ್ಣಿ ಮತ್ತು ರಾಜರ್ಷಿ ನಾಲ್ವಡಿ ಕೃಷ್ಣರಾಜ ಒಡೆಯರ್, ಮಹಾಮಂಟಪಕ್ಕೆ ಸರ್ ಎಂ.ವಿಶ್ವೇಶ್ವರಯ್ಯ, ಮಹಾದ್ವಾರಕ್ಕೆ ಯಕ್ಷಕವಿ ಕೆಂಪಣ್ಣಗೌಡ ಮತ್ತು ಉಭಯ ಕವಿತಾ ವಿಶಾರದ ಷಡಕ್ಷರ ದೇವ, ಪ್ರವೇಶ ದ್ವಾರಕ್ಕೆ ಶ್ರೇಷ್ಠ ರಾಜಕೀಯ ಮುತ್ಸದ್ಧಿ ಎಸ್.ಎಂ.ಕೃಷ್ಣ ಮತ್ತು ಡಾ.ಬಾಲಗಂಗಾಧರನಾಥ ಮಹಾ ಸ್ವಾಮೀಜಿ ಹೆಸರು ಇಡಲಾಗಿದೆ.
ಸಮ್ಮೇಳನಾಧ್ಯಕ್ಷ ಸ್ಥಾನವನ್ನು ನಾಡೋಜ ಡಾ.ಗೊ.ರು.ಚನ್ನಬಸಪ್ಪ ವಹಿಸುವರು. ಎಚ್.ಡಿ.ಕುಮಾರಸ್ವಾಮಿ, ಡಿ.ಕೆ. ಶಿವಕುಮಾರ್, ಜ್ಞಾನಪೀಠ ಪ್ರಶಸ್ತಿ ಪುರಸ್ಕೃತ ಡಾ.ಚಂದ್ರಶೇಖರ ಕಂಬಾರ, ನಿಕಟಪೂರ್ವ ಸಮ್ಮೇಳನಾಧ್ಯಕ್ಷ ದೊಡ್ಡರಂಗೇಗೌಡ, ಕೃಷಿ ಸಚಿವ ಎನ್.ಚಲುವರಾಯಸ್ವಾಮಿ ಸೇರಿದಂತೆ ಹಲವರು ಭಾಗವಹಿಸಲಿದ್ದಾರೆ.