ನವದೆಹಲಿ: ರೈತರ ಹಿತಾಸಕ್ತಿ ಕಾಪಾಡುವ ದಿಸೆಯಲ್ಲಿ ಕೇಂದ್ರ ಸರ್ಕಾರ ಮುಂಗಡಪತ್ರದಲ್ಲಿ ಹತ್ತಾರು ಮಹತ್ವದ ಘೋಷಣೆಗಳನ್ನು ಮಾಡಿದೆ. ಅದರಲ್ಲೂ, ಕಿಸಾನ್ ಕ್ರೆಡಿಟ್ ಕಾರ್ಡ್ (Kisan Credit Card) ಸಾಲದ ಮಿತಿಯನ್ನು 3 ಲಕ್ಷ ರೂ.ನಿಂದ 5 ಲಕ್ಷ ರೂ.ಗೆ ಏರಿಕೆ ಮಾಡಲಾಗಿದೆ. 7.7 ಕೋಟಿ ರೈತರು, ಮೀನುಗಾರರು ಮತ್ತು ಹೈನುಗಾರರಿಗೆ ಅಲ್ಪಾವಧಿ ಸಾಲವನ್ನು ಒದಗಿಸುವುದು ಇದರ ಉದ್ದೇಶವಾಗಿದ್ದು, ಕೆಸಿಸಿ ಮೂಲಕ ಪಡೆದ ಸಾಲಗಳಿಗೆ ಮಾರ್ಪಡಿಸಿದ ಬಡ್ಡಿ ಸಬ್ವೆನ್ಷನ್ ಯೋಜನೆಯಡಿ ಸಾಲದ ಮಿತಿಯನ್ನು 3 ಲಕ್ಷ ರೂ.ನಿಂದ 5 ಲಕ್ಷ ರೂ.ಗೆ ಹೆಚ್ಚಿಸಲಾಗುವುದು ಎಂದು ಹೇಳಿದ್ದಾರೆ.
ಇದಲ್ಲದೆ, ಪ್ರಧಾನ ಮಂತ್ರಿ ಧನ್ ಧಾನ್ಯ ಕೃಷಿ ಯೋಜನೆಯನ್ನು ಸಚಿವರು ಘೋಷಿಸಿದ್ದು ಇದರಿಂದ 1 ಕೋಟಿ ಜನರಿಗೆ ಅನುಕೂಲವಾಗಿದೆ. ಕಡಿಮೆ ಇಳುವರಿ ಇರುವ ನೂರು ಜಿಲ್ಲೆಗಳಲ್ಲಿ ಕೃಷಿ ಉತ್ಪಾದನೆ ಹೆಚ್ಚಿಸುವುದು ಕೇಂದ್ರ ಸರ್ಕಾರದ ಗುರಿಯಾಗಿದೆ ಎಂದು ನಿರ್ಮಲಾ ಸೀತಾರಾಮನ್ ಹೇಳಿದ್ದಾರೆ.
ಹೆಚ್ಚಿನ ಇಳುವರಿಯ ಬೀಜಗಳಿಗಾಗಿ ರಾಷ್ಟ್ರೀಯ ಮಿಷನ್ ಆರಂಭಿಸಲಾಗುವುದು ಎಂದು ಹೇಳಿದ್ದು, ಹತ್ತಿಯ ಉತ್ಪಾದಕತೆಯನ್ನು ಹೆಚ್ಚಿಸಲು ಐದು ವರ್ಷಗಳ ಯೋಜನೆಯನ್ನು ಜಾರಿಗೆ ತರಲಾಗುವುದು ಎಂದೂ ತಿಳಿಸಿದ್ದಾರೆ.
ಮಖಾನ ಬೆಳೆಯುವ ರೈತರನ್ನು ಉತ್ತೇಜಿಸಲು ಮತ್ತು ಮಖಾನಾ ಉತ್ಪಾದನೆಯನ್ನು ಹೆಚ್ಚಿಸಲು ಬಿಹಾರದಲ್ಲಿ ಮಖಾನಾ ಮಂಡಳಿಯನ್ನು ಸ್ಥಾಪಿಸಲಾಗುವುದು ಎಂದು ಹಣಕಾಸು ಸಚಿವೆ ತಿಳಿಸಿದ್ದಾರೆ. ದ್ವಿದಳ ಧಾನ್ಯಗಳಲ್ಲಿ ಆತ್ಮನಿರ್ಭರತೆ ಸಾಧಿಸಲು 6 ವರ್ಷಗಳ ಯೋಜನೆಯನ್ನೂ ಆರಂಭಿಸಲಾಗುವುದು ಎಂದು ಹೇಳಿದ್ದಾರೆ.