ಚಿಕ್ಕೋಡಿ: ಕೆಎಸ್ ಆರ್ ಟಿಸಿ (KSRTC) ಬಸ್ ಪಲ್ಟಿಯಾಗಿ ಕಂದಕಕ್ಕೆ ಬಿದ್ದಿರುವ ಘಟನೆಯೊಂದು ನಡೆದಿದೆ.
ಈ ಘಟನೆ ಮಹಾರಾಷ್ಟ್ರದ (Maharashtra) ಸಾಂಗಲಿ ಜಿಲ್ಲೆಯ ಮೀರಜ್ ತಾಲೂಕಿನ ಮೈಶಾಳ ಗ್ರಾಮದಲ್ಲಿ ನಡೆದಿದೆ. ಈ ಘಟನೆಯಲ್ಲಿ ಸುಮಾರು 25ಕ್ಕೂ ಅಧಿಕ ಜನರು ಗಾಯಗೊಂಡಿರುವ ಘಟನೆ ನಡೆದಿದೆ.
ಕರ್ನಾಟಕದ ಕಾಗವಾಡ ತಾಲೂಕಿನ ಗಡಿಯಲ್ಲಿರುವ ಮೈಶಾಳ ಗ್ರಾಮದಲ್ಲಿ ಮೀರಜ್ ನಿಂದ ವಿಜಯಪುರಕ್ಕೆ ತೆರಳುತ್ತಿದ್ದ ಬಸ್ ಪಲ್ಟಿಯಾಗಿ 25 ರಿಂದ 30 ಅಡಿ ಕಂದಕಕ್ಕೆ ಉರುಳಿ ಬಿದ್ದಿದೆ ಎನ್ನಲಾಗಿದೆ. ಈ ಬಸ್ ನಲ್ಲಿ ಸುಮಾರು 40ಕ್ಕೂ ಅಧಿಕ ಜನರು ಪ್ರಯಾಣಿಸುತ್ತಿದ್ದರು ಎನ್ನಲಾಗಿದೆ. ಈ ಪೈಕಿ 25ಕ್ಕೂ ಅಧಿಕ ಜನರು ಗಾಯಗೊಂಡಿದ್ದಾರೆ. ಕೂಡಲೇ ಸ್ಥಳೀಯರು ಜನರನ್ನು ರಕ್ಷಿಸಿ, ಸ್ಥಳೀಯ ಆಸ್ಪತ್ರೆಗೆ ದಾಖಲಿಸಿದ್ದಾರೆ. ಅದೃಷ್ಟವಶಾತ್ ಯಾವುದೇ ಪ್ರಾಣಾಪಾಯ ಸಂಭವಿಸಿಲ್ಲ. ಮೀರಜ್ ಗ್ರಾಮೀಣ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.