ಬೆಂಗಳೂರು: ಗ್ರಾಮೀಣ ರಸ್ತೆ ಕಾಮಗಾರಿಗಳಿಗೆ ರಾಜ್ಯ ಸರ್ಕಾರ ತಲಾ 10 ಕೋಟಿ ರೂ. ಅನುದಾನ ಬಿಡುಗಡೆ ಮಾಡಿದೆ.
ರಾಜ್ಯದ 189 ವಿಧಾನಸಭಾ ಕ್ಷೇತ್ರಗಳಿಗೆ 1890 ಕೋಟಿ ರೂ. ಅನುದಾನವನ್ನು ಸರ್ಕಾರ ಬಿಡುಗಡೆ ಮಾಡಿದೆ. ಇತ್ತೀಚೆಗಷ್ಟೇ ಅನುದಾನ ಬಿಡುಗಡೆ ಮಾಡಿಲ್ಲ ಎಂದು ಸರ್ಕಾರದ ಶಾಸಕರು ಸೇರಿದಂತೆ ವಿಪಕ್ಷಗಳ ಶಾಸಕರು ಗಂಭೀರವಾಗಿ ಬಹಿರಂಗ ಆರೋಪ ಮಾಡಿದ್ದರು. ಈಗ ಸರ್ಕಾರ ವಿಧಾನಸಭಾ ಕ್ಷೇತ್ರವಾರು ತಲಾ 10 ಕೋಟಿ ರೂ. ಅನುದಾನ ಬಿಡುಗಡೆ ಮಾಡಿದೆ.
ಅಲ್ಲದೆ, ಆಯಾ ಶಾಸಕರೊಂದಿಗೆ ಸಮಾಲೋಚಿಸಿ ಕಾರ್ಯಯೋಜನೆ ರೂಪಿಸಲು ಸೂಚನೆ ನೀಡಲಾಗಿದೆ. ಮಳೆಯಿಂದ ಹಾನಿಯಾದ ಗ್ರಾಮೀಣ ಭಾಗದ ರಸ್ತೆಗಳಿಗೆ ಮೊದಲ ಆದ್ಯತೆ ನೀಡುವಂತೆ ಸೂಚಿಸಲಾಗಿದೆ. ರಸ್ತೆಗಳನ್ನು 5 ಲಕ್ಷ ರೂ.ಗಿಂತ ಕಡಿಮೆ ಮೊತ್ತಕ್ಕೆ ತುಂಡು ಗುತ್ತಿಗೆ ನೀಡದಂತೆ ಷರತ್ತು ವಿಧಿಸಲಾಗಿದೆ.
ಇತ್ತೀಚೆಗಷ್ಟೇ ನಡೆದಿದ್ದ ಶಾಸಕಾಂಗ ಸಭೆಯಲ್ಲಿ ಶಾಸಕರಿಗೆ ಅನುದಾನ ನೀಡುವ ಭರವಸೆಯನ್ನು ಸಿಎಂ ಸಿದ್ದರಾಮಯ್ಯ ನೀಡಿದ್ದರು. ಆ ವೇಳೆ ಪ್ರತಿ ಕ್ಷೇತ್ರಕ್ಕೆ 10 ಕೋಟಿ ರೂ. ಅನುದಾನ ನೀಡುವ ಭರವಸೆ ನೀಡಿದ್ದರು. ಈಗ ಅದರಂತೆ ಪ್ರತಿ ಕ್ಷೇತ್ರಕ್ಕೆ ತಲಾ 10 ಕೋಟಿ ರೂ. ಅನುದಾನ ನೀಡಿದ್ದಾರೆ.