ಮಂಗಳೂರು: ಬಿಪಿಎಲ್ ಕಾರ್ಡ್ ಇದ್ದವರಿಗೆ ಉಚಿತ ಆರೋಗ್ಯ ಸೇವೆ ನೀಡುವಂತೆ ಮೆಡಿಕಲ್ ಕಾಲೇಜುಗಳಿಗೆ ಸಿಎಂ ಸಿದ್ದರಾಮಯ್ಯ ಸೂಚನೆ ನೀಡಿದ್ದಾರೆ.
ನಗರದಲ್ಲಿರುವ ರಾಜೀವ್ ಗಾಂಧಿ ಆರೋಗ್ಯ ವಿಜ್ಞಾನ ವಿವಿಯ ಪ್ರಾದೇಶಿಕ ಕಚೇರಿ ಶಂಕು ಸ್ಥಾಪನೆ ನೆರವೇರಿಸಿ ಮಾತನಾಡಿದ ಅವರು, ಬಡವರಿಗೂ ದೊಡ್ಡ ದೊಡ್ಡ ಕಾಯಿಲೆಗಳು ಬರುತ್ತಿವೆ. ಕಿಡ್ನಿ ಕಸಿಗೆ 5 ಸಾವಿರ ಜನರು ಸರತಿ ಸಾಲಿನಲ್ಲಿದ್ದಾರೆ. ಕಿಡ್ನಿ ದಾನಿಗಳು ಸಿಕ್ಕರೆ ನಿತ್ಯ ಕಿಡ್ನಿ ಕಸಿ ಮಾಡುವ ನುರಿತ ವೈದ್ಯರ ತಂಡ ರಾಜ್ಯದಲ್ಲಿದೆ. ಬಡವರಿಗೆ ದುಡ್ಡು ಕೊಟ್ಟು ಆರೋಗ್ಯ ಪಡೆಯಲು ಆಗುವುದಿಲ್ಲ. ಹೀಗಾಗಿ ಬಿಪಿಎಲ್ ಕಾರ್ಡ್ ಇದ್ದವರಿಗೆ ಉಚಿತ ಆರೋಗ್ಯ ಸೇವೆ ನೀಡಬೇಕು ಎಂದು ಸಲಹೆ ನೀಡಿದ್ದಾರೆ.
ರಾಜೀವ್ ಗಾಂಧಿ ವಿವಿ, ಏಷ್ಯಾದ ಅತ್ಯಂತ ದೊಡ್ಡ ಆರೋಗ್ಯ ವಿಶ್ವ ವಿದ್ಯಾಲಯವಾಗಿದೆ. 3.5 ಲಕ್ಷ ವೈದ್ಯ ವಿದ್ಯಾರ್ಥಿಗಳಿರುವ ಅತ್ಯಂತ ದೊಡ್ಡ ಆರೋಗ್ಯ ವಿವಿ ಇದಾಗಿದೆ. ಹೀಗಾಗಿ ಗುಣಮಟ್ಟದ ವೈದ್ಯರನ್ನು ರೂಪಿಸುವುದರ ಜೊತೆಗೆ ಗುಣಮಟ್ಟದ ಆರೋಗ್ಯ ಸೇವೆ ಒದಗಿಸುವಲ್ಲಿ ರಾಜೀವ್ ಗಾಂಧಿ ವಿವಿಯ ಕೊಡುಗೆ ಅಪಾರವಾಗಿದೆ ಎಂದು ಹೇಳಿದ್ದಾರೆ.
ಜಿಲ್ಲೆಗೊಂದು ಸರ್ಕಾರಿ ವೈದ್ಯಕೀಯ ಕಾಲೇಜು ಇರಬೇಕು ಎನ್ನುವುದು ನನ್ನ ಗುರಿ. ಮಂಗಳೂರಿನಲ್ಲಿ ಉತ್ತಮ ಆರೋಗ್ಯ ಸೇವೆ ಇದ್ದರೂ ಈ ಜಿಲ್ಲೆಗೂ ಸರ್ಕಾರಿ ವೈದ್ಯಕೀಯ ಕಾಲೇಜಿನ ಅಗತ್ಯ ಇದೆ. ವೈದ್ಯ ವಿಜ್ಞಾನ ಪದವೀಧರರೂ ಯುವ ನಿಧಿಗೆ ಅರ್ಹತೆ ಗಳಿಸಿದ್ದಾರೆ. ವೈದ್ಯ ವಿದ್ಯಾರ್ಥಿಗಳು ಇತರೆ ಕ್ಷೇತ್ರಗಳಿಗೆ ವಲಸೆ ಹೋಗದೆ ಆರೋಗ್ಯ ಕ್ಷೇತ್ರದಲ್ಲೇ ಸೇವೆ ಮುಂದುವರೆಸಬೇಕು ಎಂದು ಸಲಹೆ ನೀಡಿದರು.