ಬೆಂಗಳೂರು: ರಾಜ್ಯದಲ್ಲಿ ಹಲವು ವರ್ಷಗಳ ಬೇಡಿಕೆಯಾಗಿರುವ ಮಹದಾಯಿ ಹಾಗೂ ಮೇಕೆದಾಟು ಯೋಜನೆಗಳ ಜಾರಿಗೆ ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಪಣ ತೊಟ್ಟಿದ್ದಾರೆ. ಫೆಬ್ರವರಿ 25ರಂದು ಡಿ.ಕೆ.ಶಿವಕುಮಾರ್ ಅವರು ಕೇಂದ್ರ ಜಲಶಕ್ತಿ ಸಚಿವ ಸಿ.ಆರ್.ಪಾಟೀಲ್ ಅವರನ್ನು ಭೇಟಿಯಾಗಲಿದ್ದು, ಎರಡೂ ಯೋಜನೆಗಳ ಜಾರಿ ಕುರಿತು ಮಹತ್ವದ ಮಾತುಕತೆ ನಡೆಸಲಿದ್ದಾರೆ.
ರಾಜಸ್ಥಾನದ ಉದಯಪುರದಲ್ಲಿ ಕೇಂದ್ರ ಜಲಶಕ್ತಿ ಸಚಿವಾಲಯ ನಡೆಸುತ್ತಿರುವ ಅಖಿಲ ಭಾರತ ರಾಜ್ಯಗಳ ಜಲಸಂಪನ್ಮೂಲ ಸಚಿವರ ಸಮ್ಮೇಳನದಲ್ಲಿ ಡಿ.ಕೆ.ಶಿವಕುಮಾರ್ ಅವರು ಭಾಗವಹಿಸಿದ್ದಾರೆ. ಸಮ್ಮೇಳನದಲ್ಲಿ ಸಿ.ಆರ್.ಪಾಟೀಲ್ ಅವರನ್ನು ಭೇಟಿಯಾದ ಡಿ.ಕೆ.ಶಿವಕುಮಾರ್, ರಾಜ್ಯದ ಯೋಜನೆಗಳ ಕುರಿತು ಚರ್ಚಿಸಲು ಭೇಟಿಗೆ ಅವಕಾಶ ಕೋರಿದ್ದಾರೆ. ಇದಕ್ಕೆ ಕೇಂದ್ರ ಸಚಿವರು ಸಮ್ಮತಿ ಸೂಚಿಸಿದ್ದಾರೆ ಎಂಬುದಾಗಿ ಡಿ.ಕೆ.ಶಿವಕುಮಾರ್ ಅವರೇ ಹೇಳಿದ್ದಾರೆ.
ಸಮ್ಮೇಳನದಲ್ಲಿ ಭಾಗವಹಿಸಿದ ಬಳಿಕ ಮಾತನಾಡಿದ ಡಿ.ಕೆ.ಶಿವಕುಮಾರ್, “ಕೇಂದ್ರ ಜಲಶಕ್ತಿ ಸಚಿವರು ಫೆಬ್ರವರಿ 25ರಂದು ಭೇಟಿ ಮಾಡಲು ಸಮ್ಮತಿಸಿದ್ದಾರೆ. ಅವರನ್ನು ಭೇಟಿಯಾಗಿ ಮಹದಾಯಿ, ಮೇಕೆದಾಟು ಹಾಗೂ ಕೃಷ್ಣಾ ಮೇಲ್ದಂಡೆ ಯೋಜನೆಗಳ ಜಾರಿ ಕುರಿತಂತೆ ಚರ್ಚಿಸುತ್ತೇನೆ. ಕೇಂದ್ರ ಸರ್ಕಾರದಿಂದ ಸಕಾರಾತ್ಮಕ ಸ್ಪಂದನೆ ದೊರೆಯುವ ವಿಶ್ವಾಸವಿದೆ” ಎಂದು ತಿಳಿಸಿದ್ದಾರೆ.
ಪ್ರಯಾಗರಾಜ್ ನ ತ್ರಿವೇಣಿ ಸಂಗಮದ ನೀರು ಸ್ನಾನಕ್ಕೆ ಯೋಗ್ಯವಲ್ಲ ಎಂಬ ವರದಿಗಳ ಕುರಿತು ಪ್ರಶ್ನಿಸಿದ್ದಕ್ಕೆ, “ಇದರ ಬಗ್ಗೆ ನಾನು ಪ್ರತಿಕ್ರಿಯೆ ನೀಡುವುದಿಲ್ಲ. ರಾಜ್ಯದ ವಿಚಾರಗಳಿಗೆ ಸಂಬಂಧಿಸಿದಂತೆ ಮಾತ್ರ ಉತ್ತರ ನೀಡುತ್ತೇನೆ” ಎಂದರು. ಕೆಲ ದಿನಗಳ ಹಿಂದೆ ಡಿ.ಕೆ.ಶಿವಕುಮಾರ್ ಅವರು ತ್ರಿವೇಣಿ ಸಂಗಮದಲ್ಲಿ ಪುಣ್ಯಸ್ನಾನ ಮಾಡಿದ್ದರು.