ಬೆಂಗಳೂರು: ಇತ್ತೀಚೆಗಷ್ಟೇ ರಾಜ್ಯ ಸರ್ಕಾರ ಕೋವಿಡ್ ಸಂದರ್ಭದಲ್ಲಿ ಆಗಿದ್ದ ಹಗರಣದ ಬೆನ್ನು ಬಿದ್ದಿದೆ. ಇದರ ಬೆನ್ನಲ್ಲೇ ಈಗ ಪಾಲಿಕೆ ಕೂಡ ಈ ಹಗರಣದ ಬೇಟೆಗೆ ಸಜ್ಜಾಗಿ ನಿಂದಿದೆ.ಕಳೆದ ನಾಲ್ಕು ವರ್ಷಗಳ ಹಿಂದೆ ಕೋವಿಡ್ ಅವಧಿಯಲ್ಲಿ ಕೋಟ್ಯಾಂತರ ರೂ. ಹಗರಣ ನಡೆದಿದೆ ಎಂಬ ಆರೋಪ ಕೇಳಿ ಬಂದಿರುವ ಹಿನ್ನೆಲೆಯಲ್ಲಿ ರಾಜ್ಯ ಸರ್ಕಾರ ನಿವೃತ್ತ ನ್ಯಾಯಮೂರ್ತಿ ನೇತೃತ್ವದಲ್ಲಿ ಸಮಿತಿ ರಚನೆ ಮಾಡಿದೆ. ಅಲ್ಲದೇ, ಹಗರಣದ ತನಿಖೆ ನಡೆಸಿ ವರದಿ ನೀಡುವಂತೆ ಸೂಚನೆ ನೀಡಿದೆ.
ಸಮಿತಿ ಅಧ್ಯಕ್ಷರಾಗಿರುವ ನಿವೃತ್ತ ನ್ಯಾಯಾಧೀಶ ಮೈಕಲ್ ಡಿ ಕೂನ್ ಕೋವಿಡ್ ಅವಧಿಯಲ್ಲಿ ಬಿಬಿಎಂಪಿಯಲ್ಲಿ ನಡೆದಿರುವ ಹಗರಣದ ಬಗ್ಗೆ ಮಾಹಿತಿ ಕೇಳಿದ್ದಾರೆ. ಸಮಿತಿ ಅಧ್ಯಕ್ಷರ ಅದೇಶದಂತೆ ಪಾಲಿಕೆ ಸುಮಾರು 122 ಅಧಿಕಾರಿಗಳಿಗೆ ನೋಟಿಸ್ ಜಾರಿ ಮಾಡಿದೆ. ಇದೇ ತಿಂಗಳು 22 ರೊಳಗಾಗಿ ಕೋವಿಡ್ ಅವಧಿಯಲ್ಲಿ ನಡೆದಿರುವ ಖರ್ಚು-ವೆಚ್ಚಗಳ ಲೆಕ್ಕ ನೀಡುವಂತೆ ನೋಟಿಸ್ ನಲ್ಲಿ ಸೂಚನೆ ನೀಡಲಾಗಿದೆ. ಇಲ್ಲವಾದರೆ ಕಾನೂನು ರೀತಿ ಕ್ರಮ ಕೈಗೊಳ್ಳಲಾಗುವುದು ಎಂದು ಎಚ್ಚರಿಕೆ ನೀಡಲಾಗಿದೆ. ಹೀಗಾಗಿ ಹಲವು ಅಧಿಕಾರಿಗಳಿಗೆ ನಡುಕ ಶುರುವಾಗಿದೆ.