ಜೈಪುರ್: ಭಾರತೀಯ ಸ್ಟಾರ್ ಬ್ಯಾಡ್ಮಿಂಟನ್ ಆಟಗಾರ್ತಿ ಹಾಗೂ ಒಲಿಂಪಿಕ್ಸ್ ಪದಕ ವಿಜೇತೆ ಪಿವಿ ಸಿಂಧು (P.V Sindhu) ಉದ್ಯಮಿಯೊಂದಿಗೆ ದಾಂಪತ್ಯ ಜೀವನಕ್ಕೆ ಕಾಲಿಟ್ಟಿದ್ದಾರೆ.
ರಾಜಸ್ಥಾನದ ಉದಯಪುರದಲ್ಲಿ (Udaipur) ಅದ್ದೂರಿಯಾಗಿ ನಡೆದ ಮದುವೆ ಸಮಾರಂಭದಲ್ಲಿ ಉದ್ಯಮಿ ವೆಂಕಟ್ ದತ್ತಾ ಸಾಯಿ ಜೊತೆ ಸಿಂಧು ವೈವಾಹಿಕ ಜೀವನಕ್ಕೆ ಕಾಲಿರಿಸಿದ್ದಾರೆ. ಪಿವಿ ಸಿಂಧು ಮತ್ತು ವೆಂಕಟ್ ಮದುವೆಯ ಫೋಟೋ ವೈರಲ್ ಆಗಿದೆ. ಈ ಸುದ್ದಿ ಕೇಳಿ ಅಭಿಮಾನಿಗಳು ಶುಭ ಹಾರೈಸಿದ್ದಾರೆ.
ಡಿಸೆಂಬರ್ 22 ರಂದೇ ಸಿಂಧು ಮತ್ತು ವೆಂಕಟ್ ಮದುವೆಯಾಗಿದ್ದಾರೆ. ಕೇಂದ್ರ ಸಚಿವ ಗಜೇಂದ್ರ ಸಿಂಗ್ ಶೇಖಾವತ್ ನವ ಜೋಡಿಯ ಮದುವೆಯ ಫೋಟೋವನ್ನು ತಮ್ಮ ಎಕ್ಸ್ ಖಾತೆಯಲ್ಲಿ ಹಂಚಿಕೊಂಡಿದ್ದು ನವದಂಪತಿಗಳಿಗೆ ಶುಭ ಹಾರೈಸಿದ್ದಾರೆ.
ಡಿ.14ರಂದು ಇಬ್ಬರ ನಿಶ್ಚಿತಾರ್ಥ ನಡೆದಿತ್ತು. ಆತ್ಮೀಯರ ಸಮ್ಮುಖದಲ್ಲಿ ವೈವಾಹಿಕ ಜೀವನಕ್ಕೆ ಕಾಲಿರಿಸಿರುವ ಈ ಜೋಡಿ ಮಂಗಳವಾರ ಹೈದರಾಬಾದ್‌ನಲ್ಲಿ ಅದ್ದೂರಿಯಾಗಿ ಆರತಕ್ಷತೆ ಏರ್ಪಡಿಸಿದೆ.