ಬೆಂಗಳೂರು: ರಾಜ್ಯದಲ್ಲಿ ಈಗಾಗಲೇ ತಾಪಮಾನ ತೀವ್ರವಾಗಿ ಕುಸಿದಿದ್ದು, ಮುಂದಿನ ಐದು ದಿನಗಳ ಕಾಲ ಮತ್ತಷ್ಟು ಕುಸಿಯಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
ಸಿಲಿಕಾನ್ ಸಿಟಿಯಲ್ಲಿ ಮುಂದಿನ ಐದು ದಿನ ಶೀತಗಾಳಿ ಬೀಸಲಿದೆ. ಉತ್ತರ ಭಾರತದಿಂದ ಬೀಸುತ್ತಿರುವ ಶೀತಗಾಳಿ ನಗರದಲ್ಲಿನ ತಾಪಮಾನವನ್ನು ಮತ್ತಷ್ಟು ಕುಗ್ಗಿಸಲಿದೆ. ಹೀಗಾಗಿ ಕನಿಷ್ಠ ತಾಪಮಾನ 10 ರಿಂದ 12 ಡಿಗ್ರಿ ಸೆಲ್ಸಿಯಸ್ ನಷ್ಟು ಇಳಿಕೆಯಾಗುವ ಸಾಧ್ಯತೆ ಇದೆ. ಸುಮಾರು 14 ಜಿಲ್ಲೆಗಳಿಗೆ ಶೀತಗಾಳಿಯ ಕಾಟ ಶುರುವಾಗಲಿದೆ.
ಬೆಂಗಳೂರು ಸೇರಿದಂತೆ ಕರಾವಳಿ, ಉತ್ತರ ಒಳನಾಡು, ದಕ್ಷಿಣ ಒಳನಾಡು ಜಿಲ್ಲೆ, ಉತ್ತರ ಕನ್ನಡ, ಬೆಳಗಾವಿ, ಬೀದರ್, ವಿಜಯಪುರ, ಕಲಬುರಗಿ, ಹಾವೇರಿ ಹಾಗೂ ರಾಯಚೂರು ಜಿಲ್ಲೆಗಳಲ್ಲಿ ಶೀತಗಾಳಿ ಬೀಸಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಅಲ್ಲದೇ, ಈ ಬಾರಿ ಕಳೆದ ವರ್ಷಕ್ಕಿಂತ ಹೆಚ್ಚು ಶೀತಗಾಳಿ ಬೀಸಲಿದೆ ಎಂದು ಹವಾಮಾನ ಇಲಾಖೆಯ ನಿರ್ದೇಶಕ ಸಿ.ಎಸ್. ಪಾಟೀಲ್ ಮಾಹಿತಿ ನೀಡಿದ್ದಾರೆ.
ಹೀಗಾಗಿ ಸಿಲಿಕಾನ್ ಸಿಟಿ ಜನರು ಹೊರಗೆ ಬರುವ ಮುನ್ನ ತೀವ್ರ ಎಚ್ಚರ ವಹಿಸಬೇಕಾದ ಅನಿವಾರ್ಯತೆ ಇದೆ. ಬೆಳಗ್ಗೆ, ಸಂಜೆ ಸ್ವೆಟರ್, ಜಾಕೆಟ್, ಜರ್ಕಿನ್ ಹಾಕಿಕೊಂಡು ಬರುವುದು ಉತ್ತಮ ಎಂದು ಆರೋಗ್ಯ ಇಲಾಖೆ ಮುನ್ಸೂಚನೆ ನೀಡಿದೆ.