ತುಮಕೂರು: ಇತ್ತೀಚೆಗೆ ಯುವ ಪೀಳಿಗೆಯಲ್ಲಿ ಹೃದಯಾಘಾತ ಹೆಚ್ಚಾಗುತ್ತಿದ್ದು, ಚಿಕ್ಕಮಕ್ಕಳು ಬಲಿಯಾಗುತ್ತಿರುವುದು ಆತಂಕಕ್ಕೆ ಕಾರಣವಾಗುತ್ತಿದೆ. ಜಿಲ್ಲೆಯಲ್ಲಿ ಎಸ್ಸೆಸ್ಸೆಲ್ವಿ ವಿದ್ಯಾರ್ಥಿಯೋರ್ವ ಹೃದಯಾಘಾತಕ್ಕೆ ಬಲಿಯಾಗಿರುವ ಘಟನೆ ನಡೆದಿದೆ.
ಜಿಲ್ಲೆಯ ಚಿಕ್ಕನಾಯಕನಹಳ್ಳಿ ತಾಲೂಕಿನ ಭೈರಾಪುರ ಗ್ರಾಮದಲ್ಲಿ ಈ ಘಟನೆ ನಡೆದಿದೆ. ರಾಹುಲ್ (16) ಹೃದಯಾಘಾತಕ್ಕೆ ಬಲಿಯಾಗಿರುವ ವಿದ್ಯಾರ್ಥಿ ಎನ್ನಲಾಗಿದೆ. ಗ್ರಾಮದ ಜಯರಾಂ ಎಂಬುವವರ ಪುತ್ರ ರಾಹುಲ್, ಚಿಕ್ಕನಾಯಕನಹಳ್ಳಿ ಪಟ್ಟಣದ ಜಿಎಚ್ಎಸ್ ಶಾಲೆಯಲ್ಲಿ ಹತ್ತನೇ ತರಗತಿ ಓದುತ್ತಿದ್ದ. ಶುಕ್ರವಾರ ಎಂದಿನಂತೆ ಶಾಲೆಗೆ ಹೋಗಿ ಮರಳಿ ಮನೆಗೆ ಬಂದಿದ್ದ.
ಆದರೆ, ರಾತ್ರಿ 9.30ರ ವೇಳೆಗೆ ರಾಹುಲ್ ಗೆ ಎದೆ ನೋವು ಕಾಣಿಸಿಕೊಂಡಿದೆ. ಕೂಡಲೇ ಕುಟುಂಬಸ್ಥರು ಹುಳಿಯಾರಿನ ಆಸ್ಪತ್ರೆಗೆ ದಾಖಲಿಸಿದ್ದಾರೆ. ಆದರೆ, ಚಿಕಿತ್ಸೆ ಫಲಕಾರಿಯಾಗದೆ ರಾಹುಲ್ ಸಾವನ್ನಪ್ಪಿದ್ದಾನೆ. ಸ್ಥಳದಲ್ಲಿ ಕುಟುಂಬಸ್ಥರ ಆಕ್ರಂದನ ಮುಗಿಲು ಮುಟ್ಟಿದೆ. ಹುಳಿಯಾರು ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದೆ.