ಹಾಸನ: ಲೋಕಸಭೆ ಚುನಾವಣೆ ಬಳಿಕ ರಾಜ್ಯದಲ್ಲಿ ಭುಗಿಲೆದ್ದ “ಪೆನ್ ಡ್ರೈವ್” ಪ್ರಕರಣವು ಮಾಜಿ ಸಿಎಂ ಎಚ್.ಡಿ.ಕುಮಾರಸ್ವಾಮಿ ಹಾಗೂ ಅವರ ಸಹೋದರ ಎಚ್.ಡಿ. ರೇವಣ್ಣ ಕುಟುಂಬಸ್ಥರ ಮಧ್ಯೆ ಅಂತರ ಮೂಡಿಸಿತ್ತು. ಕುಮಾರಸ್ವಾಮಿ ಹಾಗೂ ಅವರ ಪುತ್ರ ನಿಖಿಲ್ ಕುಮಾರಸ್ವಾಮಿ ಅವರು ಅಂತರ ಕಾಪಾಡಿಕೊಂಡಿರುವ ಕುರಿತು ಹೇಳಿಕೆಗಳನ್ನು ನೀಡಿದ್ದರು. ಆದರೀಗ, ಎರಡೂ ಕುಟುಂಬಸ್ಥರು ಒಂದಾಗಿದ್ದಾರೆ.
ಹೌದು, ಜೆಡಿಎಸ್ ಯುವ ಮುಖಂಡ ನಿಖಿಲ್ ಕುಮಾರಸ್ವಾಮಿ ಹಾಗೂ ವಿಧಾನ ಪರಿಷತ್ ಸದಸ್ಯ ಸೂರಜ್ ರೇವಣ್ಣ ಅವರು ಒಂದೇ ವೇದಿಕೆಯಲ್ಲಿ ಕಾಣಿಸಿಕೊಂಡಿದ್ದಾರೆ. ಹಾಸನದಲ್ಲಿ ನಡೆದ ಜೆಡಿಎಸ್ ಕಾರ್ಯಕ್ರಮದಲ್ಲಿ ಸೂರಜ್ ರೇವಣ್ಣ ಹಾಗೂ ನಿಖಿಲ್ ಕುಮಾರಸ್ವಾಮಿ ವೇದಿಕೆ ಹಂಚಿಕೊಂಡಿದ್ದಾರೆ. ಅಲ್ಲದೆ, ಹಾರ ಹಾಕಿಸಿಕೊಳ್ಳುವಾಗ ನಿಖಿಲ್ ಅವರು ಸೂರಜ್ ಅವರನ್ನು ಕೂಡ ಕರೆದಿದ್ದಾರೆ. ಆ ಮೂಲಕ ಎರಡೂ ಕುಟುಂಬಗಳು ಒಂದೇ ಎಂಬ ಸಂದೇಶ ರವಾನಿಸಿದ್ದಾರೆ.
ಪೆನ್ ಡ್ರೈವ್ ಪ್ರಕರಣದ ಬಳಿಕ ಎಚ್.ಡಿ.ಕುಮಾರಸ್ವಾಮಿ ಅವರು ರೇವಣ್ಣ ಕುಟುಂಬದ ಜತೆ ಅಂತರ ಕಾಪಾಡಿಕೊಂಡಿದ್ದರು. ಪ್ರಜ್ವಲ್ ರೇವಣ್ಣ ಸೇರಿ ಯಾರೂ ನನಗೆ ಕ್ಲೋಸ್ ಇಲ್ಲ ಎಂದು ನಿಖಿಲ್ ಕುಮಾರಸ್ವಾಮಿ ಕೂಡ ಹೇಳಿದ್ದರು.
ಪಕ್ಷ ಸಂಘಟನೆಗೆ ಇಳಿದ ನಿಖಿಲ್
ಕೇಂದ್ರ ಸಚಿವ ಎಚ್.ಡಿ.ಕುಮಾರಸ್ವಾಮಿ ಅವರು ಅನಾರೋಗ್ಯದಿಂದ ಚೆನ್ನೈ ಆಸ್ಪತ್ರೆಗೆ ದಾಖಲಾದ ಬೆನ್ನಲ್ಲೇ ನಿಖಿಲ್ ಕುಮಾರಸ್ವಾಮಿ ಅವರು ಪಕ್ಷ ಸಂಘಟನೆಗೆ ಇಳಿದಿದ್ದಾರೆ. ಹಾಸನದಲ್ಲಿ ಅವರು ಚಿಕ್ಕಮಗಳೂರು, ಹಾಸನ, ಶಿವಮೊಗ್ಗ ಭಾಗದ ಜೆಡಿಎಸ್ ಮುಖಂಡರ ಸಭೆ ನಡೆಸಿದ್ದಾರೆ. ಪಕ್ಷ ಸಂಘಟನೆಗೆ ಎಲ್ಲರೂ ಒಗ್ಗೂಡಿ ಕೆಲಸ ಮಾಡೋಣ ಎಂದು ನಿಖಿಲ್ ಕುಮಾರಸ್ವಾಮಿ ಅವರು ವಿಶ್ವಾಸ ತುಂಬಿದ್ದಾರೆ ಎಂದು ತಿಳಿದುಬಂದಿದೆ.