ಬೆಂಗಳೂರು: ರಾಜ್ಯ ಬಿಜೆಪಿಯಲ್ಲಿ ಬಣ ರಾಜಕೀಯ ಸಂಘರ್ಷ ಜೋರಾಗಿದೆ. ನೂತನ ರಾಜ್ಯಾಧ್ಯಕ್ಷರ ಆಯ್ಕೆಯ ಕಸರತ್ತು ಕೂಡ ನಡೆದಿದೆ. ಇದರ ಮಧ್ಯೆ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ ನಡ್ಡಾ ರಾಜ್ಯಕ್ಕೆ ಬಂದಿರುವುದು ತೀವ್ರ ಕುತೂಲಹಕ್ಕೆ ಕಾರಣವಾಗಿದೆ.
ಗುರುವಾರ ರಾತ್ರಿ ಬೆಂಗಳೂರಿನ ಕೆಂಪೇಗೌಡ ವಿಮಾನ ನಿಲ್ದಾಣಕ್ಕೆ ಆಗಮಿಸಿದ ನಡ್ಡಾ ಅವರನ್ನು ಪ್ರತಿಪಕ್ಷ ನಾಯಕ ಆರ್ ಅಶೋಕ್, ಪರಿಷತ್ ವಿಪಕ್ಷ ನಾಯಕ ಛಲವಾದಿ ನಾರಾಯಣಸ್ವಾಮಿ, ಬಿಜೆಪಿ ರಾಜ್ಯಾಧ್ಯಕ್ಷ ಬಿವೈ ವಿಜಯೇಂದ್ರ, ಯುವ ಮೋರ್ಚಾ ಅಧ್ಯಕ್ಷ ಧೀರಜ್ ಸ್ವಾಗತಿಸಿದರು.
ನಂತರ ಅವರು ಏರ್ ಪೋರ್ಟ್ ನಲ್ಲೇ ಸಭೆ ನಡೆಸಿದರು. ಕರ್ನಾಟಕದಲ್ಲಿನ ಗ್ಯಾರಂಟಿಗಳ ಬಗ್ಗೆ ಮಾಹಿತಿ ಪಡೆದಿದ್ದಾರೆ ಎನ್ನಲಾಗಿದೆ. ಬಸ್ ದರ ಏರಿಕೆ, ಗ್ಯಾರಂಟಿಗೆ ಹಣ ಹೊಂದಿಸಲು ಸರ್ಕಾರದ ಹೆಣಗಾಟ ಸೇರಿದಂತೆ ಹಲವು ವಿಷಯಗಳ ಕುರಿತು ಬಿಜೆಪಿ ರಾಜ್ಯ ನಾಯಕರು ಮಾಹಿತಿ ನೀಡಿದ್ದಾರೆ ಎನ್ನಲಾಗಿದೆ. ಆನಂತರ ಅವರ ಕಾರಿನಲ್ಲಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ ತೆರಳಿದ್ದಾರೆ.