ಉತ್ತರಾಖಂಡದಲ್ಲಿ ಭೀಕರ ಬಸ್ ಅಪಫಾತ ನಡೆದಿದ್ದು 6 ಮಂದಿ ಮೃತಪಟ್ಟು 22 ಮಂದಿ ಗಂಭೀರವಾಗಿ ಗಾಯಗೊಂಡಿದ್ದಾರೆ. ಪೌರಿ ಗರ್ವಾಲ್ ಜಿಲ್ಲೆಯ ಶ್ರೀನಗರ ಪ್ರದೇಶದಲ್ಲಿ ಬಸ್ ಕಂದಕಕ್ಕೆ ಉರುಳಿದ ಪರಿಣಾಮ ಘಟನೆ ಸಂಭವಿಸಿದೆ. ಗಾಯಾಳುಗಳು ಸ್ಥಳೀಯ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. 28 ಪ್ರಯಾಣಿಕರಿದ್ದ ಬಸ್ ಪೌರಿಯಿಂದ ಡೆಹಲ್‌ಚೌರಿಗೆ ತೆರಳುತ್ತಿದ್ದ ಸಂದರ್ಭ ಪ್ರಪಾತಕ್ಕೆ ಉರುಳಿ ಬಿದ್ದಿದೆ.
ಭಾನುವಾರ ಸಂಜೆ 4.30 ರ ಸುಮಾರಿಗೆ ಬಸ್ ನಿಯಂತ್ರಣ ತಪ್ಪಿ ಸಾಗಿ ಪಲ್ಟಿಯಾಗಿದೆ. ಬಸ್‌ನಲ್ಲಿದ್ದ ಐದು ಮಂದಿ ಸ್ಥಳದಲ್ಲಿಯೇ ಪ್ರಾಣ ಬಿಟ್ಟಿದ್ದರು. ಮತ್ತೊಬ್ಬರು ಮಾರ್ಗ ಮಧ್ಯದಲ್ಲಿ ಮೃತಪಟ್ಟಿದ್ದಾರೆ. ಗಾಯಗೊಂಡವರನ್ನು ಪೌರಿ ಜಿಲ್ಲಾ ಆಸ್ಪತ್ರೆಗೆ ಕರೆದೊಯ್ಯಲಾಗಿದೆ. ಗಾಯಾಳುಗಳಲ್ಲಿ ಎಂಟು ಮಂದಿಯ ಸ್ಥಿತಿ ಗಂಭಿರವಾಗಿದೆ. ಮಾಹಿತಿ ಪಡೆದ ಶ್ರೀನಗರ ಮತ್ತು ಸತ್ಪುಲಿ ಪೋಸ್ಟ್‌ಗಳ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿದ್ದಾರೆ.
ಮೃತಪಟ್ಟವರನ್ನು ಸುನೀತಾ (25), ಪ್ರಮೀಳಾ, ಪ್ರಿಯಾಂಶು (17), ನಾಗೇಂದ್ರ, ಸುಲೋಚನಾ ಮತ್ತು ಪ್ರೇಮ್ (70) ಎಂದು ಗುರುತಿಸಲಾಗಿದೆ. ಪೌರಿ ಜಿಲ್ಲಾಧಿಕಾರಿ ಆಶಿಶ್ ಚೌಹಾಣ್ ಅವರು ಸ್ಥಳಕ್ಕೆ ಧಾವಿಸಿ ಘಟನೆಯ ಬಗ್ಗೆ ಮಾಹಿತಿ ಪಡೆದಿದ್ದಾರೆ. ಅಪಘಾತದ ಕಾರಣಗಳ ಬಗ್ಗೆ ತನಿಖೆ ನಡೆಸುವಂತೆ ಸಾರಿಗೆ ಇಲಾಖೆ ಅಧಿಕಾರಿಗಳಿಗೆ ಸೂಚಿಸಿದ್ದಾರೆ.
ಅಪಘಾತದ ಬಗ್ಗೆ ಪ್ರತಿಕ್ರಿಯಿಸಿದ ಮುಖ್ಯಮಂತ್ರಿ ಪುಷ್ಕರ್ ಸಿಂಗ್ ಧಾಮಿ ಅವರು ಅಪಘಾತದ ಬಗ್ಗೆ ತೀವ್ರ ಸಂತಾಪ ವ್ಯಕ್ತಪಡಿಸಿದ್ದಾರೆ. ಮೃತರ ಆತ್ಮಕ್ಕೆ ಶಾಂತಿ ನೀಡಲಿ ಮತ್ತು ದುಃಖದಲ್ಲಿರುವ ಕುಟುಂಬಗಳಿಗೆ ಈ ಅಪಾರ ನಷ್ಟವನ್ನು ಭರಿಸುವ ಶಕ್ತಿ ನೀಡಲಿ ಎಂದು ನಾನು ಭಗವಂತನಲ್ಲಿ ಪ್ರಾರ್ಥಿಸುತ್ತೇನೆ. ಸ್ಥಳೀಯ ಆಡಳಿತವು ಪರಿಹಾರ ಮತ್ತು ರಕ್ಷಣಾ ಕಾರ್ಯಾಚರಣೆಯನ್ನು ಮುಂದುವರೆಸಿದ್ದು, ಗಾಯಾಳುಗಳನ್ನು ಹತ್ತಿರದ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ. ಗಾಯಾಳುಗಳು ಶೀಘ್ರ ಗುಣಮುಖರಾಗಲೆಂದು ಬಾಬಾ ಕೇದಾರರಲ್ಲಿ ಪ್ರಾರ್ಥಿಸುತ್ತೇನೆ” ಎಂದು ಹೇಳಿದ್ದಾರೆ.