ಬೆಳಗಾವಿ ಅಧಿವೇಶನದ ಸಂದರ್ಭದಲ್ಲಿ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ವಿರುದ್ಧ ವಿಪ ಸದಸ್ಯ ಸಿ.ಟಿ. ರವಿ ಅಶ್ಲೀಲ ಪದ ಬಳಕೆ ಮಾಡಿದ್ದಾರೆ ಎಂಬ ಆರೋಪ ದೊಡ್ಡ ವಿವಾದಕ್ಕೆ ಕಾರಣವಾಗಿತ್ತು.
ಅಂದೇ ಸಿ.ಟಿ. ರವಿ ವಿರುದ್ಧ ಲಕ್ಷ್ಮೀ ಹೆಬ್ಬಾಳ್ಕರ್ ದೂರು ನೀಡಿದ್ದರು. ಹೀಗಾಗಿ ಸಿ.ಟಿ. ರವಿಯನ್ನು ಪೊಲೀಸರು ಬಂಧಿಸಿದ್ದರು. ಆ ವೇಳೆ ದೊಡ್ಡ ಹೈಡ್ರಾಮಾ ನಡೆಯಿತು. ನಂತರ ಹೈಕೋರ್ಟ್ ಜಾಮೀನು ಮಂಜೂರು ಮಾಡಿತ್ತು.
ಈ ಪ್ರಕರಣವನ್ನು ಸರ್ಕಾರವು ಸಿಐಡಿ ತನಿಖೆಗೆ ವಹಿಸಿದ್ದು, ಈಗಾಗಲೇ ಅಧಿಕಾರಿಗಳು ತನಿಖೆ ಆರಂಭಿಸಿದ್ದಾರೆ. ಇಂದು ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ನಿವಾಸಕ್ಕೆ ತೆರಳಿ ಸಿಐಡಿ ಅಧಿಕಾರಿಗಳು ಹೇಳಿಕೆ ದಾಖಲಿಸಿಕೊಳ್ಳುತ್ತಿದ್ದಾರೆ. ಡಿವೈಎಸ್ಪಿ ಅಂಜುಮಾಲ ನಾಯಕ್ ಹೇಳಿಕೆ ದಾಖಲಿಸಿಕೊಳ್ಳುತ್ತಿದ್ದಾರೆ.
ದೂರುದಾರರು ಮಹಿಳೆ, ಮಕ್ಕಳು ಅಥವಾ ವೃದ್ಧರಾಗಿದ್ದಲ್ಲಿ ಅವರಿದ್ದ ಜಾಗಕ್ಕೆ ತೆರಳಿ ಹೇಳಿಕೆ ದಾಖಲಿಸಲು ಅವಕಾಶ ಇರುವ ಹಿನ್ನೆಲೆಯಲ್ಲಿ ಸಿಐಡಿ ಅಧಿಕಾರಿಗಳು ಲಕ್ಷ್ಮೀ ಹೆಬ್ಬಾಳ್ಕರ್ ನಿವಾಸಕ್ಕೆ ತೆರಳಿ ಹೇಳಿಕೆ ದಾಖಲಿಸಿಕೊಳ್ಳುತ್ತಿದ್ದಾರೆ. ಇಂದು ಹೇಳಿಕೆ ಪಡೆದ ನಂತರ ಮ್ಯಾಜಿಸ್ಟ್ರೇಟ್ ಮುಂದೆ ಹೇಳಿಕೆ ದಾಖಲಿಸಲು ಸಮಯ ನಿಗದಿಯಾಗುವ ಸಾಧ್ಯತೆ ಇದೆ ಎನ್ನಲಾಗುತ್ತಿದೆ.